ಸಾರಾಂಶ
ಕನ್ನಡಪ್ರಭ ವಾರ್ತೆ, ತುಮಕೂರುಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೆಪ್ಟೆಂಬರ್ 15 ರಂದು ಜಿಲ್ಲೆಯಲ್ಲಿ ನಿರ್ಮಿಸಲಾಗುವ 90 ಕಿ.ಮೀ. ಉದ್ದದ ಮಾನವ ಸರಪಳಿ ಕಾರ್ಯಕ್ರಮಕ್ಕೆ ಎಲ್ಲಾ ಅಧಿಕಾರಿ/ಸಿಬ್ಬಂದಿಗಳು, ಉಪನ್ಯಾಸಕರು, ನೌಕರರು, ಶಿಕ್ಷಕರು, ಕಾಲೇಜು ವಿದ್ಯಾರ್ಥಿಗಳು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸರ್ಕಾರ ನಿಗಧಿಪಡಿಸಿರುವ ಕ್ಯೂಆರ್ ಕೋಡ್ ಮೂಲಕ ನೋಂದಣಿ ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ ಮಾಡಿದ್ದಾರೆ. ಈಗಾಗಲೇ ನೋಂದಣಿ ಕಾರ್ಯ ಪ್ರಾರಂಭವಾಗಿದ್ದು, ಎಲ್ಲರೂ ಕೂಡಲೇ ಮಾನವ ಸರಪಳಿ ಕಾರ್ಯಕ್ರಮಕ್ಕೆ ನೋಂದಣಿ ಮಾಡಿಕೊಳ್ಳುವ ಮೂಲಕ ಜಿಲ್ಲೆಗೆ ಉತ್ತಮ ಸ್ಥಾನ ದೊರೆಯುವಂತೆ ಮಾಡಬೇಕು. ನೋಂದಣಿ ಮಾಡಿಕೊಂಡವರಿಗೆ ಪ್ರಮಾಣ ಪತ್ರ ನೀಡಲಾಗುವುದು ಎಂದು ಮನವಿ ಮಾಡಿದ್ದಾರೆ. ಜಿಲ್ಲೆಯ ಚಿಕ್ಕನಾಯಕನಹಳ್ಳಿ, ತುರುವೇಕೆರೆ ತಾಲೂಕು ಮಣಿಚೆಂಡೂರು, ಶಿರಾ ತಾಲೂಕು ಹುಲಿಕುಂಟೆಯಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಗುಬ್ಬಿ ತಾಲೂಕು ನಿಟ್ಟೂರಿನ ಇಂದಿರಾಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಂದ ಪೋಷಕರಿಗೆ ಪತ್ರ ಬರೆಯುವ ಮೂಲಕ ವಿನೂತನವಾಗಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಮಾನವ ಸರಪಳಿಯಲ್ಲಿ ಭಾಗವಹಿಸುವಂತೆ ಜಾಗೃತಿ ಮೂಡಿಸಲಾಯಿತು. ಗುಬ್ಬಿ ತಾಲೂಕು ಮಾವಿನಹಳ್ಳಿಯ ಡಾ: ಬಿ.ಆರ್. ಅಂಬೇಡ್ಕರ್, ತುರುವೇಕೆರೆ ಅರೆ ಮಲ್ಲನಹಳ್ಳಿಯ ಕಿತ್ತೂರು ರಾಣಿ ಚೆನ್ನಮ್ಮ, ಚಿಕ್ಕನಹಳ್ಳಿಯ ಮುರಾರ್ಜಿ ದೇಸಾಯಿ ಹಾಗೂ ಬಿ.ಕೆ. ಗುಡ್ಡದ ಮೊರಾರ್ಜಿ ದೇಸಾಯಿ, ಹೂವಿನಕಟ್ಟೆಯ ಕಿತ್ತೂರು ರಾಣಿ ಚೆನ್ನಮ್ಮ, ಮೇಲನಹಳ್ಳಿಯ ಮೊರಾರ್ಜಿ ದೇಸಾಯಿ ಹಾಗೂ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳಲ್ಲಿ ಜಾಗೃತಿ ಜಾಥಾ ಕಾರ್ಯಕ್ರಮ; ತುಮಕೂರು ತಾಲೂಕು ತಿಮ್ಮಸಂದ್ರದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ವಿದ್ಯಾರ್ಥಿಗಳಿಂದ ಅರಿವು ಕಾರ್ಯಕ್ರಮ; ತಿಪಟೂರು ತಾಲೂಕು ಕಂಪಾರಹಳ್ಳಿಯ ಡಾ: ಬಿ.ಆರ್. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ, ಕೋಳಾಲದ ಡಾ: ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯಲ್ಲಿ ಮಾನವ ಸರಪಳಿ ನಿರ್ಮಾಣ ಮಾಡುವ ಮೂಲಕ ಪ್ರಜಾಪ್ರಭುತ್ವ ದಿನಾಚರಣೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ ತಿಳಿಸಿದ್ದಾರೆ.