ದೈನಂದಿನ ಜೀವನದಲ್ಲಿ ಆಯುರ್ವೇದ ಪದ್ಧತಿ ಬಳಕೆಯಿಂದ ಆಯುಷ್ಯ ವೃದ್ಧಿಯೊಂದಿಗೆ ಸುಖ-ಶಾಂತಿ, ನೆಮ್ಮದಿಯ ಜೀವನ ನಡೆಸಬಹುದು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.
ಬೆಳ್ತಂಗಡಿ : ದೈನಂದಿನ ಜೀವನದಲ್ಲಿ ಆಯುರ್ವೇದ ಪದ್ಧತಿ ಬಳಕೆಯಿಂದ ಆಯುಷ್ಯ ವೃದ್ಧಿಯೊಂದಿಗೆ ಸುಖ-ಶಾಂತಿ, ನೆಮ್ಮದಿಯ ಜೀವನ ನಡೆಸಬಹುದು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ.
ಶನಿವಾರ ಧರ್ಮಸ್ಥಳದಲ್ಲಿ ಅಮೃತ ವರ್ಷಿಣಿ ಸಭಾಭವನದಲ್ಲಿ ಆಪ್ತಾಸ್ ಆಯುರ್ವೇದ ಟ್ರಸ್ಟ್‌ನ ದಶಮಾನೋತ್ಸವ ಅಂಗವಾಗಿ ಇಂದ್ರಿಯ ಆರೋಗ್ಯದ ಬಗ್ಗೆ ಆಯೋಜಿಸಿದ ಅಂತಾರಾಷ್ಟ್ರೀಯ ಸಮಾವೇಶ ‘ಪುನರ್ವಸು’ವಿನಲ್ಲಿ ಇಂದ್ರಿಯ ಆರೋಗ್ಯ ಅಭಿಯಾನದ ಲೋಗೊ ಅನಾವರಣಗೊಳಿಸಿ, ‘ಚೋಟಾ ಚರಕ’ ಪುಸ್ತಕ ಬಿಡುಗಡೆಗೊಳಿಸಿ ಅವರು ಮಾತನಾಡಿದರು.ಉಡುಪಿ, ಹಾಸನ ಮತ್ತು ಬೆಂಗಳೂರಿನಲ್ಲಿರುವ ಎಸ್‌ಡಿಎಂ ಆಯುರ್ವೇದ ಆಸ್ಪತ್ರೆಗಳ ಮೂಲಕ ರಿಯಾಯಿತಿ ದರದಲ್ಲಿ ಉತ್ತಮ ಗುಣಮಟ್ಟದ ಶುಶ್ರೂಷೆ ನೀಡಿ ಆಯುರ್ವೇದ ಪದ್ಧತಿ ಜನಪ್ರಿಯಗೊಳಿಸಲಾಗುತ್ತಿದೆ. ಪಂಚೇಂದ್ರಿಗಳ ನಿಯಂತ್ರಣದಿಂದ ಆರೋಗ್ಯ ಭಾಗ್ಯ ಹೊಂದಬಹುದು ಎಂದು ಡಾ. ಹೆಗ್ಗಡೆ ಅಭಿಪ್ರಾಯಪಟ್ಟರು.ಸಮಾವೇಶ ಉದ್ಘಾಟಿಸಿದ ಕೇಂದ್ರ ಸರ್ಕಾರದ ಭಾರತೀಯ ಔಷಧ ಪದ್ಧತಿ ರಾಷ್ಟ್ರೀಯ ಪರಿಷತ್ ಅಧ್ಯಕ್ಷ ವೈದ್ಯ ಮನೀಷಾ ಕೋಟೆಕಾರ್ ಮಾತನಾಡಿ, ನಮ್ಮ ದೇಹದ ಪಂಚೇಂದ್ರಿಯಗಳಿಗೂ ಅವಿನಾಭಾವ ಸಂಬಂಧವಿದ್ದು, ಸಾವಿರಾರು ವರ್ಷಗಳಿಂದ ಬಳಸುತ್ತಿರುವ ಪಾರಂಪರಿಕ ಆಯುರ್ವೇದ ಪದ್ಧತಿ ಮೂಲಕ ಪಂಚೇಂದ್ರಿಯಗಳ ಬಲವರ್ಧನೆಯೊಂದಿಗೆ ಆರೋಗ್ಯ ಭಾಗ್ಯ ಹೊಂದಬಹುದು ಎಂದರು.