ಸಾರಾಂಶ
ವಿದ್ಯಾರ್ಥಿ ವೇತನ ಬಿಡುಗಡೆ ಮಾಡಬೇಕು ಹಾಗೂ ವಿವಿಧ ಹಾಸ್ಟೆಲ್‌ಗಳಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುವಂತೆ ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ತಾಲೂಕು ಘಟಕ ಸ್ಥಳೀಯ ಬಸವೇಶ್ವರ ವೃತ್ತದಿಂದ ಮಿನಿ ವಿಧಾನಸೌಧ ಕಚೇರಿಯವರೆಗೆ ಮೆರವಣಿಗೆ ನಡೆಸಿತು.
ಕನ್ನಡಪ್ರಭ ವಾರ್ತೆ ಸಿಂಧನೂರು
ವಿದ್ಯಾರ್ಥಿ ವೇತನ ಬಿಡುಗಡೆ ಮಾಡಬೇಕು ಹಾಗೂ ವಿವಿಧ ಹಾಸ್ಟೆಲ್‌ಗಳಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುವಂತೆ ಒತ್ತಾಯಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ತಾಲೂಕು ಘಟಕ ಸ್ಥಳೀಯ ಬಸವೇಶ್ವರ ವೃತ್ತದಿಂದ ಮಿನಿ ವಿಧಾನಸೌಧ ಕಚೇರಿಯವರೆಗೆ ಮೆರವಣಿಗೆ ನಡೆಸಿತು.ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಇಲಾಖೆಯ ವ್ಯಾಪ್ತಿಯಲ್ಲಿ 1258 ಹಾಸ್ಟೆಲ್‌ಗಳಿದ್ದು,, 168833 ವಿದ್ಯಾರ್ಥಿಗಳು ವಾಸವಿದ್ದಾರೆ. ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ 1972 ಹಾಸ್ಟೆಲ್‌ಗಳಿದ್ದು, 187200 ವಿದ್ಯಾರ್ಥಿಗಳು ಅನುಕೂಲ ಪಡೆದಿದ್ದಾರೆ. ಕಳೆದ ಮೂರು ವರ್ಷಗಳಿಂದ ಅರ್ಜಿ ಸಲ್ಲಿಸಿದ 100 ವಿದ್ಯಾರ್ಥಿಗಳಲ್ಲಿ 40 ಜನರಿಗೆ ಮಾತ್ರ ವಸತಿ ನಿಲಯಗಳಲ್ಲಿ ಅವಕಾಶ ಸಿಗುತ್ತಿದೆ. ಇನ್ನುಳಿದವರು ವಂಚಿತರಾಗುತ್ತಿದ್ದಾರೆ. ಸರ್ಕಾರ ವಸತಿ ನಿಲಯಗಳಿಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಆಯಾ ಜಿಲ್ಲೆಗಳಲ್ಲಿ ಹೊಸ ವಸತಿ ನಿಲಯಗಳನ್ನು ಘೋಷಣೆ ಮಾಡಬೇಕು ಎಂದು ಕಾರ್ಯದರ್ಶಿ ಮೌನೇಶ ವಿಶ್ವಕರ್ಮ ಆಗ್ರಹಿಸಿದರು.
ವಸತಿ ನಿಲಯಗಳ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ನೀಡುವ ಕಿಟ್‌ಗಳನ್ನು ತಕ್ಷಣವೇ ಎಲ್ಲ ವಿದ್ಯಾರ್ಥಿಗಳಿಗೆ ನೀಡಬೇಕು. ಪ್ರತಿ ವಿದ್ಯಾರ್ಥಿಗೆ ಊಟಕ್ಕೆ ನೀಡುವ ರು.1850 ಹಣವನ್ನು ಹೆಚ್ಚಿಸಬೇಕು. ರಾಜ್ಯದಲ್ಲಿ ಸಮಾಜ ಕಲ್ಯಾಣ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರ ಇಲಾಖೆಗಳ ಸಂಖೆಯನ್ನು ಹೆಚ್ಚಳ ಮಾಡಬೇಕು. ಬಾಕಿ ಉಳಿದಿರುವ ಹಿಂದಿನ ವರ್ಷದ ವಿದ್ಯಾರ್ಥಿ ವೇತವನ್ನು ತಕ್ಷಣವೇ ವಿದ್ಯಾರ್ಥಿಗಳ ಖಾತೆಗೆ ಜಮಾ ಮಾಡಬೇಕು ಎಂದು ಒತ್ತಾಯಿಸಿದರು.ಈ ಸಂದರ್ಭದಲ್ಲಿ ಸದಸ್ಯರಾದ ಪ್ರದೀಪ್, ವೀರಭದ್ರಸ್ವಾಮಿ, ಮುನಿಯಪ್ಪ, ಪ್ರಶಾಂತ, ಮನೋಜ್ ಸೇರಿದಂತೆ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.