ಸಾರಾಂಶ
ಗದಗ: ರಾಜ್ಯದಲ್ಲಿ ಬಡತನ ನಿರ್ಮೂಲನೆಗಾಗಿ ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನಗೊಳಿಸಲಾಗಿದೆ. ಇದರಿಂದ ಬಡವರ ಬಾಳಲ್ಲಿ ಅಗಾಧವಾದ ಆರ್ಥಿಕ ಸ್ವಾವಲಂಬನೆ ಮೂಡುವುದರೊಂದಿಗೆ ಕ್ರಾಂತಿಕಾರಕ ಬದಲಾವಣೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ. ಪಾಟೀಲ ಹೇಳಿದರು.ಅವರು ಜಿಪಂ ಸಭಾಂಗಣದಲ್ಲಿ ಗುರುವಾರ ನಡೆದ ಗದಗ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆ ಉದ್ಘಾಟಿಸಿ ಮಾತನಾಡಿ, ಗ್ಯಾರಂಟಿ ಯೋಜನೆಯ ಅನುಷ್ಠಾನದಿಂದ 1.10 ಕೋಟಿ ಕುಟುಂಬಗಳನ್ನು ಬಡತನ ರೇಖೆಯಿಂದ ಮೇಲೆತ್ತಲಾಗಿದೆ. ಬಡಜನರಿಗೆ ಆತ್ಮಾಭಿಮಾನ, ಸ್ವಾಭಿಮಾನ ಕುದುರಿಸುವ ಕೆಲಸವಾಗಿದೆ ಎಂದರು.
ಉಳಿದ ಅರ್ಹರಿಗೆ ಗ್ಯಾರಂಟಿ ಯೋಜನೆಗಳ ಸೌಲಭ್ಯ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕಾರ್ಯ ನಿರ್ವಹಿಸಬೇಕು. ದೇಶದಲ್ಲಿಯೇ ಮೊಟ್ಟ ಮೊದಲ ಬಾರಿಗೆ ರಾಜ್ಯ ಸರ್ಕಾರ ₹50 ಸಾವಿರ ಕೋಟಿಗಳ ಯೋಜನೆಯನ್ನು ಭ್ರಷ್ಟಾಚಾರವಿಲ್ಲದೇ ಜನರಿಗೆ ತಲುಪಿಸುವ ಕೆಲಸ ಮಾಡಿದೆ. ಇದು ಸರ್ಕಾರದ ಮಹತ್ಸಾಧನೆಯಾಗಿದೆ ಎಂದರು.ಪಂಚಗ್ಯಾರಂಟಿ ಯೋಜನೆಗಳಾದ ಗೃಹಜ್ಯೋತಿ, ಗೃಹಲಕ್ಷ್ಮೀ, ಅನ್ನಭಾಗ್ಯ, ಶಕ್ತಿ, ಯುವನಿಧಿ ಯೋಜನೆಗಳು 100 % ರಷ್ಟು ಸಾಧನೆಯಾಗಬೇಕು.ಈ ನಿಟ್ಟಿನಲ್ಲಿ ಸಂಬಂಧಿತ ಅಧಿಕಾರಿಗಳು ಸೇವಾ ಮನೋಭಾವದಿಂದ ಯೋಜನೆಯ ಸೌಲಭ್ಯ ಮನೆ ಮನೆಗೆ ತಲುಪಿಸುವ ಕೆಲಸವಾಗಬೇಕು.ಯೋಜನೆಗಳು ದುರ್ಬಳಕೆಯಾಗದಂತೆ ಎಚ್ಚರಿಕೆ ವಹಿಸಬೇಕು. ಪ್ರಜಾಪ್ರಭುತ್ವ ದಿನಾಚರಣೆಯ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಗದಗ ಜಿಲ್ಲೆ ಮುಂಚೂಣಿಯಲ್ಲಿದ್ದು, ಸಂತಸದ ವಿಷಯವಾಗಿದೆ. ಅದೇ ರೀತಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿಯೂ ಸಹ ಜಿಲ್ಲೆಯು ಅಗ್ರ ಸ್ಥಾನದಲ್ಲಿರುವಂತೆ ಕ್ರಮ ವಹಿಸಬೇಕು ಎಂದು ನಿರ್ದೇಶನ ನೀಡಿದರು.
