ವಿವಿ ಮುಚ್ಚುವ ನಿರ್ಧಾರ ಹಿಂತೆಗೆದುಕೊಳ್ಳುವಂತೆ ಎಬಿವಿಪಿ ಪ್ರತಿಭಟನೆ

| Published : Feb 25 2025, 12:49 AM IST

ವಿವಿ ಮುಚ್ಚುವ ನಿರ್ಧಾರ ಹಿಂತೆಗೆದುಕೊಳ್ಳುವಂತೆ ಎಬಿವಿಪಿ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

ಆರ್ಥಿಕವಾಗಿ ದಿವಾಳಿಯಾಗಿರುವ ರಾಜ್ಯ ಸರ್ಕಾರ ೯ ವಿಶ್ವವಿದ್ಯಾನಿಲಯಗಳನ್ನು ಮುಚ್ಚಲು ಮುಂದಾಗಿದ್ದು, ಸಚಿವ ಸಂಪುಟದ ತಿರ್ಮಾನವನ್ನು ಕೂಡಲೇ ಹಿಂತೆಗೆದುಕೊಳ್ಳಬೇಕೆಂದು ಆಗ್ರಹಿಸಿ ಎಬಿವಿಪಿ ನೇತೃತ್ವದಲ್ಲಿ ಸೋಮವಾರ ಡಿಸಿ ಕಚೇರಿ ಮುಂದೆ ಪ್ರತಿಭಟಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು. ರಾಜ್ಯ ಸರ್ಕಾರ ತನ್ನ ಗ್ಯಾರಂಟಿಗಳಿಗೆ ಪ್ರತಿ ವರ್ಷ ೫೦,೦೦೦ ಕೋಟಿ ರು.ಗಳನ್ನು ನೀಡುತ್ತಿದೆ. ಅದರಲ್ಲಿ ಶೇಕಡ ೧ರಷ್ಟು ಅಂದರೆ ೫೦೦ ಕೋಟಿ ರು.ಗಳನ್ನು ವಿಶ್ವವಿದ್ಯಾಲಯಗಳಿಗೆ ನೀಡಿದರೆ ರಾಜ್ಯದ ವಿಶ್ವವಿದ್ಯಾಲಯಗಳ ಸ್ಥಿತಿಗತಿ ಸುಧಾರಿಸುತ್ತದೆ ಎಂದರು.

ಕನ್ನಡಪ್ರಭ ವಾರ್ತೆ ಹಾಸನ

ಆರ್ಥಿಕವಾಗಿ ದಿವಾಳಿಯಾಗಿರುವ ರಾಜ್ಯ ಸರ್ಕಾರ ೯ ವಿಶ್ವವಿದ್ಯಾನಿಲಯಗಳನ್ನು ಮುಚ್ಚಲು ಮುಂದಾಗಿದ್ದು, ಸಚಿವ ಸಂಪುಟದ ತಿರ್ಮಾನವನ್ನು ಕೂಡಲೇ ಹಿಂತೆಗೆದುಕೊಳ್ಳಬೇಕೆಂದು ಆಗ್ರಹಿಸಿ ಎಬಿವಿಪಿ ನೇತೃತ್ವದಲ್ಲಿ ಸೋಮವಾರ ಡಿಸಿ ಕಚೇರಿ ಮುಂದೆ ಪ್ರತಿಭಟಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

ಇದೇ ವೇಳೆ ಎಬಿವಿಪಿ ಸಹ ಕಾರ್ಯದರ್ಶಿ ಜ್ಞಾನ ಆರ್‌. ಗೌಡ ಮಾಧ್ಯಮದೊಂದಿಗೆ ಮಾತನಾಡಿ, ಚಾಮರಾಜನಗರ, ಕೊಪ್ಪಳ, ಬೀದರ್, ಕೊಡಗು ಅಂತಹ ಹಿಂದುಳಿದ ಜಿಲ್ಲೆಗಳಲ್ಲಿರುವ ವಿಶ್ವವಿದ್ಯಾಲಯಗಳನ್ನು ಮುಚ್ಚಲು ಹೊರಟಿರುವ ರಾಜ್ಯ ಸರ್ಕಾರದ ನಡೆಯನ್ನು ಎಬಿವಿಪಿ ಖಂಡಿಸುತ್ತದೆ. ಅಲ್ಲದೇ ಆಯಾ ಜಿಲ್ಲೆಗಳ ಜನರಿಗೆ ಅನ್ಯಾಯ ಎಸೆದಂತಾಗುತ್ತದೆ. ರಾಜ್ಯ ಸರ್ಕಾರ ತನ್ನ ಗ್ಯಾರಂಟಿಗಳಿಗೆ ಪ್ರತಿ ವರ್ಷ ೫೦,೦೦೦ ಕೋಟಿ ರು.ಗಳನ್ನು ನೀಡುತ್ತಿದೆ. ಅದರಲ್ಲಿ ಶೇಕಡ ೧ರಷ್ಟು ಅಂದರೆ ೫೦೦ ಕೋಟಿ ರು.ಗಳನ್ನು ವಿಶ್ವವಿದ್ಯಾಲಯಗಳಿಗೆ ನೀಡಿದರೆ ರಾಜ್ಯದ ವಿಶ್ವವಿದ್ಯಾಲಯಗಳ ಸ್ಥಿತಿಗತಿ ಸುಧಾರಿಸುತ್ತದೆ ಎಂದರು.

