ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಕಾರ್ಯ ನಿರ್ವಹಿಸಿ: ಜಿಪಂ ಸಿಇಒ

| Published : Mar 25 2024, 12:45 AM IST

ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಕಾರ್ಯ ನಿರ್ವಹಿಸಿ: ಜಿಪಂ ಸಿಇಒ
Share this Article
  • FB
  • TW
  • Linkdin
  • Email

ಸಾರಾಂಶ

ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಎಲ್ಲಾ ಅಧಿಕಾರಿಗಳು ಹಾಗೂ ತಂಡಗಳು ಅತ್ಯಂತ ಜಾಗೃತೆಯಿಂದ ಕಾರ್ಯನಿರ್ವಹಿಸಬೇಕು.

ನೀತಿ ಸಂಹಿತೆ ತರಬೇತಿ ಕಾರ್ಯಕ್ರಮದಲ್ಲಿ ರಾಹುಲ್ ರತ್ನಂ ಪಾಂಡೆ ಹೇಳಿಕೆ

ಕನ್ನಡಪ್ರಭ ವಾರ್ತೆ ಕೊಪ್ಪಳ

ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಎಲ್ಲಾ ಅಧಿಕಾರಿಗಳು ಹಾಗೂ ತಂಡಗಳು ಅತ್ಯಂತ ಜಾಗೃತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಎಂ.ಸಿ.ಸಿ ನೋಡಲ್ ಅಧಿಕಾರಿ ಹಾಗೂ ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆ ಹೇಳಿದರು.

ಲೋಕಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಮಾದರಿ ನೀತಿ ಸಂಹಿತೆ ಕುರಿತು ಪೊಲೀಸ್ ಅಧಿಕಾರಿಗಳು, ಚುನಾವಣೆ ಕರ್ತವ್ಯಕ್ಕೆ ನೇಮಕಗೊಂಡ ಸೆಕ್ಟರ್ ಅಧಿಕಾರಿಗಳು, ಎಸ್.ಎಸ್.ಟಿ ತಂಡ, ವಿಎಸ್ ಟಿ ತಂಡ, ಫ್ಲೈಯಿಂಗ್ ಸ್ಕ್ವಾಡ್, ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿಗಳು, ಸಹಾಯಕ ಚುನಾವಣಾಧಿಕಾರಿಗಳು ಹಾಗೂ ಇತರೆ ಅಧಿಕಾರಿಗಳಿಗಾಗಿ ನಗರದ ಜಿಲ್ಲಾಡಳಿತ ಭವನದ ಅಡಿಟೋರಿಯಂ ಹಾಲ್‌ನಲ್ಲಿ ಶನಿವಾರ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಚುನಾವಣಾ ಕರ್ತವ್ಯಕ್ಕೆ ನಿಯೋಜಿತ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾರತ ಚುನಾವಣಾ ಆಯೋಗದ ಮಾರ್ಗಸೂಚಿ ಓದಿಕೊಳ್ಳಬೇಕು. ಚುನಾವಣಾ ತರಬೇತಿಗಳನ್ನು ಪ್ರತಿ ಚುನಾವಣೆಗಳಲ್ಲಿ ನೀಡಲಾಗುತ್ತದೆ. ನಮ್ಮ ಜಿಲ್ಲೆಯಲ್ಲಿ ತರಬೇತಿ ಪಡೆದ ಅಧಿಕಾರಿಗಳು ಚುನಾವಣೆ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಂಡು ನೀವೆ ಸಂಪನ್ಮೂಲ ವ್ಯಕ್ತಿಗಳಾಗಬೇಕು. ಸಂಪನ್ಮೂಲ ವ್ಯಕ್ತಿಗಳಾಗಿ ಬೇರೆ ಜಿಲ್ಲೆಗಳಿಗೆ ಹೋಗಿ ಚುನಾವಣೆ ಕರ್ತವ್ಯದ ಬಗ್ಗೆ ಇತರರಿಗೆ ತರಬೇತಿ ನೀಡುವಂತಾಗಬೇಕು. ಹಾಗೆಯೇ ಈ ತರಬೇತಿಯಲ್ಲಿ ಯಾವುದೇ ಪ್ರಶ್ನೆಗಳು ಅಥವಾ ಗೊಂದಲ ಇದ್ದರೆ ಸಂಪನ್ಮೂಲ ವ್ಯಕ್ತಿಗಳಿಂದ ಬಗೆಹರಿಸಿಕೊಳ್ಳಿ ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋದಾ ವಂಟಿಗೋಡಿ ಮಾತನಾಡಿ, ಚುನಾವಣೆ ಕಾರ್ಯಕ್ಕಾಗಿ ನಿಯೋಜಿತ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಿ, ಯಾವುದೇ ಸಂದೇಹಗಳು ಬಂದರೆ ಕೇಳಿ ಪರಿಹರಿಸಿಕೊಳ್ಳಿ ಎಂದು ಅಧಿಕಾರಿಗಳಿಗೆ ತಿಳಿಸಿದರು.

