ಕನ್ನಡಪ್ರಭ ವಾರ್ತೆ ಕಾರವಾರ

ತಾಲೂಕು ಪಂಚಾಯಿತಿಯಿಂದ 15ನೇ ಹಣಕಾಸು ಯೋಜನೆಯಡಿ ಅನುದಾನ ಬಿಡುಗಡೆಗೊಂಡ ಕಾಮಗಾರಿಗಳನ್ನು ಪ್ರತಿಶತ ನೂರರಷ್ಟು ಪ್ರಗತಿ ಸಾಧಿಸಬೇಕು ಹಾಗೂ ಹಣಕಾಸು ವರ್ಷದ ಅಂತ್ಯವಾಗಿರುವುದರಿಂದ ಬಿಲ್ಲುಗಳನ್ನು ಸಲ್ಲಿಸಲು ಕೊನೆಯ ದಿನಾಂಕದೊಳಗೆ ತಮ್ಮ ಇಲಾಖೆಯಲ್ಲಿ ಇರುವ ಅನುದಾನ ಬಗ್ಗೆ ಪರಿಶೀಲನೆ ಮಾಡಿ ಕಾಮಗಾರಿಗಳ ಬಿಲ್ಲು ಹಾಗೂ ಅಧಿಕಾರಿ ಸಿಬ್ಬಂದಿ ವೇತನ ಬಾಕಿ ಇರುವ ಬಗ್ಗೆ ಪರಿಶೀಲನೆ ಮಾಡಿ, ಉಳಿದ ಅನುದಾನದಲ್ಲಿ ಹೊಸ ಕ್ರಿಯಾ ಯೋಜನೆ ಮಾಡಲು ಅವಕಾಶವಿದೆ ಆದ್ದರಿಂದ ಯಾವುದೇ ಕಾರಣಕ್ಕೂ ಬಿಡುಗಡೆಗೊಂಡ ಅನುದಾನವನ್ನು ವ್ಯರ್ಥ ಮಾಡಬೇಡಿ ಎಂದು ತಾಲೂಕು ಪಂಚಾಯತ ಆಡಳಿತಾಧಿಕಾರಿ ಸೋಮಶೇಖರ್ ಮೇಸ್ತಾ ಹೇಳಿದರು.

ಸೋಮವಾರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ತಾಪಂ ಕೆಡಿಪಿ ಹಾಗೂ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ವಿವಿಧ ಇಲಾಖೆಗಳ ಮೂಲಕ ಸರ್ಕಾರವು ವಿವಿಧ ಯೋಜನೆಗಳು, ಸೌಲಭ್ಯಗಳನ್ನು ಸಾರ್ವಜನಿಕರಿಗೆ ನೀಡುತ್ತಿದ್ದು, ಸಾರ್ವಜನಿಕರಿಗೆ ಸರಿಯಾದ ಮಾಹಿತಿ ಇಲ್ಲದೇ ಇರುವುದರಿಂದ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ. ಆದರಿಂದ ಎಲ್ಲಾ ಇಲಾಖೆಯವರು ತಮ್ಮ ಇಲಾಖೆಯಿಂದ ಸಿಗುವ ಸೌಲಭ್ಯಗಳು ಮತ್ತು ಹೇಗೆ ಪಡೆಯಬೇಕು ಎಂಬುದರ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿ, ಎಲ್ಲಾ ಮಾಹಿತಿಯುಳ್ಳ ಫಲಕವನ್ನು ಗ್ರಾಮ ಪಂಚಾಯಿತಿಗಳಲ್ಲಿ ಅಳವಡಿಸಬೇಕು ಎಂದರು.

ಮಳೆಗಾಲದಲ್ಲಿ ಸಾರ್ವಜನಿಕರ ಆರೋಗ್ಯದಲ್ಲಿ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಹೆಚ್ಚಾರಿವುದರಿಂದ ಮುಂಜಾಗ್ರತೆಯ ಕ್ರಮವಾಗಿ ಅಗತ್ಯ ಔಷಧಿ ಸಾಮಗ್ರಿಗಳನ್ನು ಖರೀದಿಸುವಂತೆ ಹಾಗೂ ಹೆಸ್ಕಾಂ ಇಲಾಖೆಯವರು ಕೂಡ ಮಳೆಗಾಲ ಮುಂಚಿತವಾಗಿ ಬಾಕಿ ಇರುವ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಸೂಚಿಸಿದ ಅವರು, ಟ್ರಾನ್ಸ್ ಫಾರ್ಮರ್ ಹಾಗೂ ವಿದ್ಯುತ್ ಲೈನ್‌ಗಳನ್ನು ಸರಿಪಡಿಸಲು ಬೇಕಾಗುವ ಉಪಕರಣಗಳನ್ನು ಮುಂಜಾಗ್ರತವಾಗಿ ದಾಸ್ತಾನು ಮಾಡಿಕೊಳ್ಳುವಂತೆ ಸಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಹೇಳಿದರು.


ಅಧಿಕಾರಿಗಳು ವಸತಿ ನಿಲಯಗಳಿಗೆ ಭೇಟಿ ನೀಡಿ ಕೊಂದುಕೊರತೆಗಳ ಬಗ್ಗೆ ಪರಿಶೀಲನೆ ನಡೆಸಬೇಕು. ಲ್ಯಾಬ್ ಎಜೆನ್ಸಿಯವರಿಂದ ಬಿಸಿಯೂಟದ ಪರೀಕ್ಷೆ ನಡೆಸಬೇಕು. ಪ್ರತಿವರ್ಷ ಗ್ಯಾಸ್ ಪೈಪ್ ಬದಲಾಯಿಸುವಂತೆ ಮತ್ತು ಅಗತ್ಯವಿದ್ದಲ್ಲಿ ಒಲೆಗಳನ್ನು ಬದಲಾಯಿಸುವಂತೆ ಹೇಳಿದ ಅವರು ಮೆನು ಪ್ರಕಾರವೇ ಆಹಾರವನ್ನು ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಈ ವರ್ಷ ಎಸ್.ಎಸ್.ಎಲ್.ಸಿಯಲ್ಲಿ ಪ್ರತಿಶತ 100ರಷ್ಟು ಗುರಿ ಸಾಧಿಸುವ ಉದ್ದೇಶದಿಂದ ಸರ್ಕಾರಿ ಫ್ರೌಢಶಾಲೆಯ ಮುಖ್ಯೋಪಾಧ್ಯಾಯರೊಂದಿಗೆ ಸಭೆಯನ್ನು ಆಯೋಜಿಸುವಂತೆ ಸೂಚಿಸಿದ ಅವರು ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಿಶೇಷ ತರಗತಿ, ಶಿಬಿರಗಳನ್ನು ಆಯೋಜನೆ ಮಾಡುವ ಮೂಲಕ ವಿದ್ಯಾರ್ಥಿಗಳ ಆತ್ಮಸ್ಥೈರ್ಯ ಹೆಚ್ಚಿಸಬೇಕು ಎಂದು ಹೇಳಿದರು.

ಕಾರ್ಯನಿರ್ವಾಹಕ ಅಧಿಕಾರಿ ವೀರನಗೌಡ ಪಿ. ಏನಗಗೌಡ, ತಾಲೂಕು ಮಟ್ಟದ ಅಧಿಕಾರಿ, ಸಿಬ್ಬಂದಿ ಉಪಸ್ಥಿತರಿದ್ದರು.