ಕನ್ನಡಪ್ರಭ ವಾರ್ತೆ ಹೊಸದುರ್ಗ
ವಿದ್ಯಾರ್ಥಿಗಳ ಸಾರಿಗೆ ವ್ಯವಸ್ಥೆ ಸುಧಾರಣೆ, ವಿದ್ಯಾರ್ಥಿ ನಿಲಯಗಳಲ್ಲಿ ಮೂಲಸೌಕರ್ಯ ಕಲ್ಪಿಸುವುದು ಹಾಗೂ ಸರ್ಕಾರಿ ಕಾಲೇಜುಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ನಗರದ ಟಿ.ಬಿ.ವೃತ್ತದವರೆಗೆ ಸಾಗಿತು. ಈ ವೇಳೆ ಪ್ರತಿಭಟನಾಕಾರರು ತಾಲೂಕು ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಗ್ರಾಮೀಣ ಭಾಗಗಳಿಂದ ಕಾಲೇಜುಗಳಿಗೆ ಆಗಮಿಸುವ ವಿದ್ಯಾರ್ಥಿಗಳು ಬಸ್‌ಗಳ ಕೊರತೆಯಿಂದ ಪ್ರತಿನಿತ್ಯ ಸಂಕಷ್ಟ ಅನುಭವಿಸುತ್ತಿದ್ದಾರೆ. ಬಸ್ ಪಾಸ್ ಹೊಂದಿದ್ದರೂ ಕೆಲವೊಮ್ಮೆ ವಿದ್ಯಾರ್ಥಿಗಳನ್ನು ಬಸ್‌ಗೆ ಹತ್ತಿಸದ ಘಟನೆಗಳು ನಡೆಯುತ್ತಿವೆ. ಹೀಗಾಗಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹೆಚ್ಚುವರಿ ಬಸ್‌ಗಳನ್ನು ಕಾರ್ಯಾಚರಣೆಗೆ ಇಳಿಸಬೇಕು. ಅಲ್ಲದೆ ಪರೀಕ್ಷಾ ಅವಧಿಯಲ್ಲಿ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿದರು.ಡಿ.ದೇವರಾಜ ಅರಸು ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಲ್ಲಿ ಕುಡಿಯುವ ನೀರು, ಸ್ವಚ್ಛತೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳ ಕೊರತೆ ಇದೆ. ಈ ಸಮಸ್ಯೆಗಳನ್ನು ತಕ್ಷಣವೇ ನಿವಾರಿಸಬೇಕು. ಜೊತೆಗೆ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕರ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತ ಕಾಪಾಡಬೇಕು ಎಂದು ಒತ್ತಾಯಿಸಿ ತಾಲೂಕು ದಂಡಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ಎಬಿವಿಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಚಂದನ್ ಕುಮಾರ್ ಹೆಬ್ಬಳ್ಳಿ, ಕಾರ್ಯಕರ್ತರಾದ ಸ್ವಾಮಿ, ಆದರ್ಶ, ಪಲ್ಲವಿ, ಮಯೂರ್, ಲಕ್ಷ್ಮೀ, ಚಿಂತನ್, ಹರ್ಷಿತಾ, ಪವಿತ್ರಾ ಸೇರಿದಂತೆ ಹಲವರು ಭಾಗವಹಿಸಿದ್ದರು.