ಜಿಲ್ಲೆಯಲ್ಲಿರುವ ಪ್ರತಿಯೊಂದು ವ್ಯಸನ ವಿಮುಕ್ತಿ ಕೇಂದ್ರವು ಕೆಪಿಎಂಎ ಅಡಿಯಲ್ಲಿ ನೋಂದಣಿ ಆಗಿರುವುದು ಕಡ್ಡಾಯ. ಈ ನಿಯಮವನ್ನು ಉಲ್ಲಂಘಿಸಿ ನೋಂದಣಿ ಮಾಡಿಕೊಳ್ಳದೆ ಕಾರ್ಯನಿರ್ವಹಿಸುತ್ತಿರುವ ಕೇಂದ್ರಗಳನ್ನು ಕೂಡಲೇ ಗುರುತಿಸಿ, ಅಂತಹ ಸಂಸ್ಥೆಗಳಿಗೆ ನೋಟಿಸ್ ಜಾರಿಗೊಳಿಸಬೇಕು.
ಕನ್ನಡಪ್ರಭ ವಾರ್ತೆ ಮೈಸೂರು
ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ವ್ಯಸನ ವಿಮುಕ್ತ ಕೇಂದ್ರಗಳು ಕಡ್ಡಾಯವಾಗಿ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಕಾಯ್ದೆ (ಕೆಪಿಇಎಂಎ) ಅಡಿ ನೋಂದಣಿಯಾಗಬೇಕು. ತಪ್ಪಿದಲ್ಲಿ ಕಾನೂನು ಕ್ರಮ ಜರುಗಿಸುವುದಾಗಿ ಜಿಲ್ಲಾಧಿಕಾರಿ ಜಿ. ಲಕ್ಷ್ಮಿಕಾಂತ್ ರೆಡ್ಡಿ ಹೇಳಿದರು.ಜಿಪಂ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ನಾರ್ಕೋ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿ, ಜಿಲ್ಲೆಯಾದ್ಯಂತ ನೋಂದಣಿಯಾಗದೆ ನಡೆಸುತ್ತಿರುವ ವ್ಯಸನ ವಿಮುಕ್ತಿ ಕೇಂದ್ರಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಕುರಿತು ಸ್ಪಷ್ಟ ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿರುವ ಪ್ರತಿಯೊಂದು ವ್ಯಸನ ವಿಮುಕ್ತಿ ಕೇಂದ್ರವು ಕೆಪಿಎಂಎ ಅಡಿಯಲ್ಲಿ ನೋಂದಣಿ ಆಗಿರುವುದು ಕಡ್ಡಾಯ. ಈ ನಿಯಮವನ್ನು ಉಲ್ಲಂಘಿಸಿ ನೋಂದಣಿ ಮಾಡಿಕೊಳ್ಳದೆ ಕಾರ್ಯನಿರ್ವಹಿಸುತ್ತಿರುವ ಕೇಂದ್ರಗಳನ್ನು ಕೂಡಲೇ ಗುರುತಿಸಿ, ಅಂತಹ ಸಂಸ್ಥೆಗಳಿಗೆ ನೋಟಿಸ್ ಜಾರಿಗೊಳಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.ವೈದ್ಯರ ಚೀಟಿ ಇಲ್ಲದೆ ಔಷಧಿಗಳನ್ನು ಮಾರಾಟ ಮಾಡುವ ಮೆಡಿಕಲ್ ಶಾಪ್‌ಗಳ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಬೇಕು. ಮಾದಕ ವ್ಯಸನಗಳಿಗೆ ಕಾರಣವಾಗುವ ಔಷಧಿಗಳ ಅನಧಿಕೃತ ಮಾರಾಟವನ್ನು ತಡೆಯಲು ಆರೋಗ್ಯ ಇಲಾಖೆ ಮತ್ತು ಔಷಧ ನಿಯಂತ್ರಣ ಇಲಾಖೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಬೇಕು ಎಂದು ಅವರು ಹೇಳಿದರು.
ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಮಾತನಾಡಿ, ಎಚ್.ಡಿ. ಕೋಟೆ ತಾಲೂಕು ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವುದರಿಂದ ಗಾಂಜಾ ಬೆಳೆಯುವ ಸಾಧ್ಯತೆ ಹೆಚ್ಚು. ಈ ಭಾಗದಲ್ಲಿ ಹೆಚ್ಚಿನ ಕಾರ್ಯಾಚರಣೆ ನಡೆಸಲಾಗುತ್ತಿದೆ. 26 ರಂದು ಮಾದಕ ವಸ್ತುಗಳ ನಿರ್ಮೂಲನ ದಿನಾಚರಣೆ ಆಯೋಜಿಸುತ್ತಿದೆ ಎಂದು ಅವರು ಹೇಳಿದರು.ಎಎಸ್ಪಿ ಮಲ್ಲಿಕ್ ಮಾತನಾಡಿ, ಜಿಲ್ಲೆಯ ತಾಲೂಕು ಕಾರಗೃಹಗಳಲ್ಲಿ ಡ್ರಕ್ಸ್ ಮುಕ್ತ ಮಾಡಲು ಅರಿವು ಕಾರ್ಯಕ್ರಮ ಮಾಡಿಸಲಾಗಿದೆ. ಶಾಲಾ ಕಾಲೇಜುಗಳಲ್ಲಿ ಮಾದಕ ವಸ್ತುಗಳ ಸೇವನೆಯ ಕುರಿತ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಸಭೆಯಲ್ಲಿ ಡಿಎಚ್‌ಒ ಡಾ.ಪಿ.ಸಿ. ಕುಮಾರಸ್ವಾಮಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.