ಸಾರಾಂಶ
ಹಳೆಯ ದ್ವೇಷಕ್ಕೆ ಯುವಕನೊಬ್ಬನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಪುಲಕೇಶಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ದ್ವೇಷದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆಗೈದು ಬಳಿಕ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಪುಲಕೇಶಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಮಹಾಲಕ್ಷ್ಮಿ ಲೇಔಟ್‌ನ ಕುರುಬರಹಳ್ಳಿ ನಿವಾಸಿ ಅಪ್ಪು(34) ಕೊಲೆಯಾದ ದುರ್ದೈವಿ. ಶನಿವಾರ ರಾತ್ರಿ ಜೀವನಹಳ್ಳಿ ರೈಲ್ವೆ ಹಳಿ ಬಳಿ ಈ ಘಟನೆ ನಡೆದಿದೆ. ಈ ಸಂಬಂಧ ಪೊಲೀಸರು ಕೆಲವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.
ಹತ್ಯೆಯಾದ ಅಪ್ಪು ಈ ಹಿಂದೆ ಪುಲಕೇಶಿನಗರ ಠಾಣಾ ವ್ಯಾಪ್ತಿಯಲ್ಲಿ ಕ್ಷುಲ್ಲಕ ವಿಚಾರಕ್ಕೆ ಕೆಲ ಯುವಕರ ಮೇಲೆ ಹಲ್ಲೆ ಮಾಡಿದ್ದ ಎನ್ನಲಾಗಿದೆ. ಶನಿವಾರ ರಾತ್ರಿ ಜೀವನಹಳ್ಳಿ ರೈಲ್ವೆ ಹಳಿ ಬಳಿಗೆ ಅಪ್ಪು ಬಂದಿದ್ದಾನೆ. ಇದನ್ನು ಗಮನಿಸಿರುವ ದುಷ್ಕರ್ಮಿಗಳು ಏಕಾಏಕಿ ಮಾರಕಾಸ್ತ್ರಗಳೊಂದಿಗೆ ನುಗ್ಗಿ ಅಪ್ಪು ಮೇಲೆ ದಾಳಿ ಮಾಡಿದ್ದಾರೆ. ಬಳಿಕ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ.ಅಪ್ಪು ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ದ್ವೇಷದ ಹಿನ್ನೆಲೆಯಲ್ಲೇ ಅಪ್ಪು ಹತ್ಯೆ ನಡೆದಿರುವ ಸಾಧ್ಯತೆಯಿದೆ. ಈ ಸಂಬಂಧ ಪುಲಕೇಶಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.