ಪಟ್ಟಣದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ತ್ವರಿತವಾಗಿ ಮಾಡುವಂತೆ ಸಹಾಯಕ ಆಯುಕ್ತ ಜಿ. ಮಹೇಶ ಅಧಿಕಾರಿಗಳಿಗೆ ಸೂಚಿಸಿದರು.

ಪ್ರಗತಿ ಪರಿಶೀಲನಾ ಸಭೆ । ಸ್ಥಳಕ್ಕೂ ಭೇಟಿ ನೀಡಿ ಪರಿಶೀಲನೆ

ಕನ್ನಡಪ್ರಭ ವಾರ್ತೆ ಭಟ್ಕಳ

ಪಟ್ಟಣದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ತ್ವರಿತವಾಗಿ ಮಾಡುವಂತೆ ಸಹಾಯಕ ಆಯುಕ್ತ ಜಿ. ಮಹೇಶ ಅಧಿಕಾರಿಗಳಿಗೆ ಸೂಚಿಸಿದರು.

ತಾಲ್ಲೂಕು ಕಚೇರಿಯಲ್ಲಿ ಸೋಮವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಟ್ಟಣ ವ್ಯಾಪ್ತಿಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಪ್ರಸ್ತುತ ಸ್ಥಿತಿ, ಬಾಕಿ ಉಳಿದಿರುವ ಕಾಮಗಾರಿಗಳು, ಮುಂಗಾರು ಆರಂಭಕ್ಕೂ ಮುನ್ನ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳು ಹಾಗೂ ಸಾರ್ವಜನಿಕರಿಂದ ಬಂದಿರುವ ದೂರುಗಳ ಕುರಿತು ಸವಿಸ್ತಾರ ಚರ್ಚೆ ನಡೆಯಿತು.

ಹೆದ್ದಾರಿ ಕಾಮಗಾರಿಯಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳನ್ನು ಶೀಘ್ರ ಪರಿಹರಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ ಸಹಾಯಕ ಆಯುಕ್ತರು, ಮಳೆ ನೀರು ಸರಾಗವಾಗಿ ಹರಿದು ಹೋಗಲು ಸಮರ್ಪಕ ಚರಂಡಿ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಿದರು.

ನೀರು ನಿಲ್ಲುವ ಪ್ರದೇಶಗಳನ್ನು ಗುರುತಿಸಿ ತಕ್ಷಣ ಕ್ರಮ ಕೈಗೊಳ್ಳಬೇಕು. ಸಂಚಾರಕ್ಕೆ ಯಾವುದೇ ಅಡಚಣೆ ಉಂಟಾಗದಂತೆ ಕಾಮಗಾರಿಯನ್ನು ವೇಗಗೊಳಿಸಬೇಕು ಎಂದು ಹೇಳಿದರು.

ಸಭೆಯ ಬಳಿಕ ಸಹಾಯಕ ಆಯುಕ್ತರ ನೇತೃತ್ವದಲ್ಲಿ ಅಧಿಕಾರಿಗಳು ಹೆದ್ದಾರಿ ಕಾಮಗಾರಿ ನಡೆಯುತ್ತಿರುವ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಚತುಷ್ಪಥ ಕಾಮಗಾರಿ ನಿಧಾನಗತಿಯಲ್ಲಿರುವುದು ಹಾಗೂ ಮುಂಗಾರು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಆತಂಕ ಹೆಚ್ಚಾಗಿದೆ. ಹೆದ್ದಾರಿ ಪಕ್ಕದಲ್ಲಿ ಸಮರ್ಪಕ ಮಳೆ ನೀರು ಹರಿವಿನ ವ್ಯವಸ್ಥೆ ಇಲ್ಲ ಎಂಬ ಸಾರ್ವಜನಿಕರ ದೂರಿನ ಹಿನ್ನೆಲೆ ಈ ಪರಿಶೀಲನೆ ನಡೆಸಲಾಯಿತು. ಮಳೆ ಆರಂಭವಾದರೆ ಹೆದ್ದಾರಿಯಲ್ಲಿ ನೀರು ನಿಲ್ಲುವ ಸಾಧ್ಯತೆ ಇರುವುದರ ಜತೆಗೆ ಸಮೀಪದ ಅಂಗಡಿ ಹಾಗೂ ಮನೆಗಳಿಗೆ ನೀರು ನುಗ್ಗುವ ಭೀತಿ ಇದೆ ಎಂದು ಸ್ಥಳೀಯರು ಅಧಿಕಾರಿಗಳ ಗಮನಕ್ಕೆ ತಂದರು.

ಕಾಮಗಾರಿ ವಿಳಂಬವಾಗುತ್ತಿರುವುದಕ್ಕೆ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಮುಂಗಾರು ಆರಂಭಕ್ಕೂ ಮುನ್ನವೇ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರನ್ನು ಒತ್ತಾಯಿಸಿದರು. ಮಳೆ ಬಂದರೆ ಯಾವುದೇ ಕೆಲಸ ಮಾಡಲು ಸಾಧ್ಯವಾಗುವುದಿಲ್ಲ. ಹದಿನೈದು ದಿನಗಳಲ್ಲಿ ತ್ವರಿತವಾಗಿ ಹೆದ್ದಾರಿ ಕಾಮಗಾರಿ ಮಾಡಿ ಮುಗಿಸಬೇಕು. ಇಲ್ಲದಿದ್ದಲ್ಲಿ ಜನರು ತೊಂದರೆ ಅನುಭವಿಸುವ ಬಗ್ಗೆ ಅಧಿಕಾರಿಗಳ ಗಮನಕ್ಕೆ ತರಲಾಯಿತು.

ತಹಶೀಲ್ದಾರ ನಾಗೇಂದ್ರ ಕೋಳ ಶೆಟ್ಟಿ, ಡಿವೈಎಸ್ಪಿ ಬಿ. ಗಿರೀಶ್, ನಗರಸಭೆ ಪೌರಾಯುಕ್ತ ಬಾಬಾಸಾಹೇಬ್ ಮಾನೆ, ಐಆರ್‌ಬಿ ಅಧಿಕಾರಿಗಳು ಹಾಗೂ ತಂಝೀಮ್ ಪ್ರತಿನಿಧಿಗಳು ಇದ್ದರು.