ಸಾರಾಂಶ
ಕನ್ನಡಪ್ರಭ ವಾರ್ತೆ ಶಹಾಪುರ
ಕೃತಕ ಅಭಾವ ಸೃಷ್ಟಿಸಿ ಹೆಚ್ಚಿನ ಬೆಲೆಗೆ ಬೀಜ, ರಸಗೊಬ್ಬರ ಮಾರಾಟ ಮಾಡುತ್ತಿರುವ ಅಂಗಡಿಗಳ ಮೇಲೆ ಕಾನೂನಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ವತಿಯಿಂದ ನಗರದ ಬೀಜ, ರಸಗೊಬ್ಬರ ಅಂಗಡಿಗಳು ಮುಂದೆ ಪ್ರತಿಭಟನೆ ಮಾಡಲಾಯಿತು.ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಚನ್ನಪ್ಪ ಆನೆಗುಂದಿ ಮಾತನಾಡಿ, ಕಳೆದ ವರುಷ ಬರಗಾಲದಿಂದ ರೈತರು ತತ್ತರಿಸಿ ಹೋಗಿದ್ದಾರೆ. ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೂ ನಗರದ ರಸಗೊಬ್ಬರ ಮತ್ತು ಬಿತ್ತನೆ ಬೀಜ ಮಾರಾಟಗಾರರು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವುದರಿಂದ ರೈತರು ಅಧಿಕ ಬೆಲೆ ತೆತ್ತು ಖರೀದಿಸುತ್ತಿರುವ ಸ್ಥಿತಿ ಬಂದಿದೆ. ಇಂಥ ಮಾರಾಟ ಕೇಂದ್ರಗಳ ವಿರುದ್ಧ ಕೃಷಿ ಇಲಾಖೆಯ ಅಧಿಕಾರಿಗಳು ಯಾವುದೇ ಕ್ರಮ ಜರುಗಿಸಿಲ್ಲ. ಕಾಟಚಾರಕ್ಕಾಗಿ ಒಂದು ಅಂಗಡಿ ಲೈಸೆನ್ಸ್ ರದ್ದುಪಡಿಸಿದರೆ ಸಾಲದು. ಅಂಗಡಿಗಳ ಮೇಲೆ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳಿಗೆ ಒತ್ತಾಯಿಸಿದರು.
ಕೃತಕ ಅಭಾವ ಸೃಷ್ಟಿಸಿ ಹೆಚ್ಚಿನ ಬೆಲೆಗೆ ಬಿತ್ತನೆ ಬೀಜ ಮಾರಾಟ ಮಾಡುತ್ತಿರುವ ಅಂಗಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೃಷಿ ಇಲಾಖೆಗೆ ಗಮನಕ್ಕೆ ತಂದರೂ ಅಧಿಕಾರಿಗಳು ಸರಿಯಾಗಿ ಸ್ಪಂದಿಸದೆ ಇದ್ದಾಗ, ರೈತರು ಕೃಷಿ ಇಲಾಖೆಗೆ ಹೋಗಿ ಅಧಿಕಾರಿಗಳನ್ನು ಮುಂದೆ ಹಾಕಿಕೊಂಡು ಬಂದು ಅಂಗಡಿಗಳ ಮುಂದೆ ಪ್ರತಿಭಟನೆಗೆ ಮುಂದಾಗಿರುವುದಾಗಿ ರೈತರ ಸಂಘದವರು ತಿಳಿಸಿದ್ದಾರೆ.ಬೀಜ, ಗೊಬ್ಬರ ಅಂಗಡಿಗಳ ಮಾಲೀಕರು ಹಗಲು ದರೋಡೆ ಮಾಡುತ್ತಿರುವುದು ಇಲ್ಲಿನ ಕೃಷಿ ಅಧಿಕಾರಿಗಳು ಹಾಗೂ ಆಡಳಿತ ವರ್ಗಕ್ಕೂ ಗೊತ್ತಿದೆ. ಆದರೆ, ಬಹುತೇಕ ಅಂಗಡಿಗಳ ಮಾಲೀಕರು ರಾಜಕೀಯ ಪ್ರಭಾವದಿಂದಾಗಿ ತಮ್ಮ ಅಂಗಡಿಗಳ ವಿರುದ್ಧ ಕ್ರಮ ಜರುಗಿಸದಂತೆ ನೋಡಿಕೊಳ್ಳುತ್ತಿದ್ದಾರೆ. ಜನಪ್ರತಿನಿಧಿಗಳು ಯಾವಾಗಲೂ ಅಂಗಡಿಗಳ ಮಾಲೀಕರ ಪರ ನಿಲ್ಲುವುದರಿಂದ ರೈತರಿಗೆ ವಂಚನೆ ಆಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ರೈತರ ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕ ಮಾರಾಟಗಾರರು ಕೃತಕ ಅಭಾವ ಸೃಷ್ಟಿಸಿ ಸರಕಾರದ ನಿಗದಿತ ದರಕ್ಕಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುವವರ ವಿರುದ್ಧ ಶಾಶ್ವತ ಲೈಸನ್ಸ್ ರದ್ದು ಮಾಡಬೇಕು. ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವ ಅಂಗಡಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳದಿದ್ದರೆ, ಸಾವಿರಾರು ಸಂಖ್ಯೆಯಲ್ಲಿ ರೈತರು ಜಿಲ್ಲಾಧಿಕಾರಿಗಳ ಕಚೇರಿ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿ ಕರ್ನಾಟಕ ಪ್ರಾಂತ ರೈತ ಸಂಘ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಗಿದೆ ಎಂದು ಸಂಘದ ತಾಲೂಕಾಧ್ಯಕ್ಷ ಭೀಮರಾಯ ಟಪ್ಪೇದಾರ್ ಅವರು ತಿಳಿಸಿದರು.ತಾಲೂಕಿನಲ್ಲಿ ಅಧಿಕೃತ ಬೀಜ, ರಸಗೊಬ್ಬರ ಮತ್ತು ಕೀಟನಾಶಕಗಳ ಮಾರಾಟಗಾರರು ಪ್ರತಿವರ್ಷ ಕೃತಕ ಅಭಾವ ಸೃಷ್ಟಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ವಿವಿಧ ಕಂಪನಿಯ ಹತ್ತಿ ಬೀಜ ನಿಗದಿತ ಬೆಲೆಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ಅಂತವರ ವಿರುದ್ಧ ಯಾವುದೇ ಮುಲಾಜಿಲ್ಲದೇ ಅಂಗಡಿ ಲೈಸನ್ಸ್ ರದ್ದು ಮಾಡಬೇಕು ಎಂದು ಆಗ್ರಹಿಸಿದರು. ಈ ವೇಳೆ ವಿವಿಧ ಹಳ್ಳಿಗಳಿಂದ ಬಂದ ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.