ಸಾರಾಂಶ
ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಒಂದು ಹೆಜ್ಜೆ ಕಾರ್ಯಕ್ರಮದ ಆಟೋ ಜಾಥಾಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶ ಮಹಾಂತೇಶ ಎಸ್. ದರಗದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಚಾಲನೆ ನೀಡಿದರು.
ಕನ್ನಡಪ್ರಭ ವಾರ್ತೆ ಕೊಪ್ಪಳ
ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾದ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಒಂದು ಹೆಜ್ಜೆ ಕಾರ್ಯಕ್ರಮದ ಆಟೋ ಜಾಥಾಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶ ಮಹಾಂತೇಶ ಎಸ್. ದರಗದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಚಾಲನೆ ನೀಡಿದರು.ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಪಂ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನೆ ಇವುಗಳ ಸಂಯುಕ್ತಾಶ್ರಯದಲ್ಲಿ ಪ್ಯಾನ್-ಇಂಡಿಯಾ ರಕ್ಷಣಾ ಮತ್ತು ಪುನರ್ವಸತಿ ಅಭಿಯಾನದ ಹಿನ್ನೆಲೆ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಈ ವೇಳೆ ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕ ಬಸವರಾಜ ಹಿರೇಗೌಡ್ರ ಮಾತನಾಡಿ, ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ನವದೆಹಲಿ, ಕೊಪ್ಪಳ ಜಿಲ್ಲಾಧಿಕಾರಿ, ಕಾನೂನು ಸೇವಾ ಪ್ರಾಧಿಕಾರ ಹಾಗೂ ಕಾರ್ಮಿಕ ಆಯುಕ್ತರ ನಿರ್ದೇಶನದಂತೆ, ಮಕ್ಕಳ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಬಾಲಕಾರ್ಮಿಕ, ಕಿಶೋರ ಕಾರ್ಮಿಕ ತಪಾಸಣೆ ಹಾಗೂ ಹಠಾತ್ ದಾಳಿಗಳನ್ನು ನಡೆಸಲು ಸೂಚಿಸಲಾಗಿದ್ದು, ಈ ಹಿನ್ನೆಲೆ ಆಟೋ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.ಈ ಸಂದರ್ಭ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎ.ವಿ. ಕಣವಿ, ಜಿಲ್ಲಾ ಕಾರ್ಮಿಕ ಅಧಿಕಾರಿ ಸುಧಾ ಗರಗ, ಕಾರ್ಮಿಕ ನಿರೀಕ್ಷಕ ಶಿವಶಂಕರ್ ತಳವಾರ ಸೇರಿದಂತೆ ವಕೀಲರು, ಮಕ್ಕಳ ಸಹಾಯವಾಣಿ-1098 ಸಿಬ್ಬಂದಿ ಹಾಗೂ ಇತರರು ಉಪಸ್ಥಿತರಿದ್ದರು.
ಬಾಲಕಾರ್ಮಿಕ, ಕಿಶೋರ ಕಾರ್ಮಿಕ ತಪಾಸಣೆ, ಜಾಗೃತಿ:ಕಾರ್ಯಕ್ರಮದ ಬಳಿಕ ಕೊಪ್ಪಳ ನಗರದಲ್ಲಿ ಹಾಗೂ ಗ್ರಾಮೀಣ ಭಾಗದಲ್ಲಿ ಬಾಲಕಾರ್ಮಿಕ, ಕಿಶೋರ ಕಾರ್ಮಿಕ ತಪಾಸಣೆಯನ್ನು ಕೈಗೊಳ್ಳಲಾಯಿತು. 18 ವರ್ಷದ ಒಳಗಿನ ಯಾವುದೇ ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳದಂತೆ ಸಾರ್ವಜನಿಕರಿಗೆ ಕರಪತ್ರ ಹಂಚಿ ಜಾಗೃತಿ ಮೂಡಿಸಲಾಯಿತು.