ಸಾರಾಂಶ
ಕನ್ನಡಪ್ರಭ ವಾರ್ತೆ ಬ್ರಹ್ಮಾವರ
ಪ್ರತಿಯೊಂದು ಮಗುವಿನಲ್ಲೂ ವಿಶೇಷವಾದ ಸಾಮರ್ಥ್ಯ ಹಾಗೂ ಪ್ರತಿಭೆ ಅಡಗಿರುತ್ತದೆ. ಅದನ್ನು ನಿರೇರೆದು ಪೋಷಿಸಿದಾಗ ಮಾತ್ರ ಆ ಮಗುವು ಜೀವನದಲ್ಲಿ ಉನ್ನತ ಸಾಧನೆ ಮಾಡಲು ಸಾಧ್ಯ. ಇದಕ್ಕೆ ಎಲ್ಲರೂ ಪ್ರೋತ್ಸಾಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಹೇಳಿದರು.ಅವರು ಗುರುವಾರ ಇಲ್ಲಿನ ಕೊಕ್ಕರ್ಣೆ ದುರ್ಗಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾಡಳಿತ ವತಿಯಿಂದ ಶ್ರೀರಾಮ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಬೈದೆಬೆಟ್ಟು ಸಹಯೋಗದಲ್ಲಿ ಆಯೋಜಿಸಲಾದ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಬಾಲ್ಯದಲ್ಲಿಯೇ ಮಕ್ಕಳಲ್ಲಿರುವ ವಿಶೇಷ ಪ್ರತಿಭೆಗಳನ್ನು ಗುರುತಿಸಿ, ಅದನ್ನು ಬೆಳೆಯುವಂತೆ ಮಾಡುವುದು ಪೋಷಕರು, ಶಿಕ್ಷಕರು ಹಾಗೂ ಸಮಾಜದ ಜವಾಬ್ದಾರಿಯಾಗಿದೆ. ಪೋಷಕರು ತಮ್ಮ ಮಕ್ಕಳ ಆಸಕ್ತಿಗಳ ಕ್ಷೇತ್ರಗಳನ್ನು ಗುರುತಿಸಿ, ಪ್ರೋತ್ಸಾಹ ನೀಡಬೇಕು ಎಂದ ಅವರು, ಪ್ರತಿಯೊಬ್ಬ ವಿದ್ಯಾರ್ಥಿಯೂ ಸಮಾಜದಲ್ಲಿ ಉತ್ತಮ ನಾಗರಿಕನಾಗಿ ಬೆಳೆಯಲು ಶಿಕ್ಷಕರು ಅವಕಾಶ ಮಾಡಿಕೊಡಬೇಕು ಎಂದರು.
ಕೊಕ್ಕರ್ಣೆ ಗ್ರಾ.ಪಂ. ಅಧ್ಯಕ್ಷ ಜಯಂತ್ ಪೂಜಾರಿ ಅಧ್ಯಕ್ಷತೆ ವಹಿಸಿ ಶುಭಹಾರೈಸಿದರು.ಕಾರ್ಯಕ್ರಮದಲ್ಲಿ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ದಿನಕರ ಶೆಟ್ಟಿ ಅಂಪಾರು, ಬ್ರಹ್ಮಾವರ ಕ್ಷೇತ್ರ ಶಿಕ್ಷಣಾಧಿಕಾರಿ ಶಭಾನ ಅಂಜುಂ, ಶ್ರೀರಾಮ ಅ.ಹಿ. ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕ ಕೆ.ಶಾಂತರಾಜ ಶೆಟ್ಟಿ, ಕುಚ್ಚೂರು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ನವಿನ್ ಕುಮಾರ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ವಿ. ಸದಾಶಿವ ಪೂಜಾರಿ, ಶಾಲೆಯ ಸಂಚಾಲಕಿ ಸುಮತಿ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ ಕೆ. ಸ್ವಾಗತಿಸಿದರು.ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಭಾಷಣ, ಆಶುಭಾಷಣ, ಚರ್ಚೆ, ಕಂಠಪಾಠ, ಭಕ್ತಿಗೀತೆ, ಸೇರಿದಂತೆ ಹಲವು ಸ್ಪರ್ಧೆಗಳು ನಡೆದವು.