ಸಾರಾಂಶ
ಕನ್ನಡಪ್ರಭ ವಾರ್ತೆ ವಿಜಯಪುರ
ಸರ್ಕಾರದ ವಿವಿಧ ಯೋಜನೆಗಳ ಲಾಭವನ್ನು ಅರ್ಹರಿಗೆ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಸಮನ್ವಯತೆಯಿಂದ ಯೋಜನಾ ಬದ್ಧವಾಗಿ ಕಾರ್ಯನಿರ್ವಹಿಸಬೇಕು ಎಂದು ಸಿಬ್ಬಂದಿ ಆಡಳಿತ ಸುಧಾರಣೆ ಇಲಾಖೆ (ಇ-ಆಡಳಿತ) ಸರ್ಕಾರದ ಕಾರ್ಯದರ್ಶಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಜ್ವಲ್‌ಕುಮಾರ ಘೋಷ್ ಅಧಿಕಾರಿಗಳಿಗೆ ಸೂಚನೆ ನೀಡಿದರು.ನಗರದ ಜಿಪಂ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ಅಧಿಕಾರಿಗಳು ಇಲಾಖಾ ಸಮನ್ವಯದೊಂದಿಗೆ ಒಂದು ತಂಡವಾಗಿ ಕಾರ್ಯನಿರ್ವಹಿಸುವ ಮೂಲಕ ಯಾವುದೇ ವಿಳಂಬಕ್ಕೆ ಆಸ್ಪದ ನೀಡದೇ ನಿಗದಿತ ಅವಧಿಯಲ್ಲಿ ಅರ್ಹರಿಗೆ ಸೌಲಭ್ಯ ದೊರಕಿಸಲು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು. ಸರಿಯಾದ ಸಮಯಕ್ಕೆ ಕಚೇರಿಗೆ ಹಾಜರಾಗುವ ಮೂಲಕ ಕರ್ತವ್ಯದಲ್ಲಿ ನಿಷ್ಠುರತೆ ಮೆರೆಯುವ ಮೂಲಕ ಇತರೆ ಸಿಬ್ಬಂದಿಗೆ ಪ್ರೇರಣೆ ದೊರೆಯುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.ಜಿಲ್ಲೆಯಲ್ಲಿ ಉಂಟಾಗಬಹುದಾದ ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಬೇಕು. ಕಾಲಕಾಲಕ್ಕೆ ಟಾಸ್ಕ್‌ಫೋರ್ಸ್ ಸಭೆಗಳನ್ನು ನಡೆಸಿ ಮುನ್ನೆಚ್ಚರಿಕಾ ಕ್ರಮ ವಹಿಸಬೇಕು. ಪ್ರವಾಹದಿಂದ ಯಾವುದೇ ಹಾನಿಯಾಗದಂತೆ ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಡೆಂಘೀ ನಿಯಂತ್ರಣಕ್ಕೆ ಕ್ರಮ ವಹಿಸಬೇಕು. ಸ್ವಚ್ಛತೆಗೆ ಆದ್ಯತೆ ನೀಡಬೇಕು. ನಿರಂತರವಾಗಿ ಫಾಗಿಂಗ್ ಕೈಗೊಳ್ಳಬೇಕು. ಅಂಗನವಾಡಿ, ಆಶಾ ಕಾರ್ಯಕರ್ತೆಯರು ಮನೆ-ಮನೆಗೆ ಭೇಟಿ ನೀಡಿ ಡೆಂಘೀ ನಿಯಂತ್ರಣ ಕುರಿತು ಅರಿವು ಮೂಡಿಸಲು ಕ್ರಮ ವಹಿಸಬೇಕು ಎಂದು ಸೂಚನೆ ನೀಡಿದರು.ಜಿಲ್ಲಾಧಿಕಾರಿ ಟಿ.ಭೂಬಾಲನ್ ಮಾತನಾಡಿ, ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿರ್ವಹಿಸಲು ಕೃಷ್ಣಾ, ಭೀಮಾ ಮತ್ತು ಡೋಣಿ ನದಿಯ ಪಾತ್ರದಲ್ಲಿರುವ ಒಟ್ಟು ೧೧ ತಾಲೂಕುಗಳ 38 ಗ್ರಾಪಂಗಳಲ್ಲಿರುವ ಒಟ್ಟು 76 ಗ್ರಾಮಗಳಲ್ಲಿ ಗ್ರಾಮ ವಿಪತ್ತು ನಿರ್ವಹಣಾ ಸಮಿತಿಗಳನ್ನು ರಚಿಸಲಾಗಿದೆ. ರಕ್ಷಣಾ ಸಾಮಗ್ರಿಗಳಾದ ಬೋಟ್, ರೋಪ್ಸ್, ಲೈಫ್ ಜಾಕೆಟ್, ಲೈಫ್ ಬಾಯ್, ಟಾರ್ಚ್ ಹಾಗೂ ಚೈನ್ ಸಾ ಇತ್ಯಾದಿ ಸಾಮಗ್ರಿಗಳನ್ನು ತಾಲೂಕು ಮಟ್ಟದಲ್ಲಿ ಹಾಗೂ ಜಿಲ್ಲಾಮಟ್ಟದಲ್ಲಿ ಸುಸಜ್ಜಿತವಾಗಿಟ್ಟುಕೊಳ್ಳಲಾಗಿದೆ ಎಂದರು.ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ವಿಜಯಪುರ ಉಪ ವಿಭಾಗಾಧಿಕಾರಿ ಬಸವಣ್ಣೆಪ್ಪ ಕಲಶೆಟ್ಟಿ, ಇಂಡಿ ಉಪ ವಿಭಾಗಾಧಿಕಾರಿ ಆಬೀದ ಗದ್ಯಾಳ, ಜಿಪಂ ಉಪ ಕಾರ್ಯದರ್ಶಿ ವಿಜಯಕುಮಾರ ಆಜೂರ, ಜಿಪಂ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠೆ, ಕೃಷಿ ಇಲಾಖೆ ಜಂಟಿ ನಿರ್ದೇಶಕ ರಾಜಶೇಖರ ವಿಲಿಯಮ್ಸ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ರಾಹುಲ ಭಾವಿದೊಡ್ಡಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಬಸವರಾಜ ಹುಬ್ಬಳ್ಳಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಶಿವಾನಂದ ಮಾಸ್ತಿಹೊಳಿ, ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.