ಕಳೆದ ೧೦-೧೫ ವರ್ಷಗಳಿಂದ ರಾಜ್ಯ ಸರ್ಕಾರಗಳು ವಿಶ್ವವಿದ್ಯಾಲಯಗಳಿಗೆ ಯಾವುದೇ ರೀತಿಯ ಅನುದಾನಗಳನ್ನು ನೀಡಿರುವುದಿಲ್ಲ. ಎಲ್ಲಾ ವಿಶ್ವವಿದ್ಯಾನಿಲಯಗಳು ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ, ಮರುಎಣಿಕೆ ಅಥವಾ ಮರು ಮೌಲ್ಯ ಮಾಪನ ಶುಲ್ಕಗಳಲ್ಲಿ ಮತ್ತು ಆಂತರಿಕ ಹಣಕಾಸು ಉತ್ಪಾದನೆಯ ಮೂಲಕ ಇಂದು ವಿಶ್ವವಿದ್ಯಾಲಯಗಳು ನಡೆಯುತ್ತಿರುವುದು ಅವಮಾನದ ಸಂಗತಿಯಾಗಿದೆ. ಕರ್ನಾಟಕದಂತಹ ರಾಜ್ಯದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ತನ್ನದೇ ಆದ ಗೌರವ, ಹೆಗ್ಗಳಿಕೆ ಇದೆ. ಆದ್ದರಿಂದ ಕೇವಲ ಹಣಕಾಸಿನ ದೃಷ್ಟಿಯಿಂದ ವಿಶ್ವವಿದ್ಯಾಲಯಗಳನ್ನು ಮುಚ್ಚಲು ಹೊರಟಿರುವುದು, ಒಂದು ಘನ ಸರ್ಕಾರಕ್ಕೆ ಶೋಭೆ ತರುವಂತಹ ಕಾರ್ಯವಲ್ಲ ಎಂದು ಹೇಳಿದರು.

ಹಿಂದಿನ ರಾಜ್ಯ ಸರಕಾರ ಜಿಲ್ಲೆಗೊಂದು ವಿಶ್ವವಿದ್ಯಾಲಯ ಪ್ರಾರಂಭಿಸಿದರೆ ಅಲ್ಲಿನ ಗ್ರಾಮೀಣ ಮಕ್ಕಳ ಉನ್ನತ ಶಿಕ್ಷಣಕ್ಕೆ ಅನುಕೂಲವಾಗುತ್ತದೆ ಎಂಬ ಉದ್ದೇಶದಿಂದ ಹೊಸದಾಗಿ ೧೦ ವಿಶ್ವವಿದ್ಯಾನಿಲಯಗಳನ್ನು ಪ್ರಾರಂಭಿಸಿತ್ತು. ಹಾಸನ, ಚಾಮರಾಜನಗರ, ಹಾವೇರಿ, ಕೊಡಗು, ಕೊಪ್ಪಳ, ಬಾಗಲಕೋಟೆ, ಮಹಾರಾಣಿ ಕ್ಲಸ್ಟರ್, ಮಂಡ್ಯ, ನೃಪತುಂಗ ವಿಶ್ವವಿದ್ಯಾಲಯ ಹಾಗೂ ಬೀದರ್‌ನಲ್ಲಿ ಹೊಸ ವಿಶ್ವವಿದ್ಯಾನಿಲಯ ಪ್ರಾರಂಭಿಸುವುದಕ್ಕೆ ಹಿಂದಿನ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿತ್ತು. ಇಂದಿನ ರಾಜ್ಯ ಸರ್ಕಾರ ವಿಶ್ವವಿದ್ಯಾನಿಲಯಗಳಿಗೆ ಅನುದಾನ ನೀಡಿ, ಅಭಿವೃದ್ಧಿಪಡಿಸದೆ ಅವುಗಳನ್ನು ಮುಚ್ಚವುದಕ್ಕೆ ಸಚಿವ ಸಂಪುಟ ಉಪ ಸಮಿತಿಯಲ್ಲಿ ನಿರ್ಧರಿಸುವುದು ಗ್ರಾಮೀಣ ಮಕ್ಕಳ ಶಿಕ್ಷಣಕ್ಕೆ ರಾಜ್ಯ ಸರ್ಕಾರ ಅನ್ಯಾಯ ಮಾಡುತ್ತಿರುವುದನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ತೀವ್ರವಾಗಿ ಖಂಡಿಸುತ್ತದೆ ಎಂದ ದೂರಿದರು.

