ಸಾರಾಂಶ
ಕನ್ನಡಪ್ರಭ ವಾರ್ತೆ ಚಾಮರಾಜನಗರರಾಜ್ಯದ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ಹೊರಟಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ನಗರದಲ್ಲಿ ಎಬಿವಿಪಿ ವತಿಯಿಂದ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು. ಜಿಲ್ಲಾಡಳಿತ ಭವನದ ಆವರಣದಲ್ಲಿ ಜಮಾಯಿಸಿದ ಕಾರ್ಯಕರ್ತರು ಸರ್ಕಾರದ ನಡೆಯನ್ನು ಖಂಡಿಸಿ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಕೆಲ ಕಾಲ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿ ಗೀತಾ ಹುಡೇದ ಅವರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯ ಕಾರ್ಯದರ್ಶಿ ಎಚ್. ಕೆ. ಪ್ರವೀಣ್ ವಿಶ್ವವಿದ್ಯಾಲಯಗಳು ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆಯ ಕೇಂದ್ರಗಳಾಗಿದ್ದು ಅಲ್ಲಿಂದ ಹೊರಡುವ ವಿದ್ಯಾರ್ಥಿಗಳು ದೇಶದ ಅಭಿವೃದ್ಧಿಗೆ ಪೂರಕವಾಗಿ ಕಾರ್ಯನಿರ್ವಹಿಸುವ ವ್ಯಕ್ತಿಗಳಾಗುತ್ತಾರೆ ಎಂದರು.
ಅಂತಹ ವಿಶ್ವವಿದ್ಯಾಲಯಗಳಿಗೆ ಮೂಲಭೂತ ಸೌಲಭ್ಯಗಳನ್ನು ನೀಡುವುದು ಸರ್ಕಾರಗಳ ಆದ್ಯ ಕರ್ತವ್ಯ, ಆದರೆ ರಾಜ್ಯ ಸರ್ಕಾರ ಹಿಂದಿನ ಸರ್ಕಾರ ಘೋಷಣೆ ಮಾಡಿದ್ದ ಹೊಸ ವಿಶ್ವವಿದ್ಯಾಲಯಗಳನ್ನು ಮುಚ್ಚಲು ಹೊರಟಿರುವುದನ್ನು ಅತ್ಯಂತ ಖಂಡನೀಯ ಎಂದರು. ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ ನೇತೃತ್ವದ ಸಚಿವ ಸಂಪುಟದ ಉಪಸಮಿತಿಯು ಆರ್ಥಿಕ ಹಾಗೂ ಮೂಲಭೂತ ಸೌಲಭ್ಯಗಳ ನೆಪವನ್ನು ಹೇಳಿ ವಿಶ್ವವಿದ್ಯಾಲಯಗಳನ್ನು ಮುಚ್ಚಲು ಹೊರಟಿರುವುದು ಶಿಕ್ಷಣ ವಿರೋಧಿ ನೀತಿಯಾಗಿದೆ ಎಂದರು.ಸರ್ಕಾರಗಳು ವಿಶ್ವವಿದ್ಯಾಲಯಗಳ ಸ್ಥಾಪನೆ ಹಾಗೂ ಮುಚ್ಚುವ ಮನಸೋಇಚ್ಛೆ ಕಾರ್ಯದಿಂದ ವಿಶ್ವವಿದ್ಯಾಲಯಗಳ ಮೇಲೆ ಮತ್ತು ಶೈಕ್ಷಣಿಕ ಕ್ಷೇತ್ರದ ಮೇಲೆ ಇರುವ ವಿಶ್ವಾಸಾರ್ಹತೆ ಕಡಿಮೆಯಾಗುತ್ತದೆ. ವಿಶ್ವವಿದ್ಯಾಲಯಗಳ ಕುರಿತು ಯಾವುದೇ ನಿರ್ಣಯಗಳನ್ನು ತೆಗೆದುಕೊಳ್ಳಬೇಕಾದರೆ ಶಿಕ್ಷಣ ತಜ್ಞರ ಸಲಹೆಗಳನ್ನು ತೆಗೆದುಕೊಳ್ಳಬೇಕೆ ಹೊರತು ರಾಜಕೀಯ ಕೇಂದ್ರಿತ ನಿರ್ಧಾರಗಳು ಆಗಬಾರದು ಎಂದರು. ಸಾಮಾನ್ಯವಾಗಿ ೧೦,೦೦೦ ವಿದ್ಯಾರ್ಥಿಗಳಿಗೆ ಒಂದು ವಿಶ್ವವಿದ್ಯಾಲಯ ಇರಬೇಕೆಂಬುದು ಆದರ್ಶ ವಿಚಾರವಾಗಿದೆ. ಆದರೆ ನಮ್ಮಲ್ಲಿರುವ ವಿದ್ಯಾರ್ಥಿಗಳ ಸಂಖ್ಯೆಗೆ ಹೋಲಿಕೆ ಮಾಡಿದರೆ ಈಗಿರುವ ವಿಶ್ವವಿದ್ಯಾಲಯಗಳ ಸಂಖ್ಯೆ ಕಡಿಮೆ ಇದೆ. ಯಾವುದೇ ಸರ್ಕಾರಗಳು ಘೋಷಣೆ ಮಾಡಿದ ವಿಶ್ವವಿದ್ಯಾಲಯಗಳನ್ನು ಅಭಿವೃದ್ಧಿಪಡಿಸಬೇಕೆ ಹೊರತು ಅತಂತ್ರಗೊಳಿಸಬಾರದು, ವಿಶ್ವವಿದ್ಯಾಲಯಗಳ ಅಭಿವೃದ್ಧಿಗೆ ಕಿಂಚಿತ್ತೂ ಗಮನಕೊಡದೆ ಈಗ ಮೂಲಭೂತ ಸೌಲಭ್ಯಗಳ ನೆಪವೊಡ್ಡಿ ಮುಚ್ಚುತ್ತಿರುವುದನ್ನು ನೋಡಿದರೆ ಸರ್ಕಾರ ವಿದ್ಯಾರ್ಥಿ ವಿರೋಧಿ, ಶಿಕ್ಷಣ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದರು, ಕೂಡಲೇ ವಿಶ್ವವಿದ್ಯಾಲಯಗಳನ್ನು ಮುಚ್ಚುವ ನಿರ್ಧಾರದಿಂದ ಹಿಂದೆ ಸರಿದು ವಿಶ್ವವಿದ್ಯಾಲಯಗಳ ಮೂಲಭೂತ ಸೌಲಭ್ಯಕ್ಕೆ ಅನುದಾನವನ್ನು ನೀಡಿ ವಿಶ್ವವಿದ್ಯಾಲಯಗಳ ಉನ್ನತೀಕರಣಕ್ಕಾಗಿ ಅನುದಾನ ನೀಡುವಂತೆ ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಗಂಗಾಧರ್ ಪಂಜನಿ, ಎಚ್.ಬಿ.ಪ್ರಜ್ವಲ್, ಮನೋಜ್, ಅಂಕಿತ್, ಆದಿತ್ಯ, ಸಂಚಿತಾ, ಅಂಜಲಿ, ಚಂದು ಇತರರು ಭಾಗವಹಿಸಿದ್ದರು.