ಅಸಮಾನತೆ ತೊಲಗಿಸಲು ಶ್ರಮಿಸಿದ ಧೀಮಂತ: ಜಿಲ್ಲಾಧಿಕಾರಿ ದಿವಾಕರ್

| Published : Aug 21 2025, 02:00 AM IST

ಅಸಮಾನತೆ ತೊಲಗಿಸಲು ಶ್ರಮಿಸಿದ ಧೀಮಂತ: ಜಿಲ್ಲಾಧಿಕಾರಿ ದಿವಾಕರ್
Share this Article
  • FB
  • TW
  • Linkdin
  • Email

ಸಾರಾಂಶ

ಮಾಜಿ ಮುಖ್ಯಮಂತ್ರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜನಕ ಡಿ.ದೇವರಾಜ ಅರಸು ಸಾಮಾಜಿಕ ಸಮಾನತೆ ತರುವಲ್ಲಿ ಶ್ರಮಿಸಿದ ಧೀಮಂತ ನಾಯಕರಾಗಿದ್ದಾರೆ.

ಕನ್ನಡಪ್ರಭ ವಾರ್ತೆ ಹೊಸಪೇಟೆ

ಮಾಜಿ ಮುಖ್ಯಮಂತ್ರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜನಕ ಡಿ.ದೇವರಾಜ ಅರಸು ಸಾಮಾಜಿಕ ಸಮಾನತೆ ತರುವಲ್ಲಿ ಶ್ರಮಿಸಿದ ಧೀಮಂತ ನಾಯಕರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಡಿ.ದೇವರಾಜ ಅರಸು ಜಿಲ್ಲಾ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಸಹಯೋಗದಲ್ಲಿ ಏರ್ಪಡಿಸಿದ್ದ ಡಿ.ದೇವರಾಜ ಅರಸು ಅವರ 110ನೇ ಜನ್ಮ ದಿನಾಚರಣೆಯ ಸಮಾರಂಭದ ಅಧ್ಯಕ್ಷತೆ ವಹಿಸಿ ಬುಧವಾರ ಮಾತನಾಡಿದರು.

ಉಳುವವನೆ ಭೂಮಿಯ ಒಡೆಯ ಕಾಯ್ದೆ ರಾಜ್ಯದ ಹಲವು ಜನರಿಗೆ ಭೂ ಒಡೆತನದ ಹಕ್ಕು ನೀಡಿತು. ನಿರುದ್ಯೋಗಿಗಳಿಗೆ ಸಹಾಯಧನ ನೀಡುವ ಕಾರ್ಯಕ್ರಮಗಳನ್ನು ರೂಪಿಸಿ ಸಾವಿರಾರು ಯುವಜನರಿಗೆ ನೆರವಾದರು. ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲು ಮತ್ತು ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಗೌರವ ದೊರಕಿಸುವ ನಿಟ್ಟಿನಲ್ಲಿ ಅವರು ಹಲವಾರು ಯೋಜನೆಗಳನ್ನು ಜಾರಿಗೆ ತಂದರು. ಜೀತ ಪದ್ದತಿ, ಮಲ ಹೊರುವ ಪದ್ಧತಿ ನಿರ್ಮೂಲನೆಯ ಮೂಲಕ ಸಾಮಾಜಿಕ ಪರಿವರ್ತನೆಗೆ ಶ್ರಮಿಸಿದ್ದಾರೆ. ಅವರ ಆಡಳಿತಾವಧಿಯಲ್ಲಿ ಜಾರಿಗೆ ಬಂದ ಭೂ ಸುಧಾರಣೆ ಕಾಯ್ದೆಯಿಂದ ರೈತಾಪಿ ವರ್ಗದವರಿಗೆ ತುಂಬಾ ಅನುಕೂಲವಾಗಿದೆ. ಈ ಕಾಯ್ದೆಯು ಜಾರಿಗೆ ಬಾರದೇ ಇದ್ದಿದ್ದರೇ ಭೂಮಿ ಕೇವಲ ಕೆಲವರ ಸ್ವತ್ತು ಆಗುತ್ತಿತ್ತು. ಸಮಾಜಮುಖಿ ಕಾರ್ಯಗಳ ಬಗ್ಗೆ ಅವರು ಸದಾ ಯೋಜನೆಗಳನ್ನು ರೂಪಿಸುತ್ತಿದ್ದರು. ಅಲೆಮಾರಿ ಹಾಗೂ ಅರೆ ಅಲೆಮಾರಿ ಸಮುದಾಯಗಳನ್ನು ಮುಖ್ಯವಾಹಿನಿಗೆ ತರಲು ಸಾಕಷ್ಟು ಶ್ರಮಿಸಿದ್ದಾರೆ ಎಂದರು.

ಅಭಿವೃದ್ಧಿ ನಿಗಮದ ಮೂಲಕ ಆರ್ಥಿಕವಾಗಿ ಸಶಕ್ತರನ್ನಾಗಿಸಲು ಸಾಲ ಸೌಲಭ್ಯ, ಕೃಷಿಗೆ ಪ್ರೋತ್ಸಾಹ ನೀಡಲಾಗುತ್ತಿದೆ. ಸರ್ಕಾರ ರೂಪಿಸಿದ ಸೌಲಭ್ಯಗಳನ್ನು ಹಿಂದುಳಿದ ಸಮುದಾಯ ಸದ್ಬಳಕೆ ಮಾಡಿಕೊಳ್ಳಬೇಕಿದೆ. ಹಲವು ಕ್ರಾಂತಿಕಾರಕ ಯೋಜನೆಗಳನ್ನು ಜಾರಿಗೊಳಿಸಿ ಪರಿಶಿಷ್ಟ ಜಾತಿ, ಪಂಗಡ ಮತ್ತು ಹಿಂದುಳಿದ ವರ್ಗಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ ಎಂದರು.

ಹಗರಿಬೊಮ್ಮನಹಳ್ಳಿಯ ಗಂಗಾವತಿ ಭೀಮಪ್ಪನವರ ಸರ್ಕಾರಿ ಪಿಯು ಕಾಲೇಜಿನ ಉಪನ್ಯಾಸಕ ಗೂಳೆಪ್ಪ ಹುಲ್ಮನಿ ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಜಿಲ್ಲಾ ಮಟ್ಟದಲ್ಲಿ ವಸತಿ ಶಾಲೆ ಮತ್ತು ವಿದ್ಯಾರ್ಥಿ ನಿಲಯಗಳ ನಿಲಯಾರ್ಥಿಗಳಿಂದ ಪ್ರಬಂಧ ಸ್ಪರ್ಧೆ, ಕ್ರೀಡಾ ಸ್ಪರ್ಧೆ, ಚರ್ಚಾ ಗೋಷ್ಠಿಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾಯಿತು. ಬಳಿಕ ಸಂಗೀತ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು.

ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಿ.ಶಶಿಕಲಾ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕೆ.ತಿಮ್ಮಪ್ಪ, ಅಲ್ಪಸಂಖ್ಯಾತರ ಜಿಲ್ಲಾ ಅಧಿಕಾರಿ ಜಾವೀದ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.