ಸರ್ಕಾರಿ ವಿಶ್ವವಿದ್ಯಾಲಯಗಳನ್ನು ಬಲಿಷ್ಠಗೊಳಿಸುವ ಕಾಳಜಿ ಮತ್ತು ಇಚ್ಛಾಶಕ್ತಿಯನ್ನು ರಾಜ್ಯ ಸರ್ಕಾರ ಮಾಡಬೇಕು. ರಾಜ್ಯದಲ್ಲಿ ಇತ್ತೀಚೆಗೆ ಖಾಸಗಿ ವಿಶ್ವವಿದ್ಯಾಲಯಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ ಸರ್ಕಾರಿ ವಿಶ್ವವಿದ್ಯಾಲಯಗಳನ್ನು ಮುಚ್ಚುತ್ತಿರುವುದರಿಂದ ರಾಜ್ಯದ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮಾಡುತ್ತಿರುವ ಅನ್ಯಾಯವಾಗಿದೆ. ರಾಜ್ಯ ಸರ್ಕಾರ ಉಚಿತ ಗ್ಯಾರಂಟಿ ಯೋಜನೆಗಳಿಗಾಗಿ ಸಾವಿರಾರು ಕೋಟಿರು.ಗಳನ್ನು ಬಜೆಟ್‌ನಲ್ಲಿ ಕೊಟ್ಟಿದೆ. ಆದರೆ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಹಣ ಒದಗಿಸುವುದಕ್ಕೆ ಆಗದೆ. ೯ ವಿಶ್ವವಿದ್ಯಾನಿಯಗಳನ್ನು ಮುಚ್ಚಲು ಮುಂದಾಗಿರುವುದು ಖಂಡನಾರ್ಹವಾಗಿದೆ ಎಂದು ಹೇಳಿದರು. ಯಾವ ಶಿಕ್ಷಣ ತಜ್ಞರ ಶಿಫಾರಸ್ಸಿನ ಮೇಲೆ ವಿಶ್ವವಿದ್ಯಾನಿಲಯಗಳನ್ನು ಮುಚ್ಚುತ್ತಿದ್ದೀರಾ? ಎಂಬುವುದನ್ನು ತಿಳಿಸಬೇಕು ಎಂದು ವಿದ್ಯಾರ್ಥಿ ಪರಿಷತ್ ಆಗ್ರಹಿಸುತ್ತದೆ. ರಾಜ್ಯದ ಉನ್ನತ ಶಿಕ್ಷಣ ಪರಿಷತ್ ಶಿಫಾರಸು ಮಾಡಿರುವ ಹಣವನ್ನು ರಾಜ್ಯ ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು. ಇಲ್ಲವಾದಲ್ಲಿ ವಿದ್ಯಾರ್ಥಿ ಪರಿಷತ್ ಹಾಸನ ಜಿಲ್ಲಾದ್ಯಂತ ಪ್ರತಿಭಟನೆಯನ್ನು ನಡೆಸುತ್ತದೆ. ಕಪ್ಪು ಪಟ್ಟಿ ದರಿಸಿ ಕಾಲೇಜಿಗೆ ತೆರಳುತ್ತೇವೆ. ವಿಶ್ವವಿದ್ಯಾಲಯ ಹಾಸನ ಜನತೆಯ ಅಸ್ಮಿತೆಯ ಪ್ರಶ್ನೆಯಾಗಿದ್ದು ನಮ್ಮ ಅಸ್ಮಿತೆಗೆ ಧಕ್ಕೆಯಾದರೆ ವಿದ್ಯಾರ್ಥಿಗಳ ಹೋರಾಟ ಉಗ್ರ ಸ್ವರೂಪ ಪಡೆಯುತ್ತದೆ ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಎಚ್ಚರಿಸುತ್ತದೆ ಎಂದರು.

ಪ್ರತಿಭಟನೆಯಲ್ಲಿ ಎಬಿವಿಪಿ ರಾಜ್ಯ ಕಾರ್‍ಯದರ್ಶಿ ಪ್ರವೀಣ್, ಜಿಲ್ಲಾ ಪ್ರಮುಖ್ ವೇಣು, ರಾಜ್ಯ ಕಾರ್‍ಯಕಾರಣಿ ಸದಸ್ಯ ವರಣ್, ಸುಶ್ಮಿತ, ಗಿರೀಶ್, ಲೇಪಾಕ್ಷ, ಇತರರು ಉಪಸ್ಥಿತರಿದ್ದರು.