ಕೇಜ್ರಿವಾಲ್‌ ಬಂಧನ ಖಂಡಿಸಿ ಆಮ್ ಆದ್ಮಿ ಪ್ರತಿಭಟನೆ; ಕೇಂದ್ರದಿಂದ ತನಿಖಾ ಸಂಸ್ಥೆಗಳ ದುರ್ಬಳಕೆ ಆರೋಪ

| Published : Mar 23 2024, 01:48 AM IST

ಕೇಜ್ರಿವಾಲ್‌ ಬಂಧನ ಖಂಡಿಸಿ ಆಮ್ ಆದ್ಮಿ ಪ್ರತಿಭಟನೆ; ಕೇಂದ್ರದಿಂದ ತನಿಖಾ ಸಂಸ್ಥೆಗಳ ದುರ್ಬಳಕೆ ಆರೋಪ
Share this Article
  • FB
  • TW
  • Linkdin
  • Email

ಸಾರಾಂಶ

ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್‌ ಅವರನ್ನು ಬಂಧಿಸಿದೆ. ಇದಕ್ಕೆಲ್ಲ ಕೇಜ್ರಿವಾಲ್‌ ಅಗಲಿ, ನಾವಗಲೀ ಹೆದರುವುದಿಲ್ಲ ಎಂದು ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಡಾ। ಮುಖ್ಯಮಂತ್ರಿ ಚಂದ್ರು ಅವರು ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್‌ ಅವರನ್ನು ಬಂಧಿಸಿದೆ. ಇದಕ್ಕೆಲ್ಲ ಕೇಜ್ರಿವಾಲ್‌ ಅಗಲಿ, ನಾವಗಲೀ ಹೆದರುವುದಿಲ್ಲ ಎಂದು ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಡಾ। ಮುಖ್ಯಮಂತ್ರಿ ಚಂದ್ರು ಅವರು ಹೇಳಿದ್ದಾರೆ.

ಖಂಡಿಸಿ ಶುಕ್ರವಾರ ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರ ಬಂಧನವನ್ನು ಖಂಡಿಸಿ ಆಮ್‌ ಆದ್ಮಿ ಪಾರ್ಟಿ ಮುಖಂಡರು, ಕಾರ್ಯಕರ್ತರು ಕರಾಳ ದಿನ ಆಚರಿಸಿ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಚಂದ್ರು ಅವರು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೇಜ್ರಿವಾಲ್‌ ಅವರ ಜನಪ್ರಿಯತೆ ಸಹಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಕೇಂದ್ರದ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ಅರವಿಂದ ಕೇಜ್ರಿವಾಲ್‌ ಅವರನ್ನು ಬಂಧಿಸಲಾಗಿದೆ. ಸಂವಿಧಾನವನ್ನೇ ಬದಲಿಸುತ್ತೇವೆ ಎಂದು ಹೊರಟವರಿಂದ ಇನ್ನೇನು ನಿರೀಕ್ಷೆ ಮಾಡಲು ಸಾಧ್ಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಐಟಿ, ಇಡಿಯಂತಹ ಸಂಸ್ಥೆಗಳನ್ನು ಬಳಸಿಕೊಂಡು ಪ್ರತಿಪಕ್ಷಗಳ ನಾಯಕರನ್ನು ಹಣಿಯಲು ಕೇಂದ್ರ ಸರ್ಕಾರ ಸಂಚು ಮಾಡಿದೆ. ಅರವಿಂದ ಕೇಜ್ರಿವಾಲ್ ಅವರನ್ನು ಕುತಂತ್ರದಿಂದ ಬಂಧಿಸಲಾಗಿದೆ. ಅವರಿಗೆ ಜಾಮೀನು ಕೂಡ ಸಿಗದಂತೆ ತಂತ್ರ ಮಾಡಲಾಗಿದೆ. ಇದಕ್ಕೆಲ್ಲಾ ನಾವು ಹೆದರುವುದಿಲ್ಲ. ದೇಶಕ್ಕಾಗಿ ಜೈಲಿಗೆ ಹೋಗಲು ಸಿದ್ಧರಿದ್ದೇವೆ ಎಂದು ಕಿಡಿಕಾರಿದರು.

ಪ್ರಧಾನಿ ಮೋದಿ ಅವರು, ಚುನಾವಣಾ ಬಾಂಡ್ ಹೆಸರಿನಲ್ಲಿ ಕಪ್ಪುಹಣವನ್ನು ತಮ್ಮ ಪಕ್ಷದ ಅಕೌಂಟ್‌ಗೆ ಹಾಕಿಸಿಕೊಂಡಿದ್ದಾರೆ. ಜಾರಿ ನಿರ್ದೇಶನಾಲಯವನ್ನು ಬಳಸಿಕೊಂಡು ಅನೇಕ ಸಂಸ್ಥೆಗಳ ಮಾಲೀಕರನ್ನು ಹೆದರಿಸಿ ಅವರ ಪಕ್ಷದ ಚುನಾವಣಾ ಬಾಂಡ್‌ಗಳನ್ನು ಖರೀದಿ ಮಾಡುವಂತೆ ಮಾಡಿದ್ದಾರೆ. ದೇಶದ್ರೋಹದ ಕೆಲಸ ಮಾಡಿರುವುದು ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಮತ್ತು ಬಿಜೆಪಿ ನಾಯಕರು, ಅವರನ್ನು ಮೊದಲು ಜೈಲಿಗೆ ಹಾಕಬೇಕು ಎಂದರು.

ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಪೃಥ್ವಿ ರೆಡ್ಡಿ ಮಾತನಾಡಿ, ಅರವಿಂದ್ ಕೇಜ್ರಿವಾಲ್ ಅವರ ಜನಪ್ರಿಯತೆಗೆ ಹೆದರಿರುವ ಬಿಜೆಪಿ ಅವರನ್ನು ಕಟ್ಟಿಹಾಕಲು ಅಕ್ರಮವಾಗಿ ಬಂಧಿಸಿದೆ ಎಂದು ವಾಗ್ದಾಳಿ ನಡೆಸಿದರು.

ಪ್ರತಿಭಟನೆಯಲ್ಲಿ ಆಮ್ ಆದ್ಮಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಂಚಿತ್ ಸಹವಾನಿ, ರಾಜ್ಯ ಸಂಘಟನಾ ಕಾರ್ಯಕದರ್ಶಿ ಮೋಹನ್ ದಾಸರಿ, ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ. ಸದಂ, ರಾಜ್ಯ ಕಾರ್ಯದರ್ಶಿಗಳಾದ ಉಷಾ ಮೋಹನ್, ಬಸವರಾಜ ಮುದಿಗೌಡರ್, ನಗರಾಧ್ಯಕ್ಷ ಡಾ। ಸತೀಶ್ ಕುಮಾರ್, ಪ್ರಧಾನ ಕಾರ್ಯದರ್ಶಿ ಜಗದೀಶ್ ಚಂದ್ರ ಉಪಸ್ಥಿತರಿದ್ದರು.