ಗದಗ ತಾಲೂಕ ಮಟ್ಟದ ಗ್ಯಾರಂಟಿ ಯೋಜನಾ ಸಮಿತಿಯ ಅಧ್ಯಕ್ಷ ಅಶೋಕ ಮಂದಾಲಿ ಮಾತನಾಡಿ, ರಾಜ್ಯ ಸರ್ಕಾರ ಬಡಜನರ ಶ್ರೇಯೋಭಿವೃದ್ಧಿಗೆ ಪಂಚ ಗ್ಯಾರಂಟಿ ಯೋಜನೆ ಜಾರಿಗೆ ತಂದಿದೆ. ಪ್ರತಿ ಕುಟುಂಬಕ್ಕೆ ಪ್ರತಿ ತಿಂಗಳಿಗೆ ₹5 ಸಾವಿರಗಳಂತೆ ವಾರ್ಷಿಕ ₹ 60,000 ಅರ್ಹ ಫಲಾನುಭವಿಯ ಖಾತೆ ನೇರವಾಗಿ ಜಮಾ ಮಾಡುವ ಉದ್ದೇಶ ಈ ಯೋಜನೆಯದಾಗಿದೆ. ಜಿಲ್ಲೆಯಲ್ಲಿ ಪ್ರಥಮ ತಾಲೂಕು ಮಟ್ಟದ ಗ್ಯಾರಂಟಿ ಪ್ರಗತಿ ಪರಿಶೀಲನಾ ಸಮಿತಿ ಸಭೆ ನಡೆಸಲಾಗುತ್ತಿದೆ. ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಗದಗ ವಿಧಾನಸಭಾ ಕ್ಷೇತ್ರವನ್ನು ರಾಜ್ಯದಲ್ಲಿಯೇ ಪ್ರಥಮ ಸ್ಥಾನಕ್ಕೆ ಬರಲು ಎಲ್ಲರು ಶ್ರಮಿಸೋಣ ಎಂದರು.ಈ ವೇಳೆ ಗ್ಯಾರಂಟಿ ಯೋಜನೆಯ ಸಂಬಂಧಿತ ಅಧಿಕಾರಿಗಳು ಗದಗ ತಾಲೂಕಿನಲ್ಲಿ ಪಂಚ್ ಗ್ಯಾರಂಟಿ ಯೋಜನೆಗಳ ಪ್ರಗತಿ ಸಾಧನೆ ಕುರಿತು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕಬರಸಾಬ ಬಬರ್ಜಿ, ಜಿಲ್ಲಾ ಮಟ್ಟದ ಗ್ಯಾರಂಟಿ ಸಮಿತಿ ಅಧ್ಯಕ್ಷ ಬಿ.ಬಿ. ಅಸೂಟಿ, ಜಿಪಂ ಉಪ ಕಾರ್ಯದರ್ಶಿ ಸಿ.ಆರ್. ಮುಂಡರಗಿ, ಗ್ಯಾರಂಟಿ ಸಮಿತಿಯ ಸದಸ್ಯರಾದ ಶಂಭು.ಎಸ್. ಕಾಳೆ, ಮೀನಾಕ್ಷಿ ಬೆನಕಣ್ನವರ, ದಯಾನಂದ ಪವಾರ, ಸಂಗು ಕರಕಲಕಟ್ಟಿ, ನಿಂಗಪ್ಪ ದೇಸಾಯಿ, ಸಂಗಮೇಶ ಹಾದಿಮನಿ, ರಮೇಶ ಹೊನ್ನಿನಾಯಕರ, ದೇವರೆಡ್ಡಿ ತಿರ್ಲಾಪುರ, ಮಲ್ಲಪ್ಪ ದಂಡಿನ, ಗಣೇಶ ಸಿಂಗ್ ಮಿಟಾಡ್, ಮಲ್ಲಪ್ಪ ಬಾರಕೇರ, ಬಾಷಾ ಮಲ್ಲಸಮುದ್ರ, ಕೃಷ್ಣಗೌಡ. ಎಚ್.ಪಾಟಿಲ, ಸಾವಿತ್ರಿ ಹೂಗಾರ ಸೇರಿದಂತೆ ಗ್ಯಾರಂಟಿ ಯೋಜನೆಯ ಸಂಬಂಧಿತ ಅಧಿಕಾರಿಗಳು ಇದ್ದರು.