ಕನ್ನಡಪ್ರಭ ವಾರ್ತೆ ಬೆಳಗಾವಿ
ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂಬ ಕರ್ನಾಟಕ ಪರವಾದ ಗೊತ್ತುವಳಿಯನ್ನು ಅಂಗೀಕರಿಸಬೇಕೆಂದು ಆಗ್ರಹಿಸಿ ಕಳೆದ 75 ದಿನಗಳಿಂದ ನಿರಂತರವಾಗಿ ನಡೆಯುತ್ತಿರುವ ಕನ್ನಡಪರ ಸಂಘಟನೆಗಳ ಹೋರಾಟಕ್ಕೆ ಮಹತ್ವದ ತಿರುವು ಸಿಕ್ಕಿದೆ. ಹೋರಾಟಗಾರರು ಸಲ್ಲಿಸಿರುವ ಮನವಿಗಳನ್ನು ಗಂಭೀರವಾಗಿ ಪರಿಗಣಿಸಿರುವ ಬೆಳಗಾವಿ ಪ್ರಾದೇಶಿಕ ಆಯುಕ್ತೆ ಕೆ.ಎಂ.ಜಾನಕಿ ಅವರು ಮಹಾನಗರ ಪಾಲಿಕೆ ಆಯುಕ್ತರಿಂದ ಸಮಗ್ರ ವರದಿ ಕೇಳಿದ್ದು, ಇದು ಕನ್ನಡಪರ ವಲಯದಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.ಕಳೇದ ಮಾರ್ಚ್ 26ರಿಂದ ವಿವಿಧ ಕನ್ನಡಪರ ಸಂಘಟನೆಗಳು, ಗಡಿ ಹೋರಾಟಗಾರರು ಹಾಗೂ ಕನ್ನಡಾಭಿಮಾನಿಗಳು ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಕರ್ನಾಟಕ ಪರವಾದ ಗೊತ್ತುವಳಿ ಅಂಗೀಕಾರಕ್ಕೆ ಒತ್ತಾಯಿಸಿ ಹೋರಾಟ ನಡೆಸುತ್ತಿವೆ. ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂಬ ನಿರ್ಣಯವನ್ನು ಪಾಲಿಕೆ ಅಧಿಕೃತವಾಗಿ ಅಂಗೀಕರಿಸಬೇಕು ಹಾಗೂ ಮಹಾಜನ ಆಯೋಗದ ವರದಿಯನ್ನು ಜಾರಿಗೊಳಿಸುವಂತೆ ಸರ್ಕಾರವನ್ನು ಒತ್ತಾಯಿಸಬೇಕು ಎಂಬುದು ಹೋರಾಟಗಾರರ ಪ್ರಮುಖ ಬೇಡಿಕೆಯಾಗಿದೆ.ಜೂ.1ರಿಂದ ಕನ್ನಡಪರ ಸಂಘಟನೆಗಳು ಪ್ರತಿದಿನ ಪ್ರಾದೇಶಿಕ ಆಯುಕ್ತರ ಕಚೇರಿಗೆ ತೆರಳಿ ಮನವಿ ಸಲ್ಲಿಸುತ್ತಿದ್ದು, ಈ ಬೆಳವಣಿಗೆಗಳನ್ನು ಗಂಭೀರವಾಗಿ ಪರಿಗಣಿಸಿರುವ ಪ್ರಾದೇಶಿಕ ಆಯುಕ್ತರು ಜೂನ್ 8ರಂದು ಮಹಾನಗರ ಪಾಲಿಕೆ ಆಯುಕ್ತರಿಗೆ ಪತ್ರ ಬರೆದು ಸಮಗ್ರ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ. ಕನ್ನಡಪರ ಸಂಘಟನೆಗಳು ಸಲ್ಲಿಸಿರುವ ದೂರಿನಲ್ಲಿರುವ ಎಲ್ಲ ಅಂಶಗಳನ್ನು ಪರಿಶೀಲಿಸಿ ವಾಸ್ತವಾಂಶಗಳ ವರದಿ ಸಲ್ಲಿಸುವಂತೆ ಅವರು ನಿರ್ದೇಶನ ನೀಡಿದ್ದಾರೆ.