ಸಾರಾಂಶ
ಬೆಂಗಳೂರು : ಜ್ಞಾನಭಾರತಿ ಕ್ಯಾಂಪಸ್‌ನಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಸೇರಿದ ವಿದ್ಯಾರ್ಥಿ ನಿಲಯದಲ್ಲಿ ಕಳಪೆ ಆಹಾರ ಪೂರೈಸುತ್ತಿರುವುದರಿಂದ ನಿತ್ಯ ಅನಾರೋಗ್ಯ ಸಮಸ್ಯೆ ಎದುರಿಸುತ್ತಿರುವುದಾಗಿ ಆರೋಪಿಸಿ ಬೆಂಗಳೂರು ವಿಶ್ವವಿದ್ಯಾಲಯದ ನೂರಾರು ವಿದ್ಯಾರ್ಥಿಗಳು ಸೋಮವಾರ ರಾತ್ರಿ ದಿಢೀರ್ ರಸ್ತೆ ತಡೆದು ಪ್ರತಿಭಟನೆ ನಡೆಸಿದ ಘಟನೆ ನಡೆಯಿತು.
ಇಲಾಖೆಯ ಉನ್ನತ ಅಧಿಕಾರಿಗಳು ಬರುವವರೆಗೂ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಪಟ್ಟು ಹಿಡಿದು ವಿದ್ಯಾರ್ಥಿಗಳು ಧರಣಿ ಕುಳಿತು ಹಾಸ್ಟೆಲ್ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಜ್ಞಾನಭಾರತಿ ಠಾಣಾ ಪೊಲೀಸರು ಮತ್ತು ಹಾಸ್ಟೆಲ್ ವಾರ್ಡನ್ ಮನವೊಲಿಕೆಯ ನಂತರ ವಿದ್ಯಾರ್ಥಿಗಳು ಪ್ರತಿಭಟನೆ ಕೈಬಿಟ್ಟು ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ರಾತ್ರಿ 9 ಗಂಟೆ ಸುಮಾರಿಗೆ ಜ್ಞಾನಭಾರತಿ ಕ್ಯಾಂಪಸ್ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು, ಕಳೆದ ಕೆಲ ತಿಂಗಳಿಂದ ಬಿಸಿಎಂ ಹಾಸ್ಟೆಲ್‌ನಲ್ಲಿ ಕಳಪೆ ಆಹಾರ ಪೂರೈಸಲಾಗುತ್ತಿದೆ. ಅನೇಕ ಬಾರಿ ದವಸ ಸಾಧ್ಯಗಳು ಕೊಳೆತು ಹುಳ ಆಗಿರುವುದನ್ನೇ ಅಡುಗೆ ಮಾಡಿ ಬಡಿಸಿದ್ದಾರೆ. ಈ ಬಗ್ಗೆ ಅನೇಕ ಬಾರಿ ಹಾಸ್ಟೆಲ್ ವಾರ್ಡನ್ ಹಾಗೂ ಇತರೆ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ತಿಂದು ಸಾಯಿರಿ ಅನ್ನುವ ಮಾತುಗಳನ್ನೂ ಕೇಳಿದ್ದೇವೆ. ಕಳೆದ ಒಂದು ವಾರದಿಂದ ಹತ್ತಾರು ವಿದ್ಯಾರ್ಥಿಗಳು ವಾಂತಿ, ಭೇದಿ, ಹೊಟ್ಟೆನೋವಿನಂತಹ ಸಮಸ್ಯೆಗಳಿಗೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಅಧಿಕಾರಿಗಳು ಸ್ಪಂದಿಸದ ಕಾರಣ ಅನಿವಾರ್ಯವಾಗಿ ಪ್ರತಿಭಟನೆ ನಡೆಸಬೇಕಾಯಿತು ಎಂದರು.