ಸಾರಾಂಶ
ಕನ್ನಡಪ್ರಭ ವಾರ್ತೆ ಇಂಡಿ
ತಳವಾರ ಸಮುದಾಯಕ್ಕೆ ಎಸ್ಟಿ ಪ್ರಮಾಣ ಪತ್ರ ನೀಡಲು ಸರ್ಕಾರ ಹಿಂದೇಟು ಹಾಕುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ರಾಜ್ಯ ಸರ್ಕಾರದ ವಿರುದ್ದ ತಳವಾರ ಸಮುದಾಯದ ನ್ಯಾಯಯುತ ಬೇಡಿಕೆಗಾಗಿ ಅ.14 ರಂದು ವಿಜಯಪುರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ ಎಂದು ತಳವಾರ ಸಮುದಾಯ ಯುವ ಮುಖಂಡ ಹಾಗೂ ಬಿಜೆಪಿ ಎಸ್ಟಿ ಮೋರ್ಚಾ ಜಿಲ್ಲಾಧ್ಯಕ್ಷ ರವಿ ವಗ್ಗೆ (ಭುಯ್ಯಾರ) ಹೇಳಿದರು.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ತಳವಾರ ಜಾತಿಯನ್ನು ಸಂವಿಧಾನ ಬದ್ಧವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪರಿಶಿಷ್ಟ ಪಂಗಡ(ಎಸ್ಟಿ) ಪಟ್ಟಿಗೆ ಸೇರ್ಪಡೆಗೊಳಿಸಿ ಪ್ರಮಾಣ ಪತ್ರ ನೀಡಿದ್ದರೂ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಎಸ್ಪಿ ಜಾತಿ ಪ್ರಮಾಣ ಪತ್ರ ನೀಡಲು ಹಿಂದೇಟು ಹಾಕುತ್ತಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯನವರೇ ಕೆಲವು ದಿನಗಳ ಹಿಂದೆ ಪತ್ರಿಕೆ ಹೇಳಿಕೆ ನೀಡಿದ್ದು ನೋಡಿದರೆ ತಳವಾರ ಸಮುದಾಯಕ್ಕೆ ಅನ್ಯಾಯ ಮಾಡುವ ಮುನ್ಸೂಚನೆ ಕಾಣುತ್ತಿದೆ. ವಿಜಯಪುರ ಜಿಲ್ಲೆಯಲ್ಲಿನ ತಳವಾರ ಸಮುದಾಯಕ್ಕೆ ಎಸ್ಟಿ ಪ್ರಮಾಣ ಪತ್ರ ನೀಡಲು ಹಿಂದೇಟು ಹಾಕುವ ಹಾಗೇನಾದರೂ ತಳವಾರ ಸಮುದಾಯದಕ್ಕೆ ಕೈ ಹಚ್ಚಿದ್ದರೆ, ಜೇನಿನ ಗೂಡಿಗೆ ಕೈ ಹಾಕಿದ ಪರಿಸ್ಥಿತಿ ಎದುರಿಸಬೇಕಾಗುತ್ತದೆ. ಈ ಸಂಬಂಧ ಅ.14 ರಂದು ವಿಜಯಪುರ ನಗರದ ಸಿದ್ದೇಶ್ವರ ದೇವಸ್ಥಾನದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದ್ದು, ಜಿಲ್ಲೆಯ ಸಮಾಜದ ಬಂಧುಗಳು ಭಾಗವಹಿಸಿ ಪ್ರತಿಭಟನೆ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ.