ಪ್ರತಿಭಟನಾ ಸ್ಥಳಕ್ಕೆ ಗುಬ್ಬಿ ಠಾಣೆಯ ಪೊಲೀಸರು ಭೇಟಿ ನೀಡಿ, ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಂದ ಸಮಸ್ಯೆಯನ್ನು ಆಲಿಸುವ ಮೂಲಕ ಸಂಬಂಧಪಟ್ಟ ಸಾರಿಗೆ ಇಲಾಖೆ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ ಬಸ್ ಸೌಲಭ್ಯ ಕಲ್ಪಿಸುವ ಬಗ್ಗೆ ಕ್ರಮ ವಹಿಸುವಂತೆ ತಿಳಿಸಿದರು.
ಕನ್ನಡಪ್ರಭ ವಾರ್ತೆ ಗುಬ್ಬಿ ಸಮರ್ಪಕವಾಗಿ, ಸಮಯಕ್ಕೆ ಸರಿಯಾಗಿ ಬಸ್ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ, ಗುಬ್ಬಿ ತಾಲೂಕಿನ ಕಲ್ಲೂರು ಕ್ರಾಸ್ ನಲ್ಲಿ ಶುಕ್ರವಾರ ಎಬಿವಿಪಿ ವಿದ್ಯಾರ್ಥಿ ಸಂಘಟನೆಯ ವತಿಯಿಂದ ಬಸ್ ತಡೆದು ಪ್ರತಿಭಟನೆ ನಡೆಸಲಾಯಿತು.
ನೂರಾರು ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಎಬಿವಿಪಿ ವಿದ್ಯಾರ್ಥಿ ಘಟಕದ ಪದಾಧಿಕಾರಿಗಳು ಹಾಗೂ ಕಾಲೇಜು ವಿದ್ಯಾರ್ಥಿಗಳು ಸಾರಿಗೆ ನಿಗಮದ ಅಧಿಕಾರಿಗಳ ಲೋಪದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.ಮುಂಜಾನೆ ಕಲ್ಲೂರ್ ಕ್ರಾಸ್ ನಿಂದ ತುಮಕೂರು, ಗುಬ್ಬಿ ನಗರಕ್ಕೆ ಶಾಲಾ ಕಾಲೇಜಿಗೆ ತೆರಳುವಂತಹ ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ಸಾರಿಗೆ ಬಸ್ ಸೌಲಭ್ಯ ಇಲ್ಲದೆ ಸಾಕಷ್ಟು ತೊಂದರೆ ಆಗುತ್ತಿದ್ದು, ಸಮಸ್ಯೆ ಪರಿಹರಿಸುವಂತೆ ಕಳೆದ ಮೂರು ತಿಂಗಳ ಹಿಂದೆ ಪ್ರತಿಭಟನೆ ಸಹ ನಡೆಸಲಾಗಿತ್ತು. ಸ್ವಲ್ಪ ದಿನಗಳ ಕಾಲ ಬಸ್ ವ್ಯವಸ್ಥೆ ಕಲ್ಪಿಸಿದ ಸಾರಿಗೆ ಅಧಿಕಾರಿಗಳು ಪುನಃ ಬಸ್ ಸಮಸ್ಯೆ ಎದುರಾದರೂ ಸಹ ಶಾಶ್ವತವಾಗಿ ಸಮಸ್ಯೆ ಪರಿಹರಿಸುವಲ್ಲಿ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ಸಾರಿಗೆ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗುವ ಮೂಲಕ ಆಕ್ರೋಶ ಹೊರಹಾಕಿದರು.
ಪ್ರತಿಭಟನಾ ಸ್ಥಳಕ್ಕೆ ಗುಬ್ಬಿ ಠಾಣೆಯ ಪೊಲೀಸರು ಭೇಟಿ ನೀಡಿ, ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಂದ ಸಮಸ್ಯೆಯನ್ನು ಆಲಿಸುವ ಮೂಲಕ ಸಂಬಂಧಪಟ್ಟ ಸಾರಿಗೆ ಇಲಾಖೆ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ ಬಸ್ ಸೌಲಭ್ಯ ಕಲ್ಪಿಸುವ ಬಗ್ಗೆ ಕ್ರಮ ವಹಿಸುವಂತೆ ತಿಳಿಸಿದರು.ತುರುವೇಕೆರೆ ಕೆ ಎಸ್ ಆರ್ ಟಿ ಸಿ ಬಸ್ ಘಟಕದ ಡಿಪೋ ವ್ಯವಸ್ಥಾಪಕ ಕಂಬಯ್ಯ, ಸಮಯಕ್ಕೆ ಸರಿಯಾಗಿ ವಿದ್ಯಾರ್ಥಿಗಳ ಅನುಕೂಲಕ್ಕೆ ಸಾರಿಗೆ ವ್ಯವಸ್ಥೆ ಕಲ್ಪಿಸುವ ಬಗ್ಗೆ ವಿದ್ಯಾರ್ಥಿಗಳಿಗೆ ಭರವಸೆ ನೀಡಿದರು.
ಪ್ರತಿಭಟನೆಯಲ್ಲಿ ಎಬಿವಿಪಿ ಸಂಘಟನೆಯ ವಿದ್ಯಾರ್ಥಿ ಘಟಕದ ಮುಖಂಡರು, ಶಾಲಾ- ಕಾಲೇಜು ವಿದ್ಯಾರ್ಥಿ- ವಿದ್ಯಾರ್ಥಿನಿಯರು, ಸಾರ್ವಜನಿಕರು ಭಾಗವಹಿಸಿದ್ದರು.