ವಿಟ್ಲ ಕಂದಾಯ ನಿರೀಕ್ಷಕರಿಗೆ ನಿಂದನೆ, ಕರ್ತವ್ಯಕ್ಕೆ ಅಡ್ಡಿ: ಸೂಕ್ತ ಕ್ರಮಕ್ಕೆ ಆಗ್ರಹ

| Published : Nov 16 2024, 12:35 AM IST

ವಿಟ್ಲ ಕಂದಾಯ ನಿರೀಕ್ಷಕರಿಗೆ ನಿಂದನೆ, ಕರ್ತವ್ಯಕ್ಕೆ ಅಡ್ಡಿ: ಸೂಕ್ತ ಕ್ರಮಕ್ಕೆ ಆಗ್ರಹ
Share this Article
  • FB
  • TW
  • Linkdin
  • Email

ಸಾರಾಂಶ

ಪ್ರಕರಣಕ್ಕೆ ಸಂಬಂಧಿಸಿ ಕಂದಾಯ ಇಲಾಖೆ ನೌಕರರ ಸಂಘವೂ ಖಂಡನೆ ವ್ಯಕ್ತಪಡಿಸಿದ್ದು, ತಾಲೂಕು ಸಂಘದ ಗೌರವಾಧ್ಯಕ್ಷ ರಾಜೇಶ್ ನಾಯ್ಕ್ ಈ ಕುರಿತು ಪ್ರಕಟಣೆ ನೀಡಿ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಬಂಟ್ವಾಳ

ವಿಟ್ಲ ಕಂದಾಯ ನಿರೀಕ್ಷಕರ ಕಚೇರಿಯಲ್ಲಿ ಕರ್ತವ್ಯನಿರತರಾಗಿದ್ದ ಕಂದಾಯ ನಿರೀಕ್ಷಕ ಪ್ರಶಾಂತ್ ಶೆಟ್ಟಿ ಅವರ ಕಚೇರಿಗೆ ಅಕ್ರಮವಾಗಿ ಪ್ರವೇಶಿಸಿ, ನಿಂದಿಸಿ, ಜೀವ ಬೆದರಿಕೆ ಒಡ್ಡಿ, ಕಚೇರಿ ಸೊತ್ತುಗಳನ್ನು ಧ್ವಂಸ ಮಾಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಬಂಟ್ವಾಳ ಆಡಳಿತ ಸೌಧದ ಮುಂಭಾಗ ರಾಜ್ಯ ಸರಕಾರಿ ನೌಕರರ ಸಂಘದ ತಾಲೂಕು ಶಾಖೆ ವತಿಯಿಂದ ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು.

ಬಂಟ್ವಾಳ ತಹಸೀಲ್ದಾರ್ ಅರ್ಚನಾ ಡಿ. ಭಟ್ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ ಸಂಘದ ತಾಲೂಕು ಅಧ್ಯಕ್ಷ ಉಮಾನಾಥ ರೈ ಮೇರಾವು, ನಿಯೋಜಿತ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಮಾತನಾಡಿ, ಘಟನೆಯಿಂದ ಸರಕಾರಿ ನೌಕರರ ಮನೋಸ್ಥೈರ್ಯ ಕುಂದಿದ್ದು, ಕಚೇರಿಯಲ್ಲಿ ಕೆಲಸ ಮಾಡಲು ಹೆದರುವಂಥ ಪರಿಸ್ಥಿತಿ ಉಂಟಾಗಿದೆ. ಕೇಸು ದಾಖಲಾದ ಆರೋಪಿಯೊಬ್ಬರು ಬಂಟ್ವಾಳ ತಹಸೀಲ್ದಾರ್ ಕಚೇರಿಗೆ ಆಗಮಿಸಿ ಶಿರಸ್ತೇದಾರ್‌ಗೆ ಬೆದರಿಕೆ ಹಾಕಿದ್ದಾರೆ. ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದರು. ಕಂದಾಯ ಇಲಾಖೆ ನೌಕರರ ಸಂಘ ಖಂಡನೆ: ಪ್ರಕರಣಕ್ಕೆ ಸಂಬಂಧಿಸಿ ಕಂದಾಯ ಇಲಾಖೆ ನೌಕರರ ಸಂಘವೂ ಖಂಡನೆ ವ್ಯಕ್ತಪಡಿಸಿದ್ದು, ತಾಲೂಕು ಸಂಘದ ಗೌರವಾಧ್ಯಕ್ಷ ರಾಜೇಶ್ ನಾಯ್ಕ್ ಈ ಕುರಿತು ಪ್ರಕಟಣೆ ನೀಡಿ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಮನವಿ ಸಲ್ಲಿಕೆ ಸಂದರ್ಭ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಉಮಾನಾಥ ರೈ ಮೇರಾವು, ನಿಯೋಜಿತ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ, ರಾಜ್ಯ ಪರಿಷತ್ತು ಸದಸ್ಯ ಜನಾರ್ದನ ಜೆ, ತಾಲೂಕು ಖಜಾಂಚಿ ಬಸಯ್ಯ ಆಲಮಟ್ಟಿ, ಗ್ರಾಮಾಡಳಿತ ಅಧಿಕಾರಿಗಳ ಸಂಘದ ತಾಲೂಕು ಅಧ್ಯಕ್ಷ ಅನಿಲ್ ಕೆ ಪೂಜಾರಿ, ಉಪತಹಸೀಲ್ದಾರ್‌ಗಳಾದ ನವೀನ್ ಬೆಂಜನಪದವು, ನರೇಂದ್ರನಾಥ ಮಿತ್ತೂರು, ದಿವಾಕರ ಮುಗುಳ್ಯ, ಕಂದಾಯ ನಿರೀಕ್ಷಕರಾದ ವಿಜಯ್, ಪ್ರಶಾಂತ್ ಶೆಟ್ಟಿ, ಸರಕಾರಿ ನೌಕರರ ಸಂಘದ ನಾನಾ ಇಲಾಖೆಯ ನಿರ್ದೇಶಕರು, ಪದಾಧಿಕಾರಿಗಳು ಉಪಸ್ಥಿತರಿದ್ದರು.