ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ)ಯಲ್ಲಿ ಪಶುವೈದ್ಯಾಧಿಕಾರಿ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ‍್ಯಕರ್ತರು ತುಮಕೂರು ನಗರದ ಟೌನ್ ಹಾಲ್ ವೃತ್ತದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.
ಕನ್ನಡಪ್ರಭ ವಾರ್ತೆ ತುಮಕೂರು
ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ)ಯಲ್ಲಿ ಪಶುವೈದ್ಯಾಧಿಕಾರಿ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ‍್ಯಕರ್ತರು ತುಮಕೂರು ನಗರದ ಟೌನ್ ಹಾಲ್ ವೃತ್ತದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರು ಟೌನ್ ಹಾಲ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ, ಸರ್ಕಾರಿ ಹುದ್ದೆಗಳನ್ನು ಮಾರಾಟಕ್ಕಿಟ್ಟ ಸರ್ಕಾಪಕ್ಕೆ ಧಿಕ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕೆಪಿಎಸ್‌ಸಿ ನೇಮಕಾತಿ ಅಕ್ರಮದ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕು ಹಾಗೂ ವೈರಲ್ ಆಗಿರುವ ಆಡಿಯೋಗಳ ವೈಜ್ಞಾನಿಕ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.ಈ ವೇಳೆ ಮಾತನಾಡಿದ ಎಬಿವಿಪಿ ತುಮಕೂರು ವಿಭಾಗ ಸಂಚಾಲಕ ಎಚ್.ಆರ್. ಗುರುಪ್ರಸಾದ್, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಕೇಂದ್ರ ಸಚಿವರ ತಲೆದಂಡವಾಗಿದೆ. ಈಗ ರಾಜ್ಯದಲ್ಲಿ ಕೆಪಿಎಸ್‌ಸಿ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂಬ ಗಂಭೀರ ಆರೋಪ ಕೇಳಿಬರುತ್ತಿದೆ. ಇದಕ್ಕೆ ಯಾರು ಹೊಣೆ? ಶಾಲಾ-ಕಾಲೇಜುಗಳು ಆರಂಭವಾಗಿ ಎರಡು ತಿಂಗಳು ಕಳೆದರೂ ಇನ್ನೂ ಪೂರ್ಣ ಪ್ರಮಾಣದಲ್ಲಿ ಪಠ್ಯಪುಸ್ತಕ ವಿತರಣೆ ಆಗಿಲ್ಲ. ರಾಜ್ಯಕ್ಕೆ ಶಿಕ್ಷಣ ಸಚಿವರೇ ಇಲ್ಲದಂತಾಗಿದೆ ಎಂದರು. ಎಬಿವಿಪಿ ತುಮಕೂರು ವಿಭಾಗ ಸಂಘಟನಾ ಕಾರ‍್ಯದರ್ಶಿ ಎಚ್.ಕೆ. ಪ್ರವೀಣ್ ಮಾತನಾಡಿ, ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಸರ್ಕಾರ ಚೆಲ್ಲಾಟ ಆಡಬಾರದು. ಕೆಪಿಎಸ್‌ಸಿ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.ಎಬಿವಿಪಿ ಜಿಲ್ಲಾ ಸಂಚಾಲಕ ಸಿದ್ದರಾಮಯ್ಯ ಮಾತನಾಡಿ, ಕೆಪಿಎಸ್‌ಸಿ ನೇಮಕಾತಿಯಲ್ಲಿ ಪಾರದರ್ಶಕತೆ ಕಾಪಾಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಟೀಕಿಸಿದರು.ಪ್ರತಿಭಟನೆಯಲ್ಲಿ ಎಬಿವಿಪಿ ಜಿಲ್ಲಾ ಸಂಚಾಲಕ ಸಿದ್ದರಾಮಯ್ಯ, ರಾಜ್ಯ ಕಾರ‍್ಯಸಮಿತಿ ಸದಸ್ಯ ಲೋಕೇಶ್, ವಿದ್ಯಾರ್ಥಿನಿ ಪ್ರಮುಖ ವರಲಕ್ಷ್ಮಿ, ರಂಜಿತ, ಯಮುನಾ, ತನುಜಾ, ಜೀವನ್, ಅರುಣ್ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.