ಅಧಿವೇಶನಕ್ಕೆ ದೋಸ್ತಿಗಳ ಒಗ್ಗಟ್ಟಿನ ಜಪ

| N/A | Published : Aug 11 2025, 12:30 AM IST / Updated: Aug 11 2025, 11:44 AM IST

ಸಾರಾಂಶ

ಸೋಮವಾರದಿಂದ ಆರಂಭವಾಗಲಿರುವ ವಿಧಾನಮಂಡಲ ಅಧಿವೇಶನದಲ್ಲಿ ಸರ್ಕಾರವನ್ನು ತರಾಟೆ ತೆಗೆದುಕೊಳ್ಳಲು ಅನುಸರಿಸಬೇಕಾದ ಕಾರ್ಯತಂತ್ರಗಳ ಕುರಿತು ಭಾನುವಾರ ಸಂಜೆ ಖಾಸಗಿ ಹೋಟೆಲ್‌ನಲ್ಲಿ ನಡೆದ ಬಿಜೆಪಿ-ಜೆಡಿಎಸ್‌ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚಿಸಲಾಗಿದೆ.

 ಬೆಂಗಳೂರು :  ಸೋಮವಾರದಿಂದ ಆರಂಭವಾಗಲಿರುವ ವಿಧಾನಮಂಡಲ ಅಧಿವೇಶನದಲ್ಲಿ ಸರ್ಕಾರವನ್ನು ತರಾಟೆ ತೆಗೆದುಕೊಳ್ಳಲು ಅನುಸರಿಸಬೇಕಾದ ಕಾರ್ಯತಂತ್ರಗಳ ಕುರಿತು ಭಾನುವಾರ ಸಂಜೆ ಖಾಸಗಿ ಹೋಟೆಲ್‌ನಲ್ಲಿ ನಡೆದ ಬಿಜೆಪಿ-ಜೆಡಿಎಸ್‌ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚಿಸಲಾಗಿದೆ.

ರಸಗೊಬ್ಬರ ಕೊರತೆ, ಆರ್‌ಸಿಬಿ ವಿಜಯೋತ್ಸವದಲ್ಲಿ ಸಂಭವಿಸಿದ ಕಾಲ್ತುಳಿತ, ಮತಗಳ್ಳತನ ಆರೋಪ ಮತ್ತಿತರ ವಿಷಯಗಳನ್ನು ಸದನದಲ್ಲಿ ಪ್ರಸ್ತಾಪಿಸಿ ಆಡಳಿತಾರೂಢ ಕಾಂಗ್ರೆಸ್‌ ಪಕ್ಷವನ್ನು ಹೇಗೆ ಇಕ್ಕಟ್ಟಿಗೆ ಸಿಲುಕಿಸಬೇಕು ಎಂಬ ಬಗ್ಗೆ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚೆಯಾಗಿದೆ. ಜತೆಗೆ ಅಧಿವೇಶನ ಆರಂಭಕ್ಕೂ ಮುನ್ನ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಧರಣಿಯನ್ನೂ ನಡೆಸಿ ಆರ್‌ಸಿಬಿ ವಿಜಯೋತ್ಸವ ಸಂದರ್ಭದಲ್ಲಿ ಸರ್ಕಾರದ ಆಡಳಿತ ವೈಫಲ್ಯದಿಂದಾಗಿ ಕಾಲ್ತುಳಿತ ಸಂಭವಿಸಿ ಅಮಾಯಕರು ಬಲಿಯಾಗಿದ್ದನ್ನು ಖಂಡಿಸಲೂ ಬಿಜೆಪಿ-ಜೆಡಿಎಸ್‌ ನಿರ್ಧರಿಸಿವೆ.

ಸಮನ್ವಯ ಸಮಿತಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸೋಮವಾರದಿಂದ ಆರಂಭವಾಗುವ ಅಧಿವೇಶನದಲ್ಲಿ ಸರ್ಕಾರಕ್ಕೆ ಚಾಟಿ ಬೀಸುವ ನಿಟ್ಟಿನಲ್ಲಿ ನಾವು ಕಾರ್ಯೋನ್ಮುಖವಾಗಲಿದ್ದೇವೆ. ಸದನದಲ್ಲಿ ಯಾವ್ಯಾವ ವಿಚಾರಗಳನ್ನು ಪ್ರಸ್ತಾಪಿಸಬೇಕು ಎಂದು ಚರ್ಚೆ ನಡೆಸಿದೆವು. 15 ರಿಂದ 20 ದಿನ ಅಧಿವೇಶನ ನಡೆಯಬೇಕಿತ್ತು. ಆದರೆ ಇದನ್ನು 8 ರಿಂದ 9 ದಿನಗಳಿಗೆ ಸೀಮಿತ ಮಾಡಿ ಕಾಟಾಚಾರಕ್ಕೆ ಅಧಿವೇಶನ ನಡೆಸುತ್ತಿದ್ದಾರೆ ಎಂದು ಟೀಕಿಸಿದರು.

ರೈತರ ಸಮಸ್ಯೆಯನ್ನು ಅಧಿವೇಶನದಲ್ಲಿ ವಿಶೇಷವಾಗಿ ಚರ್ಚಿಸಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಉತ್ತರ ಕರ್ನಾಟಕಕ್ಕೆ ಮಾಡುತ್ತಿರುವ ಅನ್ಯಾಯ, ಜನ ವಿರೋಧಿ, ಬಡವರ ವಿರೋಧಿ, ರೈತ ವಿರೋಧಿ, ಭ್ರಷ್ಟಾಚಾರಿ ಸರ್ಕಾರ ರಾಜ್ಯದಲ್ಲಿದ್ದು ಇಂಥ ಕಾಂಗ್ರೆಸ್ ಸರ್ಕಾರಕ್ಕೆ ಚಾಟಿ ಬೀಸುವ ಕೆಲಸ ಮಾಡಲಿದ್ದೇವೆ. ಸರ್ಕಾರಕ್ಕೆ ಛೀಮಾರಿ ಹಾಕುತ್ತೇವೆ ಎಂದು ಸ್ಪಷ್ಟಪಡಿಸಿದರು.

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ.ಸುರೇಶ್‌ಬಾಬು, ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು. 

ಕಾಲ್ತುಳಿತ ಖಂಡಿಸಿ ದೋಸ್ತಿಗಳ ಪ್ರತಿಭಟನೆ

ರಾಜ್ಯ ಸರ್ಕಾರದ ಆಡಳಿತ ವೈಫಲ್ಯದಿಂದಾಗಿ ಆರ್‌ಸಿಬಿ ವಿಜಯೋತ್ಸವ ಸಂದರ್ಭದಲ್ಲಿ 11 ಅಮಾಯಕರು ಮೃತಪಟ್ಟಿದ್ದಾರೆ ಎಂದು ಆರೋಪಿಸಿ ಸೋಮವಾರ ಬೆಳಗ್ಗೆ 10.30ಕ್ಕೆ ಬಿಜೆಪಿ ಮತ್ತು ಜೆಡಿಎಸ್‌ ಶಾಸಕರು ವಿಧಾನಸೌಧದ ಬಳಿಯ ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಲಿದ್ದಾರೆ.

Read more Articles on