ಕಾಡು ಪ್ರಾಣಿಗಳ ಹಾವಳಿ ತಡೆಗಟ್ಟುವಂತೆ ಮನವಿ

| Published : Feb 03 2024, 01:46 AM IST

ಸಾರಾಂಶ

ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಕಾಡು ಪ್ರಾಣಿಗಳ ಹಾವಳಿ ತಡೆಗಟ್ಟುವಂತೆ ಮನವಿ ಮಾಡಿದರೂ ಯಾವುದೆ ಪ್ರಯೋಜನವಾಗಿಲ್ಲ ನಮ್ಮ ಸಮಸ್ಯೆಯನ್ನು ಬಗೆಹರಿಸದಿದ್ದರೆ ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡುವುದಾಗಿ ಜಿಲ್ಲಾ ರೈತ ಸಂಘ ಹಾಗೂ ಹಸಿರು ಸೇನೆ ಅಧ್ಯಕ್ಷ ಹೊನ್ನೂರು ಪ್ರಕಾಶ್ ತಿಳಿಸಿದರು

ಕನ್ನಡಪ್ರಭ ವಾರ್ತೆ ಹನೂರು ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಕಾಡು ಪ್ರಾಣಿಗಳ ಹಾವಳಿ ತಡೆಗಟ್ಟುವಂತೆ ಮನವಿ ಮಾಡಿದರೂ ಯಾವುದೆ ಪ್ರಯೋಜನವಾಗಿಲ್ಲ ನಮ್ಮ ಸಮಸ್ಯೆಯನ್ನು ಬಗೆಹರಿಸದಿದ್ದರೆ ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡುವುದಾಗಿ ಜಿಲ್ಲಾ ರೈತ ಸಂಘ ಹಾಗೂ ಹಸಿರು ಸೇನೆ ಅಧ್ಯಕ್ಷ ಹೊನ್ನೂರು ಪ್ರಕಾಶ್ ತಿಳಿಸಿದರು.

ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಾದ ಒಡೆಯರಪಾಳ್ಯ, ಪಿಜಿ ಪಾಳ್ಯ, ಬೋರೆದೊಡ್ಡಿ, ಬೂದಿಪಡಗ, ಆಂಡಿಪಾಳ್ಯ, ಲೋಕ್ಕನಹಳ್ಳಿ, ಕಂಡಯ್ಯನಪಾಳ್ಯ ಗ್ರಾಮಗಳಲ್ಲಿ ಕಾಡು ಪ್ರಾಣಿಗಳ ಹಾವಳಿಯಿಂದ ತೆಂಗಿನಮರ ಹಾಗೂ ಜಮೀನಿನಲ್ಲಿ ಬೆಳೆದಿರುವ ಬೆಳೆಗಳೆಲ್ಲ ನಾಶವಾಗುತ್ತಿದೆ. ಈ ಸಂಬಂಧ ಲೊಕ್ಕನಹಳ್ಳಿ ಸಫಾರಿ ಕೇಂದ್ರದಲ್ಲಿ ಅಧಿಕಾರಿಗಳನ್ನು ಭೇಟಿ ಮಾಡಿ ಸಮಸ್ಯೆ ಬಗೆಹರಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲು ಹಲವಾರು ರೈತ ಮುಖಂಡರು ತೆರಳಿದ್ದರು. ಆದರೆ ಹಿರಿಯ ಅಧಿಕಾರಿಗಳು ಯಾರೊಬ್ಬರು ಬಾರದೆ ಇರುವುದರಿಂದ ಫೆ.5 ರಂದು ರಸ್ತೆ ತಡೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿ ಹಾಗೂ ಮಲೆ ಮಾದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ಜಮೀನುಗಳಲ್ಲಿ ಕಾಡು ಪ್ರಾಣಿಗಳಾದ ಆನೆ, ಹಂದಿ, ನವಿಲು, ಚಿರತೆ ಸೇರಿದಂತೆ ಇನ್ನಿತರ ಪ್ರಾಣಿಗಳಿಂದ ರೈತರು ಬೆಳೆದಿರುವ ಬೆಳೆಗಳಿಗೆ ಹಾನಿಯಾಗುತ್ತಿದೆ. ಆದರೆ ಅರಣ್ಯ ಇಲಾಖೆಯವರು ವೈಜ್ಞಾನಿಕವಾಗಿ ಬೆಳೆ ಪರಿಹಾರ ನೀಡದಿರುವುದರಿಂದ ರೈತರಿಗೆ ತೀವ್ರ ತೊಂದರೆಯಾಗುತ್ತಿದೆ. ಇದಲ್ಲದೆ ಹಂದಿ ಹಾವಳಿಯಿಂದ ಆಗುವ ಬೆಳೆ ನಾಶಕ್ಕೆ ಪರಿಹಾರ ನೀಡದೆ ಇರುವುದರಿಂದ ಬೆಳೆಗಳು ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ ಆದ್ದರಿಂದ ಸಂಬಂಧಪಟ್ಟ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ನಮ್ಮ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಒತ್ತಾಯಿಸಿದರು.ಮಲೆ ಮಾದೇಶ್ವರ ಬೆಟ್ಟದಿಂದ ಚಾಮರಾಜನಗರದವರೆಗೆ ಜಿಲ್ಲೆಯಾದ್ಯಂತ ರೈತರಿಗೆ ಇರುವ ಹಲವು ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಪಾದಯಾತ್ರೆ ನಡೆಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಗಮನಕ್ಕೆ ತರಲಾಗಿತ್ತು. ಈ ಸಂದರ್ಭದಲ್ಲಿ ಉಸ್ತುವಾರಿ ಸಚಿವರು ನಿಮ್ಮ ಏನೇ ಸಮಸ್ಯೆಗಳಿದ್ದರೂ ನಮ್ಮ ಗಮನಕ್ಕೆ ತನ್ನಿ ಪ್ರತಿಭಟನೆ ನಡೆಸುವುದು ಬೇಡ ಎಂದು ತಿಳಿಸಿದ್ದರು. ಅದರಂತೆ ನಮ್ಮ ಸಮಸ್ಯೆಗಳನ್ನು ಮಾಧ್ಯಮದ ಮೂಲಕ ಜಿಲ್ಲಾ ಉಸ್ತುವಾರಿ ಸಚಿವರಿಗೆ ತಿಳಿಸುತ್ತಿದ್ದೇವೆ. ಫೆಬ್ರವರಿ ೫ರಂದು ಮಧ್ಯಾಹ್ನ 12 ಗಂಟೆಯ ಒಳಗೆ ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ಹಾಗೂ ಮಲೆ ಮಾದೇಶ್ವರ ವನ್ಯಜೀವಿಧಾಮದ ಉಪ ಸಂರಕ್ಷಣಾಧಿಕಾರಿಗಳು ಭೇಟಿ ನೀಡಿ ನಮ್ಮ ಸಮಸ್ಯೆಗಳ ಬಗ್ಗೆ ಸೂಕ್ತ ಭರವಸೆ ನೀಡಬೇಕು. ಇಲ್ಲದಿದ್ದರೆ ಹಸು, ಎಮ್ಮೆ, ಮೇಕೆ ಕೋಳಿ, ಸೇರಿದಂತೆ ಸಾಕು ಪ್ರಾಣಿಗಳನ್ನು ತಂದು ರಸ್ತೆಯಲ್ಲಿ ಬಿಟ್ಟು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಮಾಧ್ಯಮದ ಮೂಲಕ ಎಚ್ಚರಿಕೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಐವತ್ತಕ್ಕೂ ಹೆಚ್ಚು ರೈತ ಮುಖಂಡರು ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.1ಸಿಎಚ್‌ಎನ್‌12

ಹನೂರು ತಾಲೂಕಿನ ಅರಣ್ಯದಂಚಿನ ರೈತರ ಜಮೀನುಗಳಿಗೆ ಕಾಡು ಪ್ರಾಣಿಗಳು ಬಂದು ಬೆಳೆ ನಾಶಪಡಿಸುತ್ತಿದೆ. ಕ್ರಮ ಕೈಗೊಳ್ಳದಿದ್ದಲ್ಲಿ ಫೆಬ್ರವರಿ 5, ರಂದು ರಸ್ತೆ ತಡೆ ಮಾಡುವುದಾಗಿ ರೈತ ಸಂಘ ಜಿಲ್ಲಾಧ್ಯಕ್ಷ ಪ್ರಕಾಶ್ ತಿಳಿಸಿದರು.