ಮಕ್ಕಳ ಮೇಲಿನ ದೌರ್ಜನ್ಯಕ್ಕೆ ಕಡಿವಾಣ ಹಾಕಲು ಮನವಿ

| Published : Oct 31 2024, 12:51 AM IST

ಸಾರಾಂಶ

ಸೂಕ್ಷ್ಮತೆಯಿಂದ ಆಲೋಚಿಸಿ ಮಕ್ಕಳ ಪ್ರಕರಣಗಳನ್ನು ಬಗೆಹರಿಸಬೇಕು. ಪ್ರಕರಣಗಳನ್ನು ಇತ್ಯರ್ಥಗೊಳಿಸುವ ವೇಳೆ ಮಕ್ಕಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಳ್ಳಬೇಕು. ಎಲ್ಲಾ ಇಲಾಖೆ ಅಧಿಕಾರಿಗಳು ಬಾಲ ಕಾರ್ಮಿಕ ನಿಷೇಧ ಕಾಯ್ದೆ, ಫೋಕ್ಸೋ ಕಾಯಿದೆ, ಬಾಲ್ಯ ವಿವಾಹ ಹಾಗೂ ಭ್ರೂಣಹತ್ಯೆ ತಡೆಯುವಲ್ಲಿ ಹೆಚ್ಚು ಕಾಳಜಿ ವಹಿಸಬೇಕು.

ಕನ್ನಡಪ್ರಭ ವಾರ್ತೆ ಮಂಡ್ಯ

ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ. ಇದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕಾನೂನನ್ನು ಬಿಗಿಗೊಳಿಸಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಮಿಕ್ಕೆರೆ ವೆಂಕಟೇಶ್ ಮನವಿ ಮಾಡಿದರು.

ನಗರದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿಯಲ್ಲಿ ನಡೆದ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಮನ್ವಯ ಮತ್ತು ಸಹಕಾರ ಸಭೆಯಲ್ಲಿ ಮಾತನಾಡಿದರು.

ಸೂಕ್ಷ್ಮತೆಯಿಂದ ಆಲೋಚಿಸಿ ಮಕ್ಕಳ ಪ್ರಕರಣಗಳನ್ನು ಬಗೆಹರಿಸಬೇಕು. ಪ್ರಕರಣಗಳನ್ನು ಇತ್ಯರ್ಥಗೊಳಿಸುವ ವೇಳೆ ಮಕ್ಕಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಳ್ಳಬೇಕು. ಎಲ್ಲಾ ಇಲಾಖೆ ಅಧಿಕಾರಿಗಳು ಬಾಲ ಕಾರ್ಮಿಕ ನಿಷೇಧ ಕಾಯ್ದೆ, ಫೋಕ್ಸೋ ಕಾಯಿದೆ, ಬಾಲ್ಯ ವಿವಾಹ ಹಾಗೂ ಭ್ರೂಣಹತ್ಯೆ ತಡೆಯುವಲ್ಲಿ ಹೆಚ್ಚು ಕಾಳಜಿ ವಹಿಸಬೇಕು ಎಂದರು.

ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ಪುಟ್ಟಸ್ವಾಮಿ ಮಾತನಾಡಿ, ಒಂದು ಇಲಾಖೆಯಿಂದ ಮಕ್ಕಳ ರಕ್ಷಣೆ ಅಸಾಧ್ಯ. ಮಕ್ಕಳ ರಕ್ಷಣೆ ಹೊಣೆ ಪ್ರತಿಯೊಬ್ಬರ ಮೇಲಿದೆ. ಮಕ್ಕಳ ಮೇಲಿನ ದೌರ್ಜನ್ಯ ಕಂಡುಬಂದ ಕೂಡಲೇ ಅದಕ್ಕೆ ತಕ್ಷಣವೇ ಸ್ಪಂದಿಸಬೇಕು. ಮಕ್ಕಳನ್ನು ದೌರ್ಜನ್ಯದಿಂದ ಪಾರು ಮಾಡಿ ಮತ್ತು ಅವರಿಗೆ ಹಕ್ಕುಗಳನ್ನು ದೊರಕಿಸಿಕೊಡಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಶ್ಮಿ, ಡಿವೈಎಸ್‌ಪಿ ಮಂಡ್ಯ ವಿಭಾಗ ರಮೇಶ್‌, ಮಕ್ಕಳ ರಕ್ಷಣಾಧಿಕಾರಿ ರಾಜೇಂದ್ರ ಸೇರಿದಂತೆ ವಿವಿಧ ಇಲಾಖೆಯು ಅಧಿಕಾರಿಗಳು ಭಾಗವಹಿಸಿದ್ದರು.