ಸಾರಾಂಶ
ಕನ್ನಡಪ್ರಭ ವಾರ್ತೆ ಮಂಗಳೂರುಬಿ.ಸಿ. ರೋಡ್ - ಸುರತ್ಕಲ್ ನಡುವಿನ ಬಂದರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಹದಗೆಟ್ಟಿರುವುದು ಹಾಗೂ ಅದರ ಶಾಶ್ವತ ನಿರ್ವಹಣೆಗೆ ಎದುರಾಗಿರುವ ಅಡಚಣೆ, ಸಮಸ್ಯೆ ಹಾಗೂ ಸವಾಲುಗಳ ಬಗ್ಗೆ ದ.ಕ. ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು ಗುರುವಾರ ದೆಹಲಿಯಲ್ಲಿ ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಈ ಹೆದ್ದಾರಿಯು ಎನ್‌ಎಚ್‌ಎಲ್ಎಂಎಲ್ ವ್ಯಾಪ್ತಿಗೆ ಸೇರಿದ್ದು, ಇದರ ನಿರ್ವಹಣೆಗೆ ನಿಧಿಯ ಕೊರತೆ ಹಾಗೂ ಕಾಲ ಕಾಲಕ್ಕೆ ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡದಿರುವುದು ಈ ಮಾರ್ಗದ ದುಸ್ಥಿತಿಗೆ ಕಾರಣವಾಗಿದೆ. ಅದರಲ್ಲೂ ಮಳೆಗಾಲದಲ್ಲಿ ಈ ಹೆದ್ದಾರಿ ಇನ್ನಷ್ಟು ಹದಗೆಟ್ಟಿದೆ. ಈ ಹಿನ್ನೆಲೆಯಲ್ಲಿ ಬಿ.ಸಿ. ರೋಡ್ - ಸುರತ್ಕಲ್ ಹೆದ್ದಾರಿಯನ್ನು ಎನ್‌ಎಚ್‌ಎಐ ವ್ಯಾಪ್ತಿಗೆ ತಂದು ಅದರ ಸಮರ್ಪಕ ನಿರ್ವಹಣೆ, ವಾಹನಗಳ ಸುಗಮ ಸಂಚಾರಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವುದಕ್ಕೆ ಖುದ್ದಾಗಿ ಗಮನಹರಿಸಿ ಈ ಗಂಭೀರ ಸಮಸ್ಯೆ ಬಗೆಹರಿಸಲು ಮಧ್ಯಪ್ರವೇಶಿಸುವಂತೆ ಸಂಸದರು ಕೋರಿದರು. ಈ ವೇಳೆ ಸಚಿವ ಗಡ್ಕರಿ ಅವರು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದು ಅಗತ್ಯ ಕ್ರಮದ ಭರವಸೆ ನೀಡಿದ್ದಾರೆ ಎಂದು ಸಂಸದರ ಕಚೇರಿ ಪ್ರಕಟಣೆ ತಿಳಿಸಿದೆ.ಬಹು ನಿರೀಕ್ಷಿತ ಮಂಗಳೂರು-ಬೆಂಗಳೂರು ಹೈಸ್ಪೀಡ್ ಕಾರಿಡಾರ್ ಯೋಜನೆ ಹೆದ್ದಾರಿ ಸಚಿವಾಲಯದಿಂದ ಟೆಂಡರ್ ನಡೆಸಿ ವಿಸ್ತೃತ ಯೋಜನಾ ವರದಿ(ಡಿಪಿಆರ್) ತಯಾರಿಸುವ ಕಾರ್ಯಕ್ಕೆ ಚಾಲನೆ ನೀಡಿರುವುದು ಸೇರಿದಂತೆ ದಕ್ಷಿಣ ಕನ್ನಡದ ಪ್ರಮುಖ ಮೂಲಸೌಕರ್ಯ ಯೋಜನೆಗಳಿಗೆ ಸಂಬಂಧಿಸಿದಂತೆ ಸಚಿವರಿಗೆ ಕ್ಯಾ. ಚೌಟ ಅವರು ಇದೇ ಸಂದರ್ಭದಲ್ಲಿ ವಿಶೇಷ ಕೃತಜ್ಞತೆ ಸಲ್ಲಿಸಿದ್ದಾರೆ.
ರಿಂಗ್ ರಸ್ತೆ ನಿರ್ಮಾಣ:ಮಂಗಳೂರು ನಗರ ಭಾಗದ ಟ್ರಾಫಿಕ್ ದಟ್ಟಣೆ ಕಡಿಮೆ ಮಾಡಲು ರಾಷ್ಟ್ರೀಯ ಹೆದ್ದಾರಿ-66 ಮತ್ತು ರಾಷ್ಟ್ರೀಯ ಹೆದ್ದಾರಿ-75 ಅನ್ನು ಸಂಪರ್ಕಿಸುವ ರಿಂಗ್ ರೋಡ್ ನಿರ್ಮಿಸುವಂತೆ ಈ ಸಂದರ್ಭ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು ಸಚಿವ ಗಡ್ಕರಿಗೆ ಮನವಿ ಮಾಡಿದರು.
ಶಿರಾಡಿ ಘಾಟ್‌ನಲ್ಲಿ ಜಂಟಿ ಸಮೀಕ್ಷೆ: ಶಿರಾಡಿ ಘಾಟ್ ಭಾಗದಲ್ಲಿ ರಸ್ತೆ ಹಾಗೂ ರೈಲು ಹಳಿಗಳ ಅಭಿವೃದ್ದಿ ಕಾಮಗಾರಿಗೆ ರೈಲ್ವೆ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಜಂಟಿ ಸಮೀಕ್ಷೆಯನ್ನು ಕೈಗೊಳ್ಳಲು ಮತ್ತು ಅದಕ್ಕೆ ಸಂಬಂಧಿಸಿದ ಡಿಪಿಆರ್‌ನ್ನು ಮೇಲ್ವಿಚಾರಣೆ ಮಾಡಲು ತಜ್ಞರ ಸಮಿತಿಯನ್ನು ನೇಮಿಸುವಂತೆ ರೈಲ್ವೆ ಸಚಿವಾಲಯದೊಂದಿಗೆ ಮಾತುಕತೆ ನಡೆಸುವಂತೆಯೂ ಸಂಸದರು ಮನವಿ ಮಾಡಿದರು.ಶಿರಾಡಿ ಘಾಟ್ ಪ್ರದೇಶ ಪರಿಸರ ಸೂಕ್ಷ್ಮತೆ ಮತ್ತು ತಾಂತ್ರಿಕ ಸಂಕೀರ್ಣತೆಯನ್ನು ಗಮನದಲ್ಲಿಟ್ಟುಕೊಂಡು, ರೈಲ್ವೆ ಸಚಿವಾಲಯದೊಂದಿಗೆ ತಜ್ಞರ ನೇತೃತ್ವದ ಜಂಟಿ ಕಾರ್ಯವಿಧಾನವು ಸೂಕ್ತ ಜೋಡಣೆ, ಸುಸ್ಥಿರತೆ ಮತ್ತು ದೀರ್ಘಕಾಲೀನ ಪರಿಹಾರ-ಮಾರ್ಗೋಪಾಯಗಳನ್ನು ಒದಗಿಸುತ್ತದೆ ಎಂದು ಸಂಸದರು ಸಚಿವರಿಗೆ ಮನದಟ್ಟು ಮಾಡಿದ್ದಾರೆ.