ಸಾರಾಂಶ
ಚಿತ್ರದುರ್ಗ: ರಾಜ್ಯದಲ್ಲಿ ಮಕ್ಕಳ ಸ್ನೇಹಿ ಸಾರಿಗೆ ವ್ಯವಸ್ಥೆ ರೂಪಿಸಲು ವಿಶೇಷ ಅಧ್ಯಯನ ಕೈಗೊಂಡು ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ಕೆ.ಟಿ.ತಿಪ್ಪೇಸ್ವಾಮಿ ತಿಳಿಸಿದರು.
ನಗರದ ಸೆಂಟ್ ಜೋಸೆಫ್ ಶಾಲಾ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಶಾಲಾ ಶಿಕ್ಷಣ ಮತ್ತು ಸಾಕ್ಷಾರತಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಮಕ್ಕಳಿಂದ ಅಹವಾಲು ಸ್ವೀಕಾರ ಹಾಗೂ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸಾರಿಗೆ ವ್ಯವಸ್ಥೆ ಸಂಬಂಧ ಮಕ್ಕಳು ಸಾಕಷ್ಟು ಸವಾಲುಗಳನ್ನು ಎದುರಿಸುತ್ತಿದ್ದು, ಇದು ಆಯೋಗದ ಗಮನಕ್ಕೆ ಬಂದಿದೆ. ರಾಜ್ಯದಲ್ಲಿ ಮಕ್ಕಳ ಸ್ನೇಹಿ ಸಾರಿಗೆ ವ್ಯವಸ್ಥೆ ರೂಪಿಸಲು ಯಾವೆಲ್ಲ ಕ್ರಮಕೈಗೊಳ್ಳಬೇಕು ಎಂಬುವುದರ ಕುರಿತು ಇನ್ನೂ ಆರು ತಿಂಗಳಲ್ಲಿ ವರದಿ ಬರಲಿದೆ ಎಂದರು.ರಾಜ್ಯದಲ್ಲಿ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಡಿಸೆಂಬರ್ ಮಾಹೆಯಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಮಕ್ಕಳಿಂದ ಅಹವಾಲು ಸ್ವೀಕರಿಸುವ ಹಾಗೂ ಸಂವಾದ ಕಾರ್ಯಕ್ರಮ ನಡೆಸಲಾಗುತ್ತಿದೆ. ಅದರಂತೆ ಜಿಲ್ಲೆಯಲ್ಲಿಯೂ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಮಕ್ಕಳ ಹಕ್ಕುಗಳನ್ನು ತಲುಪಿಸಲು ಹಲವಾರು ಇಲಾಖೆಗಳ ಮೇಲೆ ಜವಾಬ್ದಾರಿ ಇದೆ ಎಂದು ಹೇಳಿದರು.ಬಾಲನ್ಯಾಯ ಕಾಯ್ದೆ ಅನುಸಾರ ಪ್ರತಿಯೊಂದು ಪೊಲೀಸ್ ಠಾಣೆಯಲ್ಲಿ ಮೂರು ಜನ ಅಧಿಕಾರಿಗಳನ್ನು ಒಳಗೊಂಡ ಮಕ್ಕಳ ವಿಶೇಷ ಪೊಲೀಸ್ ಘಟಕ ಇದೆ. ತೆರೆದ ಮನೆ ಕಾರ್ಯಕ್ರಮದಡಿಯಲ್ಲಿ ಪ್ರತಿ ಗುರುವಾರ ಪೊಲೀಸ್ ಠಾಣೆಗೆ ಹೋಗಿ ಪೊಲೀಸ್ ವ್ಯವಸ್ಥೆ ಬಗ್ಗೆ ಮಾಹಿತಿ ಪಡೆಯಬಹುದಾಗಿದೆ. ಶಿಕ್ಷಕರು, ಸ್ಥಳೀಯ ಪೊಲೀಸರ ಸಹಕಾರ ಪಡೆದು ನಿಮ್ಮ ಹತ್ತಿರದ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ಬರಬೇಕು ಎಂದು ತಿಳಿಸಿದರು.
ಚಿತ್ರದುರ್ಗ ಉಪವಿಭಾಗದ ಉಪಾಧೀಕ್ಷಕ ದಿನಕರ್ ಮಾತನಾಡಿ, ಪ್ರತಿ ಪೊಲೀಸ್ ಠಾಣೆಯಲ್ಲಿ ಪಿಎಸ್‍ಐ ಮಟ್ಟದ ಅಧಿಕಾರಿಯನ್ನು ಮಕ್ಕಳ ಕಲ್ಯಾಣಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದ್ದು, ಅವರಿಗೆ ಇಬ್ಬರು ಸಹಾಯಕರು ಇರುತ್ತಾರೆ. ಮಕ್ಕಳ ಸಂಬಂಧಿತ ಯಾವುದೇ ಪ್ರಕರಣ ಬಂದರೂ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ವಹಿಸುತ್ತಾರೆ ಎಂದು ಹೇಳಿದರು.ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಜುನಾಥ್, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಪಿ.ಶೀಲಾ, ಚಿತ್ರದುರ್ಗ ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೀಣಾ, ಡಿವೈಪಿಸಿ ವೆಂಕಟೇಶ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಮಹಂತೇಶ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಿ.ಸವಿತಾ ಹಾಗೂ ಚಿತ್ರದುರ್ಗ ತಾಲ್ಲೂಕಿನ ವಿವಿಧ ಪ್ರೌಢಶಾಲೆಯ ಮಕ್ಕಳು ಹಾಗೂ ಶಿಕ್ಷಕರು ಇದ್ದರು.