ಸಾರಾಂಶ
ಗದಗ: ಬಿಸಿಎಂ ಇಲಾಖೆಯ ಮೂಲಕ ನಡೆಯುತ್ತಿರುವ ಹಾಸ್ಟೇಲ್ ಗಳಿಗೆ ವಿದ್ಯಾರ್ಥಿಗಳ ಆಯ್ಕೆ ಪ್ರಕ್ರಿಯೆಯಲ್ಲಿನ ವಿಳಂಬ, ಸಮರ್ಪಕ ಬಸ್ ಸೌಲಭ್ಯ ಸೇರಿದಂತೆ ಅಗತ್ಯ ಬೇಡಿಕೆಗಳಿಗೆ ಆಗ್ರಹಿಸಿ ಬುಧವಾರ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತ ಪಡಿಸಿದರು.
ಗದಗ ನಗರದ ರಿಂಗ್ ರೋಡ ಸಮೀಪದಲ್ಲಿರುವ ತಾಲೂಕು ಬಿಸಿಎಂ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ, ಜಿಲ್ಲಾ ಮಟ್ಟದ ಅಧಿಕಾರಿಗಳ ವರ್ತನೆಯ ವಿರುದ್ಧ ಘೋಷಣೆ ಕೂಗುತ್ತಾ ಆಕ್ರೋಶ ವ್ಯಕ್ತಪಡಿಸುತ್ತಿದ್ದರು.ಈ ವೇಳೆ 2 ನೇ ಅಂತಸ್ತಿನಲ್ಲಿರುವ ಕಚೇರಿಗೆ ನುಗ್ಗಲು ಯತ್ನಿಸಿದರು. ಇದನ್ನು ಗಮನಿಸಿದ ಪೊಲೀಸರು ವಿದ್ಯಾರ್ಥಿಗಳನ್ನು ತಡೆಯಲು ಮುಂದಾದರು. ಈ ವೇಳೆ ತಳ್ಳಾಟ ನೂಕಾಟವೂ ನಡೆಯಿತು. ರಾಜ್ಯದಲ್ಲಿ ಶಾಲೆ- ಕಾಲೇಜುಗಳು ಆರಂಭವಾಗಿ ಎರಡು ತಿಂಗಳು ಕಳೆದರೂ ಹಾಸ್ಟೆಲ್ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿಲ್ಲ. ಒಂದೆಡೆ ಬಸ್ ಸೌಕರ್ಯ ಇಲ್ಲದೇ ಗ್ರಾಮೀಣ ಭಾಗದಿಂದ ಬರುವ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಮತ್ತೊಂದೆಡೆ ಹಾಸ್ಟೆಲ್ ಇಲ್ಲದೇ ಬಡ ವರ್ಗದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ ಎಂದು ಆರೋಪಿಸಿದರು.
ಹಾಸ್ಟೆಲ್ ಇಲ್ಲದೇ ವಿದ್ಯಾರ್ಥಿಗಳು ಎಲ್ಲಿ ಆಶ್ರಯ ಪಡೆದು ವಿದ್ಯಾಭ್ಯಾಸ ಮಾಡಬೇಕು ಎನ್ನುವ ಪ್ರಾಥಮಿಕ ಜ್ಞಾನವೂ ಸರ್ಕಾರ ಮತ್ತು ಅಧಿಕಾರಿಗಳಿಗೆ ಇಲ್ಲವಾಗಿದೆ. ಇಲಾಖೆ ಅಧಿಕಾರಿಗಳು ಈ ಕೂಡಲೇ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಿ ವಿದ್ಯಾರ್ಥಿಗಳಿಗೆ ಪ್ರವೇಶಾತಿ ನೀಡಬೇಕು ಎಂದು ಒತ್ತಾಯಿಸಿದರು.ಘಟನೆಯ ತೀವ್ರತೆ ಪಡೆದುಕೊಳ್ಳುವ ಸಾಧ್ಯತೆ ಹಿನ್ನೆಲೆಯಲ್ಲಿ ಡಿಎಸ್ಪಿ ಹಾಗೂ ಎಡಿಶನಲ್ ಎಸ್ಪಿ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸುತ್ತಿದ್ದಂತೆ ಪ್ರತಿಭಟನೆ ಕೈ ಬಿಟ್ಟ ವಿದ್ಯಾರ್ಥಿಗಳು ನಮ್ಮ ಸಮಸ್ಯೆಗಳನ್ನು ಕೂಡಲೇ ಬಗೆಹರಿಸುವಂತೆ ಆಗ್ರಹಿಸಿದರು.
ಗಾಜು ಪುಡಿಪುಡಿಬಿಸಿಎಂ ತಾಲೂಕು ವಿಸ್ತೀರ್ಣಾಧಿಕಾರಿ ಕಚೇರಿ ಎದುರು ಜಮಾಯಿಸಿದ್ದ ವಿದ್ಯಾರ್ಥಿಗಳು ಕಚೇರಿ ಪ್ರವೇಶಕ್ಕೆ ಮುಂದಾದರು. ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾ ನಿರತ ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆಯಿತು. ಕೆಲವರು ಕಚೇರಿ ಪ್ರವೇಶಕ್ಕೆ ಮುಂದಾದಾಗ ನೂಕುನುಗ್ಗಲು ನಡೆದು ಕಿಟಕಿಯ ಗಾಜುಗಳು ಪುಡಿಪುಡಿಯಾದವು. ಇದರಿಂದ ಕೆಲಕಾಲ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು. ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದರು. ಇಲಾಖೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಬಂದು ಬೇಡಿಕೆ ಈಡೇರಿಸುವ ಭರವಸೆ ನೀಡಿದ ನಂತರ ವಿದ್ಯಾರ್ಥಿಗಳು ಪ್ರತಿಭಟನೆ ಕೈಬಿಟ್ಟರು.