ಡೆಂಘೀ ನಿಯಂತ್ರಣಕ್ಕೆ ಸಮಾರೋಪಾದಿಯಲ್ಲಿ ಕಾರ್ಯನಿರ್ವಹಿಸಿ

| Published : Jul 14 2024, 01:36 AM IST

ಸಾರಾಂಶ

ಸಾರ್ವಜನಿಕರ ಆರೋಗ್ಯ ಹಿತದೃಷ್ಟಯಿಂದ ಡೆಂಘೀ ನಿಯಂತ್ರಣಕ್ಕೆ ಆರೋಗ್ಯ ಇಲಾಖೆಯೊಂದಿಗೆ ಇತರೆ ಇಲಾಖೆಗಳು ಹಾಗೂ ಸಾರ್ವಜನಿಕರ ಪಾತ್ರ ಬಹಳ ಮುಖ್ಯವಾಗಿದೆ. ಎಲ್ಲರೂ ಸಮನ್ವಯದಿಂದ ಡೆಂಘೀ ನಿಯಂತ್ರಣ ಕಾರ್ಯವನ್ನು ಸಮರೋಪಾದಿಯಲ್ಲಿ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ತಿಳಿಸಿದರು.

ಹಾವೇರಿ: ಸಾರ್ವಜನಿಕರ ಆರೋಗ್ಯ ಹಿತದೃಷ್ಟಯಿಂದ ಡೆಂಘೀ ನಿಯಂತ್ರಣಕ್ಕೆ ಆರೋಗ್ಯ ಇಲಾಖೆಯೊಂದಿಗೆ ಇತರೆ ಇಲಾಖೆಗಳು ಹಾಗೂ ಸಾರ್ವಜನಿಕರ ಪಾತ್ರ ಬಹಳ ಮುಖ್ಯವಾಗಿದೆ. ಎಲ್ಲರೂ ಸಮನ್ವಯದಿಂದ ಡೆಂಘೀ ನಿಯಂತ್ರಣ ಕಾರ್ಯವನ್ನು ಸಮರೋಪಾದಿಯಲ್ಲಿ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ತಿಳಿಸಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಟಾಸ್ಕಫೋರ್ಸ್ ಹಾಗೂ ಅಂತರ ಇಲಾಖೆಗಳ ಸಮನ್ವಯ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಎಲ್ಲ ಕಚೇರಿಗಳ ಒಳಗೆ ಹಾಗೂ ಪರಿಸರದಲ್ಲಿ ವಾರಕ್ಕೊಮ್ಮೆ ಲಾರ್ವಾ ಸಮೀಕ್ಷೆ ಕೈಗೊಳ್ಳಬೇಕು. ಲಾರ್ವಾ ಸಮೀಕ್ಷೆ ಮತ್ತು ನಿರ್ಮೂಲನೆ ಕಾರ್ಯದಲ್ಲಿ ಸ್ಥಳೀಯ ನಗರ ಸಂಸ್ಥೆಗಳ ಆರೋಗ್ಯ ನಿರೀಕ್ಷಕರು ಭಾಗವಹಿಸಿ ಸಹಕಾರ ನೀಡಬೇಕು ಎಂದರು.ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರತಿ ಗ್ರಾಮಗಳಲ್ಲಿ ಮೈಕಿಂಗ್, ಭಿತ್ತಿ ಪತ್ರಗಳ ವಿತರಣೆ ಹಾಗೂ ಡಂಗುರ ಸಾರುವ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು. ಲಭ್ಯವಿರುವ ಫಾಗಿಂಗ್ ಯಂತ್ರಗಳ ಮೂಲಕ ತುರ್ತು ಸಂದರ್ಭಗಳಲ್ಲಿ ಒಳಾಂಗಣ ಧೂಮೀಕರಣ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.ಬಸ್ ನಿಲ್ದಾಣ, ರೈಲು ನಿಲ್ದಾಣ, ಮಾರುಕಟ್ಟೆ, ಕಾಲೇಜುಗಳ ಆವರಣ ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ ಡೆಂಘೀ ರೋಗದ ಜಾಗೃತಿಮೂಡಿಸಲು ಫ್ಲೆಕ್ಸ್‌ಗಳನ್ನು ಅಳಡಿಸಬೇಕು. ಘನತಾಜ್ಯ ವಸ್ತುಗಳ ಮೇಲೆ ಮಳೆ ನೀರು ಸಂಗ್ರಹವಾಗದಂತೆ ಸೂಕ್ತಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.ಡೆಂಘೀ ಮತ್ತು ಇತರೆ ಕೀಟಜನ್ಯ ರೋಗಗಳ ನಿಯಂತ್ರಣದ ಅರಿವು ಮೂಡಿಸಲು ವಿದ್ಯಾರ್ಥಿಗಳು ಮತ್ತು ಸಮುದಾಯದ ಸಹಭಾಗಿತ್ವ ಹಾಗೂ ಪಾತ್ರ ಕುರಿತು ಭಾಷಣ ಸ್ಪರ್ಧೆ, ರಸಪ್ರಶ್ನೆ ಸ್ಪರ್ಧೆ, ಪ್ರಬಂಧ ಸ್ಪರ್ಧೆ, ಕಿರುನಾಟಕಗಳನ್ನು ಹಮ್ಮಿಕೊಳ್ಳುವ ಮೂಲಕ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಕೆಲಸಮಾಡಬೇಕು. ಶಾಲಾ ಪ್ರಾರ್ಥನೆ ಸಮಯದಲ್ಲಿ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕ್ರಮಗಳ ಕುರಿತು ಮಕ್ಕಳಿಗೆ ಆರೋಗ್ಯ ಶಿಕ್ಷಣ ನೀಡಬೇಕು ಎಂದು ಸಲಹೆ ನೀಡಿದರು.