ಪ್ರಾದೇಶಿಕ ಆಯುಕ್ತರ ಪತ್ರದಲ್ಲಿ ಮಾರ್ಚ್ 26ರಿಂದ ನಡೆಯುತ್ತಿರುವ ಹೋರಾಟದ ಕುರಿತು ಉಲ್ಲೇಖಿಸಲಾಗಿದ್ದು, 58 ಸದಸ್ಯರ ಮಹಾನಗರ ಪಾಲಿಕೆಯಲ್ಲಿ 35 ಸದಸ್ಯರ ಬಹುಮತ ಹೊಂದಿರುವ ಬಿಜೆಪಿ ಸದಸ್ಯರು ಕರ್ನಾಟಕ ಪರವಾದ ಗೊತ್ತುವಳಿಯನ್ನು ಅಂಗೀಕರಿಸಲು ಮುಂದಾಗಿಲ್ಲ ಎಂಬ ಕನ್ನಡಪರ ಸಂಘಟನೆಗಳ ಆರೋಪವನ್ನೂ ಪ್ರಸ್ತಾಪಿಸಲಾಗಿದೆ. ಇದು ನಾಡು, ನುಡಿ ಮತ್ತು ರಾಜ್ಯದ ಹಿತಾಸಕ್ತಿಗೆ ವಿರುದ್ಧವಾದ ನಡೆ ಎಂದು ಸಂಘಟನೆಗಳು ದೂರಿನಲ್ಲಿ ಉಲ್ಲೇಖಿಸಿವೆ.ಈ ಹಿಂದೆ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿಯೂ ಈ ವಿಷಯ ಚರ್ಚೆಗೆ ಬಂದಿತ್ತು. ಜಿಲ್ಲಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳು ಪಾಲಿಕೆ ಈ ಕುರಿತು ಸೂಕ್ತ ಕ್ರಮ ಕೈಗೊಳ್ಳಬೇಕೆಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರೂ, ಇದುವರೆಗೆ ಯಾವುದೇ ನಿರ್ಣಯ ಕೈಗೊಳ್ಳದಿರುವುದು ಕನ್ನಡಪರ ಸಂಘಟನೆಗಳ ಅಸಮಾಧಾನಕ್ಕೆ ಕಾರಣವಾಗಿದೆ.ಪ್ರಾದೇಶಿಕ ಆಯುಕ್ತರು ವರದಿ ಕೇಳಿರುವ ಕ್ರಮವನ್ನು ಕನ್ನಡಪರ ಸಂಘಟನೆಗಳು ಸ್ವಾಗತಿಸಿವೆ. ಆಡಳಿತ ವ್ಯವಸ್ಥೆ ಈಗಾದರೂ ವಿಷಯದ ಗಂಭೀರತೆಯನ್ನು ಅರ್ಥ ಮಾಡಿಕೊಂಡಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿರುವ ಹೋರಾಟಗಾರರು, ವರದಿಯ ಆಧಾರದ ಮೇಲೆ ಸರ್ಕಾರ ಹಾಗೂ ಆಡಳಿತ ಯಂತ್ರ ತ್ವರಿತ ಕ್ರಮ ಕೈಗೊಂಡು ಪಾಲಿಕೆಯಲ್ಲಿ ಕರ್ನಾಟಕ ಪರವಾದ ಗೊತ್ತುವಳಿ ಅಂಗೀಕರಿಸಬೇಕು ಎಂದು ಆಗ್ರಹಿಸಿದ್ದಾರೆ.ಗಡಿ ಭಾಗದ ಜನರ ಭಾವನೆ, ಕನ್ನಡಿಗರ ಸ್ವಾಭಿಮಾನ ಹಾಗೂ ಕರ್ನಾಟಕದ ಅಖಂಡತೆಯ ಸಂಕೇತವಾಗಿ ರೂಪುಗೊಂಡಿರುವ ಈ ಹೋರಾಟಕ್ಕೆ ಇದೀಗ ಆಡಳಿತಾತ್ಮಕ ಸ್ಪಂದನೆ ದೊರೆತಿದ್ದು, ಮುಂದಿನ ದಿನಗಳಲ್ಲಿ ಮಹಾನಗರ ಪಾಲಿಕೆಯಲ್ಲಿ ಮಹತ್ವದ ರಾಜಕೀಯ ಹಾಗೂ ಆಡಳಿತಾತ್ಮಕ ಬೆಳವಣಿಗೆಗಳು ನಡೆಯುವ ಸಾಧ್ಯತೆಗಳು ಹೆಚ್ಚಿವೆ. ಕರ್ನಾಟಕ ಪರವಾದ ನಿರ್ಣಯ ಅಂಗೀಕಾರವಾಗುವವರೆಗೆ ಹೋರಾಟ ಮುಂದುವರಿಯಲಿದೆ ಎಂದು ಕನ್ನಡಪರ ಸಂಘಟನೆಗಳು ಸ್ಪಷ್ಟಪಡಿಸಿವೆ.