ಸಂಪನ್ಮೂಲ ವ್ಯಕ್ತಿಗಳಾಗಿದ್ದ ಬೆಂಗಳೂರಿನ ಸಿಐಡಿ ಪಬ್ಲಿಕ್ ಪ್ರಾಸಿಕ್ಯೂಟರ್ ಮತ್ತು ಕಾನೂನು ಸಲಹೆಗಾರ ಮಹೇಶ್ ವಿ. ವೈದ್ಯ ಮಾತನಾಡಿ, ಚುನಾವಣಾ ಮಾದರಿ ನೀತಿ ಸಂಹಿತೆ ಹಾಗೂ ಇದಕ್ಕೆ ಸಂಬಂಧಿಸಿದ ಕಾಯ್ದೆಗಳ ಬಗ್ಗೆ ಸರಿಯಾದ ಮಹಿತಿ ತಿಳಿದುಕೊಂಡು ಅದರಂತೆ ಕ್ರಮ ವಹಿಸಬೇಕು. ಚುನಾವಣೆಗೆ ಸಂಬಂಧಿಸಿದ ಸಭೆ, ಸಮಾರಂಭಗಳಿಗೆ ಅನುಮತಿ ಕಡ್ಡಾಯವಾಗಿದ್ದು, ಈ ಬಗ್ಗೆ ಪರಿಶೀಲಿಸಬೇಕು. ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನೋಡಿಕೊಳ್ಳಿ. ಚೆಕ್‌ಪೋಸ್ಟ್‌ಗಳಲ್ಲಿ ವಾಹನಗಳ ತಪಾಸಣೆ ಸಂದರ್ಭದಲ್ಲಿ ವಿಡಿಯೋ ಚಿತ್ರೀಕರಣ ಮಾಡಿಕೊಳ್ಳಬೇಕು. ಯಾವುದೇ ರೀತಿಯ ಅನಧೀಕೃತ ಅಥವಾ ದಾಖಲೆಯಿಲ್ಲದ ಹಣ ಸಾಗಾಟ ಕಂಡುಬಂದಲ್ಲಿ ಹಣ, ವಾಹನವನ್ನು ಜಪ್ತಿ ಮಾಡಿಕೊಂಡು, ತಪ್ಪಿತಸ್ಥರ ವಿರುದ್ಧ ನಿಯಮಾನುಸಾರ ಪ್ರಕರಣ ದಾಖಲಿಸಬೇಕು ಎಂದರು.

ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ. ಕಡಿ, ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೇಮಂತ್ ಕುಮಾರ್ ಆರ್., ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಚಾರ್ಯ ಕೃಷ್ಣಮೂರ್ತಿ ದೇಸಾಯಿ ಸೇರಿದಂತೆ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಸಹಾಯಕ ಚುನಾವಣಾಧಿಕಾರಿಗಳು, ತಹಸೀಲ್ದಾರರು, ಪೊಲೀಸ್ ಅಧಿಕಾರಿಗಳು, ಚುನಾವಣೆ ಸೆಕ್ಟರ್ ಅಧಿಕಾರಿಗಳು, ವಿವಿಧ ತಂಡಗಳು, ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿಗಳು ಹಾಗೂ ಮತ್ತಿತರರಿದ್ದರು.

ಜಿಲ್ಲಾ ಚುನಾವಣಾಧಿಕಾರಿಗಳ ಭೇಟಿ:

ಮಾದರಿ ನೀತಿ ಸಂಹಿತೆ ಕುರಿತು ವಿವಿಧ ಅಧಿಕಾರಿಗಳ ತರಬೇತಿ ಕಾರ್ಯಕ್ರಮ ಸ್ಥಳಕ್ಕೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ನಲಿನ್ ಅತುಲ್ ಭೇಟಿ ನೀಡಿ, ವೀಕ್ಷಣೆ ಮಾಡಿ, ತರಬೇತಿಯ ಸದುಪಯೋಗ ಪಡೆದುಕೊಂಡು ಚುನಾವಣಾ ಕಾರ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಸಲಹೆ ನೀಡಿದರು.