ಸಾರಾಂಶ
ಮೈಸೂರು ನಗರದ ಸುತ್ತೂರು ಶಾಖಾ ಮಠಕ್ಕೆ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ ನೀಡಿ, ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಕನ್ನಡಪ್ರಭ ವಾರ್ತೆ ಮೈಸೂರು
ನಗರದ ಸುತ್ತೂರು ಶಾಖಾ ಮಠಕ್ಕೆ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ ನೀಡಿ, ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಚಾಮುಂಡಿಬೆಟ್ಟದ ತಪ್ಪಲಿನ ಸುತ್ತೂರು ಮಠಕ್ಕೆ ತೆರಳಿದ ಯದುವೀರ ಅವರನ್ನು ಶ್ರೀಮಠದ ವತಿಯಿಂದ ಪೂರ್ಣಕುಂಭ ಸ್ವಾಗತ ಕೋರಲಾಯಿತು.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಬಿಜೆಪಿ ಅಭ್ಯರ್ಥಿ ಯದುವೀರ ಅವರು, ಶ್ರೀಗಳ ಆಶೀರ್ವಾದ ಪಡೆದರು. ಫಲತಾಂಬೂಲ ನೀಡಿ ಗೌರವಿಸಲಾಯಿತು.
ಬಳಿಕ ಸುದ್ದಿಗಾರರೊಡನೆ ಮಾತನಾಡಿದ ಯದುವೀರ ಅವರು, ಯಾರು ರಾಜ ಎಂಬ ಸಿಎಂ ಹೇಳಿಕೆಗೆ ಪ್ರತಿಕ್ರಿಯಿಸಲು ನಿರಾಕರಿಸಿದರು. ಮುಖ್ಯಮಂತ್ರಿಗಳ ಹೇಳಿಕೆ ನನ್ನ ಗಮನಕ್ಕೆ ಬಂದಿಲ್ಲ. ಆ ವಿಚಾರದ ಬಗ್ಗೆ ನಾನು ಹೇಗೆ ಪ್ರತಿಕ್ರಿಯಿಸುವುದಿಲ್ಲ ಎಂದು ಜಾಣ್ಮೆಯ ಉತ್ತರ ನೀಡಿದರು.
ನಾನು ಈಗಾಗಲೇ ಹೇಳಿದ್ದೇನೆ, ಸಂವಿಧಾನದಲ್ಲಿ ರಾಜ ರಾಣಿ ಎಂಬ ಯಾವ ಪಟ್ಟಕ್ಕೂ ವಿಶೇಷ ಮಹತ್ವ ಇಲ್ಲ. ಎಲ್ಲರೂ ಪ್ರಜೆಗಳೇ ಇಷ್ಟನ್ನು ಮಾತ್ರ ನಾನು ಹೇಳಬಲ್ಲೇ ಎಂದರು.
ಸುತ್ತೂರು ಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದೇನೆ. ಬೇರೆ ಯಾವ ವಿಚಾರಗಳ ಬಗ್ಗೆಯೂ ಚರ್ಚಿಸಿಲ್ಲ. ನಮ್ಮ ಚುನಾವಣಾ ಪ್ರಚಾರ ಎಂದಿನಂತೆ ಬೇರೆ ಬೇರೆ ಕ್ಷೇತ್ರಗಳಲ್ಲಿ ನಡೆಯುತ್ತಿದೆ ಎಂದರು.
ನಾಮಪತ್ರ ಸಲ್ಲಿಕೆಗೆ ಇನ್ನೂ ಅಧಿಸೂಚನೆ ಹೊರಡಿಸಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು ಪ್ರಚಾರಕ್ಕೆ ಬರುವ ಕುರಿತು ನನಗೆ ಇನ್ನೂ ಸದ್ಯಕ್ಕೆ ಮಾಹಿತಿ ಇಲ್ಲ ಎಂದು ಅವರು ಹೇಳಿದರು.
ಶಾಸಕ ಟಿ.ಎಸ್. ಶ್ರೀವತ್ಸ, ಚಾಮರಾಜನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್. ಬಾಲರಾಜ್, ಮಾಜಿ ಸಚಿವ ಎನ್. ಮಹೇಶ್, ಮಾಜಿ ಶಾಸಕ ಸಿ.ಎಸ್. ನಿರಂಜನಕುಮಾರ್, ಬಿಜೆಪಿ ಜಿಲ್ಲಾಧ್ಯಕ್ಷ ಎಲ್.ಆರ್. ಮಹದೇವಸ್ವಾಮಿ, ಮಾಜಿ ಉಪ ಮೇಯರ್ ಶೈಲೇಂದ್ರ, ಮುಖಂಡರಾದ ಶಿವಕುಮಾರ್, ಫಣೀಶ್, ಕೃಷ್ಣಪ್ಪಗೌಡ, ಕೇಬಲ್ ಮಹೇಶ್ ಮೊದಲಾದವರು ಇದ್ದರು.