ವಿದ್ಯಾರ್ಥಿಗಳಿಗೆ ಓದುವಾಗ ಹಲವಾರು ಸಮಸ್ಯೆಗಳು ಎದುರಾಗುವುದು ಸಹಜ. ಆದರೆ, ಆ ಸವಾಲುಗಳನ್ನು ಮೆಟ್ಟಿ ನಿಂತಾಗ ಮಾತ್ರ ಸಾಧನೆ ಶಿಖರ ಏರಲು ಸಾಧ್ಯ. ಸಣ್ಣಪುಟ್ಟ ಕಾರಣಗಳನ್ನು ಮುಂದಿಟ್ಟುಕೊಂಡು ಗುರಿ ಸಾಧನೆ ಪ್ರಯತ್ನವನ್ನು ಅರ್ಧಕ್ಕೆ ನಿಲ್ಲಿಸಬಾರದು.

ಕನ್ನಡಪ್ರಭ ವಾರ್ತೆ ಹಲಗೂರು

ವಿದ್ಯಾರ್ಥಿಗಳಿಗೆ ಓದುವಾಗ ಹಲವಾರು ಸಮಸ್ಯೆಗಳು ಎದುರಾಗುವುದು ಸಹಜ. ಆದರೆ, ಆ ಸವಾಲುಗಳನ್ನು ಮೆಟ್ಟಿ ನಿಂತಾಗ ಮಾತ್ರ ಸಾಧನೆ ಶಿಖರ ಏರಲು ಸಾಧ್ಯ ಎಂದು ಸಾರ್ವಜನಿಕ ಶಾಲಾ ಶಿಕ್ಷಣ ಇಲಾಖೆ ಜಿಲ್ಲಾ ಉಪ ನಿರ್ದೇಶಕ (ಡಿಡಿಪಿಐ) ಬಸವರಾಜು ತಿಳಿಸಿದರು.

ತಮ್ಮ ಹುಟ್ಟೂರು ಅಗಸನಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಗೆ ಭೇಟಿ ನೀಡಿ ಶೈಕ್ಷಣಿಕ ಪ್ರಗತಿ ಮತ್ತು ಭೌತಿಕ ಸೌಲಭ್ಯಗಳನ್ನು ಪರಿಶೀಲಿಸಿ, ಶಾಲೆ ಶಿಕ್ಷಕರ ಮತ್ತು ಎಸ್‌ಡಿಎಂಸಿ ಅಧ್ಯಕ್ಷರು ಮತ್ತು ಸದಸ್ಯರ ಜೊತೆ ಮಾತನಾಡಿದರು.

ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಬಳಕೆಗೆ ಯೋಗ್ಯವಲ್ಲದ ಶೌಚಾಲಯಗಳನ್ನು ದುರಸ್ತಿಪಡಿಸಲು ಅಥವಾ ತೆರವುಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಪತ್ರ ಬರೆಯುವಂತೆ ಸೂಚಿಸಿದರು. ಅಲ್ಲದೇ, ಶಾಲೆ ಎರಡು ಕೊಠಡಿಗಳು ಶಿಥಿಲಾವಸ್ಥೆಯಲ್ಲಿರುವುದನ್ನು ಗಮನಿಸಿ ಅವುಗಳ ದುರಸ್ತಿ ಹಾಗೂ ಅಗತ್ಯವಿರುವ ಹೊಸ ಕೊಠಡಿಗಳ ನಿರ್ಮಾಣಕ್ಕೆ ಮೇಲಾಧಿಕಾರಿಗಳ ಕಚೇರಿಗೆ ಶಿಫಾರಸು ಪತ್ರ ಸಲ್ಲಿಸುವಂತೆ ತಿಳಿಸಿದರು.

ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಮಕ್ಕಳು ಉತ್ತಮ ವಿದ್ಯಾಭ್ಯಾಸ ಮಾಡಿ ಶಾಲೆ ಹಾಗೂ ಗ್ರಾಮಕ್ಕೆ ಕೀರ್ತಿ ತರಬೇಕು ಎಂದು ಹುರಿದುಂಬಿಸಿದರು. ತಮ್ಮ ಬಾಲ್ಯದ ಶಾಲಾ ದಿನಗಳ ಅನುಭವಗಳನ್ನು ಹಂಚಿಕೊಂಡರು.

ಸಣ್ಣಪುಟ್ಟ ಕಾರಣಗಳನ್ನು ಮುಂದಿಟ್ಟುಕೊಂಡು ಗುರಿ ಸಾಧನೆ ಪ್ರಯತ್ನವನ್ನು ಅರ್ಧಕ್ಕೆ ನಿಲ್ಲಿಸಬಾರದು. ದೊರೆತಿರುವ ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು ನಿರ್ದಿಷ್ಟ ಗುರಿಯೊಂದಿಗೆ ಸಾಧಿಸಿ ತೋರಿಸಬೇಕು ಎಂದರು.

ಇದ್ದೇ ವೇಳೆ ಡಿಡಿಪಿಐ ಬಸವರಾಜು ಅವರನ್ನು ಶಾಲೆ ಹಿರಿಯ ವಿದ್ಯಾರ್ಥಿಗಳ ಸಂಘದಿಂದ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.

ಈ ವೇಳೆ ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಈ.ಉಮಾ, ಮುಖ್ಯ ಶಿಕ್ಷಕ ಚಿನ್ನಸ್ವಾಮಿ, ಶಿಕ್ಷಕರಾದ ಹರೀಶ್ ಕುಮಾರ್, ಅಶ್ವಿನಿ, ಹಿರಿಯ ವಿದ್ಯಾರ್ಥಿಗಳಾದ ಕುಮಾರ್, ಪ್ರಶಾಂತ್ ಕುಮಾರ್, ಗ್ರಾಮದ ಮುಖಂಡ ಪ್ರಸಾದ್, ಎಸ್‌ಡಿಎಂಸಿ ಅಧ್ಯಕ್ಷ ದೇವರಾಜು ಸೇರಿದಂತೆ ಶಿಕ್ಷಕರು, ಗ್ರಾಮಸ್ಥರು ಹಾಗೂ ಹಿರಿಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.