ಜಿಲ್ಲೆಯ ಸುಸ್ಥಿರ ಅಭಿವೃದ್ಧಿಗೆ ನಿಖರ ಹಾಗೂ ವಾಸ್ತವ ಅಂಕಿ ಅಂಶಗಳ ಕ್ರೋಢೀಕರಣ ಅಗತ್ಯವಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಓ ಡಾ.ಆಕಾಶ್ ಅಭಿಪ್ರಾಯ ವ್ಯಕ್ತಪಡಿಸಿದರು.

ಚಿತ್ರದುರ್ಗ: ಜಿಲ್ಲೆಯ ಸುಸ್ಥಿರ ಅಭಿವೃದ್ಧಿಗೆ ನಿಖರ ಹಾಗೂ ವಾಸ್ತವ ಅಂಕಿ ಅಂಶಗಳ ಕ್ರೋಢೀಕರಣ ಅಗತ್ಯವಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಓ ಡಾ.ಆಕಾಶ್ ಅಭಿಪ್ರಾಯ ವ್ಯಕ್ತಪಡಿಸಿದರು.ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಾನವ ಅಭಿವೃದ್ಧಿ ವರದಿ-2025 ಹಾಗೂ ಸಮಗ್ರ ಮತ್ತು ಸುಸ್ಥಿರ ಜಿಲ್ಲಾ ಅಭಿವೃದ್ಧಿ ದೂರದೃಷ್ಟಿ ಯೋಜನೆ-2031 ರ ಕುರಿತಂತೆ ಜಿಲ್ಲಾ ಹಾಗೂ ತಾಲೂಕುಮಟ್ಟದ ಅಧಿಕಾರಿಗಳಿಗಾಗಿ ಆಯೋಜಿಸಿದ್ದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.ಭಾರತ 4ನೇ ಅತಿದೊಡ್ಡ ಆರ್ಥಿಕ ವ್ಯವಸ್ಥೆ ಹೊಂದಿರುವ ದೇಶವಾಗಿದೆ. ಆದರೆ ವಿಶ್ವದಲ್ಲಿಯೇ ಅತಿ ಕಡಿಮೆ ತಲಾದಾಯ ಹೊಂದಿರುವ ದೇಶಗಳಲ್ಲಿ ಭಾರತವು ಒಂದಾಗಿರುವುದು ವೈರುಧ್ಯ ಎನಿಸುತ್ತದೆ. ಸ್ಥಳೀಯವಾಗಿ ಜನರಿಗೆ ಉದ್ಯೋಗ ದೊರೆತು ಆದಾಯ ಮಟ್ಟ ಹೆಚ್ಚಿದಾಗ ಮಾತ್ರ ಸುಸ್ಥಿರ ಅಭಿವೃದ್ಧಿ ಸಾಧ್ಯ. ಈ ನಿಟ್ಟಿನಲ್ಲಿ ಸರ್ಕಾರಿ ಅಧಿಕಾರಿಗಳು ಸಂಗ್ರಹಿಸುವ ದತ್ತಾಂಶಗಳು ಅತಿ ಮುಖ್ಯವಾಗುತ್ತವೆ ಎಂದರು.

ದಕ್ಷಿಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿಯೇ ಚಿತ್ರದುರ್ಗ ಅತ್ಯಂತ ಕಡಿಮೆ ತಲಾದಾಯ ಹೊಂದಿರುವ ಜಿಲ್ಲೆಯಾಗಿದೆ. ರಾಜ್ಯದ ಸರಾಸರಿ ತಲಾ ಆದಾಯ 3 ಲಕ್ಷ ರು. ವಿದ್ದರೆ, ಜಿಲ್ಲೆಯ ತಲಾ ಆದಾಯ 1.77 ಲಕ್ಷ ರು. ವಿದೆ. ಜಿಲ್ಲೆಯಲ್ಲಿ ಶೇ.56.67 ರಷ್ಟು ಪರಿಶಿಷ್ಟ ಜಾತಿ ಹಾಗೂ ಪಂಗಡದ ವಿದ್ಯಾರ್ಥಿಗಳು ಸರ್ಕಾರಿ ಶಾಲೆಗಳಲ್ಲಿ ವ್ಯಾಸಾಂಗ ಮಾಡುತ್ತಿದ್ದಾರೆ. ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಈ ಪ್ರಮಾಣ ಅತಿ ಹೆಚ್ಚಾಗಿದೆ. ಜಿಲ್ಲೆಯು ಶೈಕ್ಷಣಿಕವಾಗಿ ತುಂಬಾ ಹಿಂದುಳಿದಿದ್ದು, ಈ ವರ್ಷದ ಪಿಯು ಫಲಿತಾಂಶದಲ್ಲಿ ರಾಜ್ಯಕ್ಕೆ 28 ಸ್ಥಾನ ಹಾಗೂ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ 23ನೇ ಸ್ಥಾನದಲ್ಲಿದೆ ಎಂದರು.

ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳ ಶೈಕ್ಷಣಿಕ ಸಾಧನೆ ತೀರಾ ಕಳಪೆ ಮಟ್ಟದಲ್ಲಿದ್ದು, ಇತ್ತೀಚಿನ ಶೈಕ್ಷಣಿಕ ವರದಿಯೊಂದರಲ್ಲಿ 6 ರಿಂದ 8ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ಶೇ.48 ರಷ್ಟು ವಿದ್ಯಾರ್ಥಿಗಳಿಗೆ 2ನೇ ತರಗತಿಯ ಪಠ್ಯ ಪುಸ್ತಕ ಓದಲು ಬರುವುದಿಲ್ಲ. ಶೇ.36ರಷ್ಟು ವಿದ್ಯಾರ್ಥಿಗಳಿಗೆ 2 ಅಂಕಿಯ ಕೂಡುವಿಕೆ, ಕಳೆಯುವಿಕೆ, ಗುಣಕಾರ ಹಾಗೂ ಭಾಗಕಾರ ಲೆಕ್ಕಗಳನ್ನು ಮಾಡಲು ಬರದಂತಹ ಸ್ಥಿತಿ ಇದೆ. ಇಂತಹ ವಿದ್ಯಾರ್ಥಿಗಳು ಮುಂದೆ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಉತ್ತಮ ಫಲಿತಾಂಶ ತರಲು ಹೇಗೆ ಸಾಧ್ಯ? ಎಂದರು.

ಇದೇ ಮಾದರಿಯಲ್ಲಿ ಜಿಲ್ಲೆ ಸಮುದಾಯ ಆರೋಗ್ಯ, ಪೌಷ್ಟಿಕಾಂಶ, ಅನಿಮೀಯತೆ, ವಾಣಿಜ್ಯ, ವ್ಯಾಪಾರ, ಕೈಗಾರಿಕೆ ಹಾಗೂ ಕೃಷಿ ಕ್ಷೇತ್ರದಲ್ಲಿ ಅತ್ಯಂತ ಹಿಂದುಳಿದಿದೆ. ಇವುಗಳನ್ನು ಹೋಗಲಾಡಿಸಿ, ಸಾಮಾಜಿಕ ಬದಲಾವಣೆ ತಂದು, ಜಿಲ್ಲೆಯ ಜನರ ಆದಾಯ ಹಾಗೂ ಜೀವನಮಟ್ಟ ಸುಧಾರಿಸಲು ಅಗತ್ಯ ಇರುವ ಅಂಕಿ ಅಂಶಗಳನ್ನು ಅಧಿಕಾರಿಗಳು ಕ್ರೋಢಿಕರಿಸಿದರೆ, ಮುಂಬರುವ ವರ್ಷಗಳಲ್ಲಿ ಇವುಗಳ ನಿವಾರಣೆಗೆ ಸರ್ಕಾರ ಯೋಜನೆ ರೂಪಿಸಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.

ಯಾವುದೇ ಕಾರಣಕ್ಕೂ ಕಲ್ಪಿತ ಹಾಗೂ ಸುಳ್ಳು ಅಂಕಿ ಅಂಶಗಳನ್ನು ಅಧಿಕಾರಿಗಳು ನೀಡಬಾರದು. ಈ ಹಿನ್ನೆಲೆಯಲ್ಲಿಯೇ ಕಾರ್ಯಾಗಾರ ಏರ್ಪಡಿಸಲಾಗಿದೆ. ಪ್ರತಿ ತಿಂಗಳು ಅಧಿಕಾರಿಗಳು ನೀಡುವ ಅಂಕಿ ಅಂಶಗಳ ಪರಿಶೀಲನೆಗಾಗಿ ಸಭೆ ನಡೆಸುವುದಾಗಿ ತಿಳಿಸಿದರು.ಉದ್ಘಾಟನೆ ಕಾರ್ಯಕ್ರಮದಲ್ಲಿ ಯೋಜನೆ ಮತ್ತು ಅಂಕಿ ಸಂಖ್ಯೆ ಸಂಗ್ರಹಣ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಹಾಗೂ ಸರ್ಕಾರದ ಪದನಿಮಿತ್ತ ಜಂಟಿ ಕಾರ್ಯದರ್ಶಿ ಬಸವರಾಜ್, ಜಿ.ಪಂ ಉಪಕಾರ್ಯದರ್ಶಿ ಡಾ.ರಂಗಸ್ವಾಮಿ, ಮುಖ್ಯ ಯೋಜನಾಧಿಕಾರಿ ಸಿ.ಎಸ್.ಗಾಯಿತ್ರಿ, ದಾವಣಗೆರೆ ವಿಶ್ವ ವಿದ್ಯಾಲಯದ ಅರ್ಥಶಾಸ್ತ್ರ ಪ್ರಾಧ್ಯಪಕ ಡಾ.ಹುಚ್ಚೇಗೌಡ, ತುಮಕೂರು ವಿಶ್ವ ವಿದ್ಯಾಲಯದ ಅರ್ಥಶಾಸ್ತ್ರ ಪ್ರಾಧ್ಯಾಪಕ ಡಾ.ಮುನಿರಾಜು ಸೇರಿದಂತೆ ಜಿಲ್ಲಾ ಹಾಗೂ ತಾಲೂಕುಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.