ಸಾರಾಂಶ
ಕನ್ನಡಪ್ರಭ ವಾರ್ತೆ ಬೆಳಗಾವಿ
ಪ್ರತಿವರ್ಷ ಲಕ್ಷಾಂತರ ಭಕ್ತರು ಭೇಟಿ ನೀಡುವ ಸುಪ್ರಸಿದ್ಧ ಸುಕ್ಷೇತ್ರ ಸವದತ್ತಿ ಯಲ್ಲಮ್ಮ ಗುಡ್ಡದಲ್ಲಿ ಮೂಲಸೌಕರ್ಯಗಳ ಅಭಿವೃದ್ಧಿ ಕಾಮಗಾರಿಗಳನ್ನು ಆರಂಭಿಸಲು ಅಗತ್ಯ ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳಬೇಕು ಎಂದು ಕಾನೂನು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಎಚ್.ಕೆ.ಪಾಟೀಲ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ಸವದತ್ತಿ ಯಲ್ಲಮ್ಮ ಗುಡ್ಡದ ಸಮಗ್ರ ಅಭಿವೃದ್ಧಿ ಯೋಜನೆಗೆ ಸಂಬಂಧಿಸಿದಂತೆ ಶುಕ್ರವಾರ ಪ್ರವಾಸಿಮಂದಿರದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನೂರು ಕೋಟಿ ರುಪಾಯಿ ವಿಶೇಷ ಅನುದಾನ ಹಾಗೂ ಪ್ರಸಾದ ಯೋಜನೆಯಡಿ ನೀಡಲಾಗಿರುವ ₹18.37 ಕೋಟಿ ಅನುದಾನದಲ್ಲಿ ಕೈಗೊಳ್ಳಬೇಕಾಗಿರುವ ಕಾಮಗಾರಿಗಳ ಕುರಿತು ಅಧಿಕಾರಿಗಳ ಜತೆ ವಿಸ್ತೃತವಾಗಿ ಚರ್ಚೆ ನಡೆಸಿದರು. ಪ್ರಸಾದ ಯೋಜನೆಯಡಿ ಎರಡು ಬಹುಪಯೋಗಿ ಸಭಾಂಗಣಗಳು, ಶೌಚಾಲಯ, ಸ್ನಾನಗೃಹಗಳು, ಮಾಹಿತಿ ಕೇಂದ್ರಗಳು, ಕ್ಯಾಂಟೀನ್, ಪ್ರಾಥಮಿಕ ಚಿಕಿತ್ಸಾ ಕೇಂದ್ರ, ತ್ಯಾಜ್ಯ ನಿರ್ವಹಣಾ ಘಟಕ ಹಾಗೂ ಡಿಜಿಟಲ್ ಮಾಹಿತಿ ಫಲಕಗಳ ಅಳವಡಿಕೆ ಕುರಿತು ಚರ್ಚಿಸಿದರು.ಅದೇ ರೀತಿ ನೂರು ಕೋಟಿ ರು. ವಿಶೇಷ ಸಹಾಯ ಅನುದಾನ ಯೋಜನೆಯಡಿ ಭಕ್ತರಿಗೆ ಸರದಿ ಕಾಂಪ್ಲೆಕ್ಸ್, ಪಾರ್ಕಿಂಗ್ ವ್ಯವಸ್ಥೆ, ಅನ್ನ ದಾಸೋಹ ಭವನ, ವ್ಯಾಪಾರಿ ಮಳಿಗೆ, ಆಡಳಿತ ಕಟ್ಟಡ ನಿರ್ಮಾಣ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲು ಯೋಜನೆ ರೂಪಿಸಲಾಗಿದೆ ಎಂದರು. ಮಾಸ್ಟರ್ ಪ್ಲ್ಯಾನ್ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಸವದತ್ತಿಯಲ್ಲಿ ನಡೆದ ಸಭೆಯಲ್ಲಿ ಕೈಗೊಳ್ಳಲಾಗಿರುವ ನಿರ್ಣಯಗಳ ಅನುಸಾರ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಒಟ್ಟಾರೆಯಾಗಿ ದೇವಿ ದರ್ಶನ, ಊಟೋಪಹಾರ, ಪಾರ್ಕಿಂಗ್, ಶೌಚಾಲಯ ವ್ಯವಸ್ಥೆ ಸೇರಿದಂತೆ ಭಕ್ತಾಧಿಗಳಿಗೆ ಯಾವುದೇ ರೀತಿಯ ಅನಾನುಕೂಲ ಆಗದಂತೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಬೇಕು ಎಂದು ನಿರ್ದೇಶನ ನೀಡಿದರು. ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು, ಸವದತ್ತಿ ಯಲ್ಲಮ್ಮ ಕ್ಷೇತ್ರದ ಸಮಗ್ರ ಅಭಿವೃದ್ಧಿ ಯೋಜನೆಯ ಕುರಿತು ಮಾಹಿತಿ ನೀಡಿದರು.ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ್ ಗುಳೇದ, ಶ್ರೀ ರೇಣುಕಾ ಯಲ್ಲಮ್ಮ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಅಧಿಕಾರಿ ಗೀತಾ ಕೌಲಗಿ, ಪ್ರವಾಸೋದ್ಯಮ ಇಲಾಖೆಯ ಜಂಟಿ ನಿರ್ದೇಶಕಿ ಸೌಮ್ಯಾ ಬಾಪಟ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
;Resize=(128,128))
;Resize=(128,128))
;Resize=(128,128))