ಸಾರಾಂಶ
ಮರಳುಗಾರಿಕೆ ವಾಹನ ಬಿಡುಗಡೆ ಸಂಬಂಧಿಸಿ ಆಕ್ಷೇಪಣೆ ಸಲ್ಲಿಸಲು ಲಂಚ ಸ್ವೀಕರಿಸುತ್ತಿದ್ದ ಸಹಾಯಕ ಸರ್ಕಾರಿ ಅಭಿಯೋಜಕರನ್ನು ಬುಧವಾರ ಲೋಕಾಯುಕ್ತ ಪೋಲಿಸರು ಬಂಧಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಉಡುಪಿ
ಅಕ್ರಮ ಮರಳುಗಾರಿಕೆ ವಾಹನ ಬಿಡುಗಡೆ ಸಂಬಂಧಿಸಿ ಆಕ್ಷೇಪಣೆ ಸಲ್ಲಿಸಲು ಲಂಚ ಸ್ವೀಕರಿಸುತ್ತಿದ್ದ ಸಹಾಯಕ ಸರ್ಕಾರಿ ಅಭಿಯೋಜಕರನ್ನು ಬುಧವಾರ ಲೋಕಾಯುಕ್ತ ಪೋಲಿಸರು ಬಂಧಿಸಿದ್ದಾರೆ.ಮೂಲ್ಕಿಯಿಂದ ಉಡುಪಿಗೆ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ವಾಹನವನ್ನು ಉಡುಪಿ ಪೊಲೀಸರು ನಿಟ್ಟೂರು ಬಳಿಯಲ್ಲಿ ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದರು. ಈ ವಾಹನ ಬಿಡುಗಡೆಗೆ ಆಕ್ಷೇಪಣೆ ಸಲ್ಲಿಸಲು ಗಣಪತಿ ವಸಂತ ನಾಯ್ಕ್ ಲಂಚದ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ ಉಡುಪಿ ಲೋಕಾಯುಕ್ತಕ್ಕೆ ದೂರು ನೀಡಲಾಗಿತ್ತು.
ಅದರಂತೆ ಬುಧವಾರ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು, ಉಡುಪಿ ನ್ಯಾಯಾಲಯದಲ್ಲಿರುವ ಸಹಾಯಕ ಸರ್ಕಾರಿ ಅಭಿಯೋಜಕರ ಕಚೇರಿಯಲ್ಲಿ 2 ಸಾವಿರ ರು. ಲಂಚ ಸ್ವೀಕರಿಸುತ್ತಿದ್ದ ಗಣಪತಿ ನಾಯ್ಕ್ ಅವರನ್ನು ವಶಕ್ಕೆ ಬಂಧಿಸಿದ್ದಾರೆ.ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಧ್ಯಂತರ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಮಾ.27 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಲೋಕಾಯುಕ್ತ ವಿಶೇಷ ಅಭಿಯೋಜಕ ಟಿ.ವಿಜಯ್ ಕುಮಾರ್ ಶೆಟ್ಟಿ ಹಾಜರಿದ್ದರು.
ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಮಂಗಳೂರು ಪ್ರಭಾರ ಎಸ್ಪಿ ಕುಮಾರಚಂದ್ರ ಮಾರ್ಗದರ್ಶನದಲ್ಲಿ ಉಡುಪಿ ಪ್ರಭಾರ ಡಿವೈಎಸ್ಪಿ ಮಂಜುನಾಥ್, ಪೊಲೀಸ್ ನಿರೀಕ್ಷಕ ರಾಜೇಂದ್ರ ನಾಯಕ್ ಎಂ.ಎನ್., ಎಎಸ್ಸೈ ನಾಗೇಶ್, ಸಿಬ್ಬಂದಿ ನಾಗರಾಜ್, ಸತೀಶ್ ಹಂದಾಡಿ, ರೋಹಿತ್, ಮಲ್ಲಿಕಾ, ಪುಷ್ಪಾವತಿ, ರವೀಂದ್ರ, ರಮೇಶ್, ಅಬ್ದುಲ್ ಜಲಾಲ್, ಪ್ರಸನ್ನ, ರಾಘವೇಂದ್ರ ಹೊಸಕೋಟೆ, ಸುಧೀರ್, ಸತೀಶ್ ಆಚಾರ್ಯ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.