ಸಾರಾಂಶ
ಕನ್ನಡಪ್ರಭ ವಾರ್ತೆ ಮದ್ದೂರು
ಜ್ಞಾನ ಮತ್ತು ಕ್ರಿಯಾಶೀಲ ಶಿಕ್ಷಣದ ಸಮ್ಮಿಲನದಿಂದ ವಿದ್ಯಾರ್ಥಿಗಳ ಜೀವನದಲ್ಲಿ ಸಾಧನೆ ಸಾಧ್ಯವಾಗಲಿದೆ ಎಂದು ಬೆಂಗಳೂರು ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾನಿಲಯದ ಕನ್ನಡ ಪ್ರಾಧ್ಯಾಪಕಿ ಡಾ.ಎಲ್.ಜಿ.ಮೀರಾ ಹೇಳಿದರು.ಪಟ್ಟಣದ ಮಹಿಳಾ ಸರ್ಕಾರಿ ಕಾಲೇಜಿನಲ್ಲಿ ಸಾಂಸ್ಕೃತಿಕ ಕ್ರೀಡೆ, ರಾಷ್ಟ್ರೀಯ ಸೇವಾ ಯೋಜನೆಯ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಯುವರೇಟ್ ಕ್ರಾಸ್ ಸಮಾರೋಪ ಸಮಾರಂಭದಲ್ಲಿ ಅವರು ಪ್ರಧಾನ ಭಾಷಣ ಮಾಡಿದರು.
ವಿದ್ಯಾರ್ಥಿ ಜೀವನದಲ್ಲಿ ವಿಶಾಲವಾದ ಅವಕಾಶಗಳಿವೆ. ಅವುಗಳನ್ನು ಸದುಪಯೋಗಪಡಿಸಿಕೊಂಡು ಶ್ರಮಪಟ್ಟರೆ ಸಾಧನೆ ಸಾಕಾರವಾಗುವುದು. ವಿದ್ಯಾರ್ಥಿನಿಯರು ಸಾಮಾಜಿಕ ಜಾಲತಾಣಗಳ ವ್ಯಾಮೋಹಕ್ಕೆ ಸಿಲುಕದೇ ತಮ್ಮ ಜವಾಬ್ದಾರಿ ಅರಿತು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿನಿಯರು ಫೇಸ್ ಬುಕ್, ಇನ್ಸ್ಟಾಗ್ರಾಮ್ ಸೇರಿ ಅನೇಕ ಜಾಲತಾಣಗಳ ವ್ಯಾಮೋಹಕ್ಕೆ ಬಲಿಯಾಗಿ ತಮ್ಮ ವಿದ್ಯಾರ್ಥಿ ಜೀವನವನ್ನು ತಮಗರಿವಿಲ್ಲದಂತೆ ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ವಿಷಾಧಿಸಿದರು. ಮೈಸೂರು ಯುವರಾಜ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಎಂ.ರುದ್ರಯ್ಯ ಮಾತನಾಡಿ, ಪ್ರತಿ ಮನೆಯಲ್ಲೂ ಹೆಣ್ಣು ಮಕ್ಕಳು ವಿದ್ಯೆ ಕಲಿತರೆ ಅವರ ಇಡೀ ಕುಟುಂಬ ಶಿಕ್ಷಿತವಾಗುತ್ತದೆ. ಹೀಗಾಗಿ ವಿದ್ಯಾರ್ಥಿನಿಯರು ನಿರ್ದಿಷ್ಟ ಗುರಿ, ಸಾಧನೆ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಹೇಳಿದರು.
ಅಂತಾರಾಷ್ಟ್ರೀಯ ಟೇಬಲ್ ಟೆನ್ನಿಸ್ ಆಟಗಾರ್ತಿ ಹಾಗೂ ಏಕಲವ್ಯ ಪ್ರಶಸ್ತಿ ವಿಜೇತೆ ಅನರ್ಘ ಮಂಜುನಾಥ್, ಮೈಸೂರು ವಿಶ್ವವಿದ್ಯಾನಿಲಯದ ಪದವಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿ ಚಿನ್ನದ ಪದಕ ಪಡೆದ ವಿದ್ಯಾರ್ಥಿನಿ ನಿಸರ್ಗ, ರಾಷ್ಟ್ರೀಯ ಸೇವಾ ಯೋಜನೆ ಶಿಬಿರದಲ್ಲಿ ಉತ್ತಮ ಸೇವೆ ಸಲ್ಲಿಸಿದ ಸ್ವಯಂ ಸೇವಕರಿಗೆ ಮತ್ತು ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿನಿಯರಿಗೆ ಕಾಲೇಜಿನ ವತಿಯಿಂದ ಅಭಿನಂದಿಸಲಾಯಿತು.ಕಾಲೇಜಿನ ಪ್ರಾಂಶುಪಾಲರು ಪ್ರೊ. ಕೆ.ಬಿ.ನಾರಾಯಣ ಅಧ್ಯಕ್ಷತೆ ವಹಿಸಿದ್ದರು. ಪ್ರಾಧ್ಯಾಪಕರಾದ ಡಾ.ಬಿ.ಆರ್.ನಮ್ರತಾ, ಡಾ. ಮಾದೇಗೌಡ. ಪ್ರೊ. ಶರೀನ್ ತಾಜ್. ಡಾ.ಸಿ.ಪಿ.ಕೃಷ್ಣ, ಮಂಜುನಾಥ್, ಕೆ.ಟಿ.ವೆಂಕಟೇಶ್ ಹಾಗೂ ಗಂಗಮ್ಮ ಇದ್ದರು.