ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ, ದೈಹಿಕ ಸಂಪರ್ಕ ಬೆಳೆಸಿ ಬಳಿಕ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಅಪರಾಧಿಗೆ ವಿಜಯಪುರದ ವಿಶೇಷ ಪೋಕ್ಸೊ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶ ಹೊಡಿಸಿದೆ.
ಕನ್ನಡಪ್ರಭ ವಾರ್ತೆ ವಿಜಯಪುರ
ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ, ದೈಹಿಕ ಸಂಪರ್ಕ ಬೆಳೆಸಿ ಬಳಿಕ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಅಪರಾಧಿಗೆ ವಿಜಯಪುರದ ವಿಶೇಷ ಪೋಕ್ಸೊ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶ ಹೊಡಿಸಿದೆ. ಮಾಳಿಂಗರಾಯ ದಂಡೋಜಿ ಶಿಕ್ಷೆಗೆ ಒಳಗಾದ ಅಪರಾಧಿ.ಘಟನೆ ವಿವರ:
ಮುದ್ದೇಬಿಹಾಳ ಠಾಣೆ ವ್ಯಾಪ್ತಿಯ ಅಪ್ರಾಪ್ತೆಯನ್ನು ಪ್ರೀತಿಸುತ್ತಿದ್ದ ಮಾಳಿಂಗರಾಯ ದಂಡೋಜಿ ನಾವಿಬ್ಬರು ಬೇರೆ ಬೇರೆ ಜಾತಿಯಾಗಿದ್ದರಿಂದ ನಮ್ಮಿಬ್ಬರ ಮನೆಯಲ್ಲಿ ಮದುವೆಗೆ ಒಪ್ಪುವುದಿಲ್ಲ. ಹಾಗಾಗಿ ಇಬ್ಬರೂ ಆತ್ಮಹತ್ಯೆ ಮಾಡಿಕೊಳ್ಳೋಣ ಎಂದು ಪುಸಲಾಯಿಸಿದ್ದ. ಬಾಲಕಿಯನ್ನು ಕರೆದೊಯ್ದು ಬೇವಿನ ಮರಕ್ಕೆ ನೇಣು ಹಾಕಿಕೊಳ್ಳುವ ನಾಟಕವಾಡಿದ್ದು, ಬಾಲಕಿ ನೇಣು ಬಿಗಿದುಕೊಳ್ಳುತ್ತಿದ್ದಂತೆ ಅಲ್ಲಿಂದ ಪರಾರಿಯಾಗಿದ್ದ. ಈ ಕುರಿತು ಬಾಲಕಿಯ ತಂದೆ 2025ರ ಅಕ್ಟೋಬರ್ 14ರಂದು ಮುದ್ದೇಬಿಹಾಳ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಪ್ರಕರಣವಾಗಿದ್ದರಿಂದ ಬಸವನ ಬಾಗೇವಾಡಿ ಡಿವೈಎಸ್‌ಪಿ ಬಲ್ಲಪ್ಪ ನಂದಗಾವಿಯವರು ವಿಜಯಪುರದ ಡಿಸಿಆರ್‌ಇ ಠಾಣೆಗೆ ಪ್ರಕರಣ ವರ್ಗಾಯಿಸಿದ್ದರು. ಪ್ರಕರಣದ ತನಿಖೆ ನಡೆಸಿದ ಡಿಸಿಆರ್‌ಇ ಡಿವೈಎಸ್‌ಪಿ ಸಂದೀಪಸಿಂಗ್ ಮುರಗೋಡ 2025 ಡಿಸೆಂಬರ್ 4ರಂದು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಈ ಕುರಿತು ವಿಚಾರಣೆ ನಡೆಸಿದ ವಿಜಯಪುರದ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಎಫ್‌ಟಿಎಸ್‌ಸಿ-1 ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶೆ ಸಿಂಧು ಪೋತದಾರ ಅವರು ಆರೋಪಿಗೆ ₹1.72 ಲಕ್ಷ ದಂಡ ಹಾಗೂ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ವಿ.ಜಿ.ಹಗುರಗುಂಡ ವಾದ ಮಂಡಿಸಿದ್ದರು.
