ಏ.5ರಂದು ಬಾಬೂಜಿ, 14ಕ್ಕೆ ಅಂಬೇಡ್ಕರ್ ಜಯಂತಿ ಸರಳ ಆಚರಣೆ: ಲೋಕೇಶ್

| Published : Apr 03 2024, 01:32 AM IST

ಏ.5ರಂದು ಬಾಬೂಜಿ, 14ಕ್ಕೆ ಅಂಬೇಡ್ಕರ್ ಜಯಂತಿ ಸರಳ ಆಚರಣೆ: ಲೋಕೇಶ್
Share this Article
  • FB
  • TW
  • Linkdin
  • Email

ಸಾರಾಂಶ

ಏ.5ರಂದು ಡಾ.ಬಾಬು ಜಗಜೀವನ್ ರಾಂ ಹಾಗೂ ಏ.14ರ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಎಲ್ಲ ಸರ್ಕಾರಿ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿರಬೇಕು. ಇಲ್ಲದಿದ್ದರೆ ನೋಟಿಸ್ ನೀಡಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಮಹಾನೀಯರ ಜಯಂತಿ ಮಾಡಲು ಎಲ್ಲರೂ ಸಹಕಾರ ನೀಡಬೇಕು.

ಕನ್ನಡಪ್ರಭ ವಾರ್ತೆ ಮಳವಳ್ಳಿ

ಚುನಾವಣೆ ನೀತಿ ಸಂಹಿತೆಯಿಂದಾಗಿ ಏ.5ರಂದು ಡಾ.ಬಾಬು ಜಗಜೀವನ್ ರಾಂ ಹಾಗೂ ಏ.14ರ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ಸರಳ ಮತ್ತು ಅರ್ಥಪೂರ್ಣವಾಗಿ ಆಚರಣೆ ಮಾಡಲಾಗುವುದು ಎಂದು ತಹಸೀಲ್ದಾರ್ ಕೆ.ಎನ್.ಲೋಕೇಶ್ ತಿಳಿಸಿದರು.

ಪಟ್ಟಣದ ತಾಲೂಕು ಕಚೇರಿಯ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಲೋಕಸಭೆ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಆಯೋಗದ ನಿಯಮಗಳಂತೆ ಜಯಂತಿ ಮಾಡಬೇಕಾಗಿದೆ. ಪಟ್ಟಣದ ತಾಲೂಕು ಕಚೇರಿಯ ಸಭಾಂಗಣದಲ್ಲಿಯೇ ಇಬ್ಬರು ಮಹಾನೀಯರ ಜಯಂತಿಯನ್ನು ಸರಳವಾಗಿ, ಅರ್ಥಪೂರ್ಣವಾಗಿಯೂ ಆಚರಣೆ ಮಾಡಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಎಲ್ಲ ಸರ್ಕಾರಿ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿರಬೇಕು. ಇಲ್ಲದಿದ್ದರೆ ನೋಟಿಸ್ ನೀಡಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಮಹಾನೀಯರ ಜಯಂತಿ ಮಾಡಲು ಎಲ್ಲರೂ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಸಭೆಯಲ್ಲಿ ಹಲವು ಮುಖಂಡರು ಮಾತನಾಡಿ, ಏ.5ರ ಡಾ.ಬಾಬು ಜಗಜೀವನ ರಾಂ ಹಾಗೂ ಏ.14ರ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿಯಂದು ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಯನ್ನು ವಿದ್ಯುತ್ ದೀಪಾಲಂಕಾರ ಮಾಡಿ ಹೂಗಳಿಂದ ಶೃಂಗರಿಸಬೇಕು ಎಂದರು.

ಹಿಂದಿನ ಆಚರಣೆಯ ವೇಳೆ ಹಲವು ಇಲಾಖೆಗಳ ಅಧಿಕಾರಿಗಳ ಗೈರಾಗಿ ಅಗೌರವ ತೋರಿಸುತ್ತಾರೆ. ಇದಕ್ಕೆ ಕಡಿವಾಣ ಹಾಕಬೇಕು. ಕಾರ್ಯಕ್ರಮದಲ್ಲಿ ಉಪನ್ಯಾಸ ಹಾಗೂ ಲಘು ಉಪಹಾರದ ವ್ಯವಸ್ಥೆ ಮಾಡುವಂತೆ ಸಲಹೆ ನೀಡಿದರು.

ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಎ.ಎನ್.ಜನಾರ್ಧನ್ ಮಾತನಾಡಿ, ನೀತಿ ಸಂಹಿತೆಯಿಂದ ಅದ್ದೂರಿ ಆಚರಣೆಗೆ ಅವಕಾಶ ಇರುವುದಿಲ್ಲ. ಮುಖಂಡರ ಸಲಹೆಯಂತೆ ಕೆಲ ಮಾರ್ಪಾಟುಗಳೊಂದಿಗೆ ಜಯಂತಿಗಳನ್ನು ಆಚರಣೆ ಮಾಡಲಾಗುವುದು ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಚಂದ್ರಪಾಟೀಲ್, ಪಿಎಸ್ಐ ಮಹೇಂದ್ರ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ದೀಪಕ್, ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಸಂಘಟನೆಗಳ ಪ್ರಮುಖರು ಭಾಗಿಯಾಗಿದ್ದರು.