ವಸತಿ ನಿಲಯಗಳಲ್ಲಿ ಸೊಳ್ಳೆ ಪರೆದಗಳನ್ನು ಉಪಯೋಗಿಸಲು ಹಾಗೂ ಕಿಟಕಿಗಳಿಗೆ ಸೊಳ್ಳೆ ನಿರೋಧಕ ಜಾಲರಿ ಅಳವಡಿಸಬೇಕು. ಎಲ್ಲಾ ವಸತಿ ನಿಲಯಗಳಲ್ಲಿ ವಾರಕ್ಕೊಮ್ಮೆ ಲಾರ್ವಾ ಸಮೀಕ್ಷೆ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳು, ದೇವಸ್ಥಾನಗಳು, ಹೋಟೆಲ್, ಕಲ್ಯಾಣ ಮಂಟಪ, ಸಿನಿಮಾ ಮಂದಿರಗಳು, ಪಾರ್ಕ್ಗಳಿಗೆ ವಾರಕ್ಕೊಮ್ಮೆ ಭೇಟಿ ಲಾರ್ವಾ ಸಮೀಕ್ಷೆ ಮತ್ತು ನಿರ್ಮೂಲನೆ ಕಾರ್ಯಕೈಗೊಳ್ಳುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ಟೈರಗಳು ಹಾಗೂ ವಾಹನದ ಅನುಪಯುಕ್ತ ಬಿಡಿ ಭಾಗಗಳಲ್ಲಿ ನೀರು ನಿಲ್ಲದಂತೆ ಕ್ರಮಕೈಗೊಳ್ಳಬೇಕು. ಟೈರಗಳನ್ನು ಒಂದರ ಮೇಲೊಂದು ಇರಿಸಿ ಪ್ಲಾಸ್ಟಿಕ್ ಶೀಟ್‌ನಿಂದ ಮುಚ್ಚಬೇಕು ಎಂದು ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.ಸಾರ್ವಜನಿಕರು ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ನೀರು ಸಂಗ್ರಹಿಸುವ ಪರಿಕರಗಳಾದ ಸಿಮೆಂಟ್ ತೊಟ್ಟಿ, ಡ್ರಮ್, ಬ್ಯಾರೆಲ್ ಇತ್ಯಾದಿಗಳನ್ನು ವಾರಕ್ಕೊಮ್ಮೆ ಸ್ವಚ್ಛಗೊಳಿಸುವ ಮೂಲಕ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕೈಜೋಡಿಸಬೇಕು. ಸೊಳ್ಳೆಪರದೆ ಬಳಸಬೇಕು, ಮೈತುಂಬಾ ಬಟ್ಟೆ ಧರಿಸಬೇಕು ಹಾಗೂ ಕಿಟಕಿ ಬಾಗಿಲುಗಳಿಗೆ ಸೊಳ್ಳೆ ನಿರೋಧಕ ಜಾಲರಿ ಅಳವಡಿಸಬೇಕು. ಬಳಸುವ ನೀರಿನಲ್ಲಿ ಈಡಿಸ್ ಸೊಳ್ಳೆಗಳು ಉತ್ಪತ್ತಿಯಾಗದಂತೆ ತಡೆಯಲು ನೀರಿಗೆ ಕೊಬ್ಬರಿ ಎಣ್ಣೆ ಹಾಕಬೇಕು. ಜ್ವರದ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಆಸ್ಪತ್ರೆಗೆ ತೆರಳಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ತಿಳಿಸಿದರು.ಸಭೆಯಲ್ಲಿ ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಕ್ಷಯ್ ಶ್ರೀಧರ್, ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ಹಾವೇರಿ ವೈದ್ಯಕೀಯ ವಿಜ್ಞಾನ ಸಂಸ್ಥೆ ನಿರ್ದೇಶಕ ಡಾ.ಪ್ರದೀಪ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಪಿ.ಆರ್.ಹಾವನೂರ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಮಮತಾ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಜಗದೀಶ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ನಿಲೇಶ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸುರೇಶ ಹುಗ್ಗಿ ಇದ್ದರು.