ಉಡುಪಿ ಎಸ್‌ಡಿಎಂ ಆಯುರ್ವೇದ ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ಖ್ಯಾತ ವೈದ್ಯ ಡಾ. ಶರದ್ ಕುಮಾರ್ ಎಂ. ಇಂದ್ರಿಯ ಆರೋಗ್ಯ ಅಭಿಯಾನದ ಬಗ್ಗೆ ಮಾಹಿತಿ ನೀಡಿ, ದೇಶದಲ್ಲಿರುವ 600 ಆಯುರ್ವೇದ ಕಾಲೇಜುಗಳ ಆಶ್ರಯದಲ್ಲಿ ಮುಂದಿನ ೫ ವರ್ಷಗಳಲ್ಲಿ ಪ್ರತಿ ವರ್ಷ ಒಂದು ಗ್ರಾಮವನ್ನು ದತ್ತು ತೆಗೆದುಕೊಂಡು ಅಲ್ಲಿ ೫೦೦ ಮಂದಿ ಸ್ವಯಂ-ಸೇವಕರು ಆಯುರ್ವೇದ ಪದ್ಧತಿ ಬಗ್ಗೆ ಅರಿವು, ಜಾಗೃತಿ ಮೂಡಿಸಲಿದ್ದಾರೆ. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವ ಮತ್ತು ಮಾರ್ಗದರ್ಶನದಲ್ಲಿ ಇಂದು ಧರ್ಮಸ್ಥಳದಿಂದಲೇ ಈ ವಿನೂತನ ಕಾರ್ಯಕ್ರಮ ಶುಭಾರಂಭಗೊಳ್ಳುತ್ತದೆ ಎಂದು ಪ್ರಕಟಿಸಿದರು.
ಆಯುಷ್ ಸಲಹೆಗಾರ ಡಾ. ಕೌಸ್ತುಭ ಉಪಾಧ್ಯಾಯ, ಗ್ರಾಮೀಣ ಪ್ರದೇಶಗಳಲ್ಲಿ ಆಯುರ್ವೇದ ಶಿಬಿರಗಳನ್ನು ಆಯೋಜಿಸಿ ಜನಸಾಮಾನ್ಯರಿಗೆ ಇದರ ಬಗ್ಗೆ ಮಾಹಿತಿ, ಮಾರ್ಗದರ್ಶನ ನೀಡಬೇಕು ಎಂದರು.ಕರ್ನಾಟಕ ಸರ್ಕಾರದ ಆಯುಷ್ ಇಲಾಖೆ ಆಯುಕ್ತ ಡಾ. ಸುನಿಲ್ ಪನ್ವಾರ್ ಮಾತನಾಡಿ, ಆಯುರ್ವೇದ ವೈದ್ಯರು ಪಾರಂಪರಿಕ ಪದ್ಧತಿಯ ರಾಯಭಾರಿಗಳಾಗಿ ಎಲ್ಲ ಕಡೆ ಈ ಪದ್ಧತಿಯನ್ನು ಜನಪ್ರಿಯಗೊಳಿಸಬೇಕು ಎಂದರು.‘ಗುರುವಂದನ’ ಕಾರ್ಯಕ್ರಮದಡಿ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಗೌರವಿಸಲಾಯಿತು.
ಬೆಂಗಳೂರಿನ ಕ್ಷೇಮ ವನದ ಸಿಇಒ ಶ್ರದ್ಧಾ ಅಮಿತ್ ಇದ್ದರು. ಎಸ್‌ಡಿಎಂ ಆಯುರ್ವೇದ ಸಂಸ್ಥೆಗಳ ನಿರ್ದೇಶಕ ಡಾ. ಪ್ರಸನ್ನ ಎನ್. ರಾವ್ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಡಾ. ಕಿರಣ್, ಕೆ. ವಂದಿಸಿದರು. ಡಾ. ಅನುಪಮ ವಿ. ಚಿನ್ನಿಕಟ್ಟಿ ನಿರ್ವಹಿಸಿದರು.ಸಮಾರಂಭಕ್ಕೆ ಪೂರ್ವಾಭಾವಿಯಾಗಿ, ‘ಸಂಹಿತಾ’ ಮೆರವಣಿಗೆ, ಪ್ರತಿಷ್ಠಾಪನೆ, ವಾದ್ಯ ಮೇಳ, ಶಂಖನಾದ, ಸಂಹಿತಾ ಪ್ರತಿಷ್ಠಾಪನೆ ಮೊದಲಾದ ಸಾಂಪ್ರದಾಯಿಕ ಕಾರ್ಯಕ್ರಮಗಳು ನಡೆದವು.