ಗೈರುಹಾಜರಿ: ವಿದ್ಯಾರ್ಥಿಗಳ ಮನೆಗಳಿಗೆ ಡಿಡಿಪಿಐ ಭೇಟಿ

| Published : Nov 22 2024, 01:19 AM IST

ಸಾರಾಂಶ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಉತ್ತಮಪಡಿಸುವ ಜವಾಬ್ದಾರಿಯನ್ನು ಹೊತ್ತಿರುವ ಉಪನಿರ್ದೇಶಕ ಬಸವರಾಜೇಗೌಡ ಖುದ್ದಾಗಿ ಹಳ್ಳಿಹಳ್ಳಿಗೆ ವಿದ್ಯಾರ್ಥಿಗಳ ಮನೆಗಳಿಗೆ ಭೇಟಿ ನೀಡುತ್ತಿರುವುದು, ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಶಿಕ್ಷಣದ ಮಹತ್ವವನ್ನು ತಿಳಿಸುತ್ತಿರುವುದು ನಿಜಕ್ಕೂ ಶ್ಲಾಘನೀಯ ವಿಚಾರವಾಗಿದೆ ಎಂದು ಸಾರ್ವಜನಿಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಚನ್ನಪಟ್ಟಣ

ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಸುಧಾರಣೆ, ಶಿಕ್ಷಣದ ಗುಣಮಟ್ಟ ಹೆಚ್ಚಳ ಸೇರಿದಂತೆ ಜಿಲ್ಲೆಯ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾಗಿ ಶಿಕ್ಷಣ ಇಲಾಖೆ ಹಲವು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದ್ದು, ಜಿಲ್ಲೆಯ ಡಿಡಿಪಿಐ ಬಸವರಾಜೇಗೌಡ ನೇತೃತ್ವದ ಅಧಿಕಾರಿಗಳ ತಂಡ ವಿದ್ಯಾರ್ಥಿಗಳ ಮನೆಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು.

ತಾಲೂಕಿನ ಬೇವೂರು ಗ್ರಾಮದ ಸಿದ್ದರಾಮೇಶ್ವರ ಪ್ರೌಢಶಾಲೆಗೆ ಭೇಟಿ ನೀಡಿದ ಉಪನಿರ್ದೇಶಕರು, ಶಾಲೆಗೆ ನಿರಂತರವಾಗಿ ಅನಧಿಕೃತವಾಗಿ ಗೈರು ಹಾಜರಾಗುತ್ತಿದ್ದ ೧೦ನೇ ತರಗತಿಯ ವಿದ್ಯಾರ್ಥಿಗಳ ಮಾಹಿತಿಯನ್ನು ಪಡೆದುಕೊಂಡು ಸಂಬಂಧಿಸಿದ ವಿದ್ಯಾರ್ಥಿಗಳ ಮನೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳು ಮತ್ತು ಪೋಷಕರ ಮನವೊಲಿಸಿ ವಿದ್ಯಾರ್ಥಿಗಳನ್ನು ತಮ್ಮ ಇಲಾಖೆಯ ಸ್ವಂತ ಜೀಪಿನಲ್ಲಿ ಕೂರಿಸಿಕೊಂಡು ಬಂದು ಶಾಲೆಗೆ ಸೇರಿಸುವುದರ ಮೂಲಕ ಶೈಕ್ಷಣಿಕ ಬದ್ಧತೆಯೊಂದಿಗೆ ಸಾಮಾಜಿಕ ಕಳಕಳಿ ಮೆರೆದರು.

ಬೇವೂರು, ಎಂ. ಕೆ. ದೊಡ್ಡಿ, ಗುಡ್ಡೆತಿಮ್ಮಸಂದ್ರ, ಕೆಲಗೆರೆ, ಮೋಗೇನಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳಿಗೆ ತೆರಳಿ ಗೈರು ಹಾಜರಾಗುತ್ತಿದ್ದ ವಿದ್ಯಾರ್ಥಿಗಳ ಮನೆಗಳಿಗೆ ಭೇಟಿಕೊಟ್ಟು ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ಶಿಕ್ಷಣದ ಮಹತ್ವದ ಬಗ್ಗೆ ತಿಳಿವಳಿಕೆ ನೀಡಿದರು.

ಪರೀಕ್ಷೆ ಹತ್ತಿರವಾಗುತ್ತಿದ್ದು, ಶಾಲೆಗೆ ಗೈರು ಹಾಜರಾಗಬಾರದು, ಓದಿನ ಕಡೆಗೆ ಹೆಚ್ಚು ಗಮನ ಕೇಂದ್ರೀಕರಿಸಬೇಕು, ಓದಿದ ವಿಚಾರಗಳನ್ನು ಮನನ ಮಾಡಿಕೊಳ್ಳಬೇಕು, ಮನೆಯಲ್ಲಿ ಇರುವ ಅವಧಿಯನ್ನು ಓದಿಗೆ ಪೂರಕವಾಗಿ ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದ ಡಿಡಿಪಿಐ, ಪಾಲಕರಿಗೆ ಮಕ್ಕಳ ಕಲಿಕೆಗೆ ಸಹಕಾರ ನೀಡುವಂತೆ, ಒತ್ತಡ ಹೇರದಂತೆ, ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ತಿಳಿಸಿದರು.

ಉಪನಿರ್ದೇಶಕರ ಕಚೇರಿಯ ಶಿಕ್ಷಣಾಧಿಕಾರಿ ಮಂಜುಳಾ, ಬೇವೂರು ಸಿದ್ದರಾಮೇಶ್ವರ ವಿದ್ಯಾಸಂಸ್ಥೆಯ ಮುಖ್ಯಶಿಕ್ಷಕಿ ಗೌರಮ್ಮ, ದೈಹಿಕ ಶಿಕ್ಷಣ ಶಿಕ್ಷಕ ನಾಗೇಶ್ ಗೌಡ ಮೊದಲಾದವರು ಉಪಸ್ಥಿತರಿದ್ದರು.

ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಉತ್ತಮಪಡಿಸುವ ಜವಾಬ್ದಾರಿಯನ್ನು ಹೊತ್ತಿರುವ ಉಪನಿರ್ದೇಶಕ ಬಸವರಾಜೇಗೌಡ ಖುದ್ದಾಗಿ ಹಳ್ಳಿಹಳ್ಳಿಗೆ ವಿದ್ಯಾರ್ಥಿಗಳ ಮನೆಗಳಿಗೆ ಭೇಟಿ ನೀಡುತ್ತಿರುವುದು, ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಶಿಕ್ಷಣದ ಮಹತ್ವವನ್ನು ತಿಳಿಸುತ್ತಿರುವುದು ನಿಜಕ್ಕೂ ಶ್ಲಾಘನೀಯ ವಿಚಾರವಾಗಿದೆ ಎಂದು ಸಾರ್ವಜನಿಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.