ಸಾರಾಂಶ
ಕನ್ನಡಪ್ರಭ ವಾರ್ತೆ ಬೆಳಗಾವಿ
ನಗರದ ಪೊಲೀಸ್ ವ್ಯಾಪ್ತಿಯಲ್ಲಿ ಮಾದಕ ವಸ್ತು ಮಾರಾಟ, ಜೂಜಾಟ, ಮಟ್ಕಾ ಸೇರಿದಂತೆ ಅಕ್ರಮ ಚಟುವಟಿಕೆಗಳನ್ನು ಯಾವುದೇ ಮುಲಾಜಿಲ್ಲದೇ ಮಟ್ಟಹಾಕಲು ಹಾಗೂ ಸಾರ್ವಜನಿಕರ ಸಮಸ್ಯೆಗೆ ಪೊಲೀಸರು ತ್ವರಿತವಾಗಿ ಸ್ವಂದಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಇಲ್ಲವಾದಲ್ಲಿ ನಿರ್ಲಕ್ಷ್ಯವಹಿಸುವ ಅಧಿಕಾರಿ, ಸಿಬ್ಬಂದಿ ವಿರುದ್ದ ಕ್ರಮಕೈಗೊಳ್ಳುತ್ತೇನೆ ಎಂದು ನಗರ ಪೊಲೀಸ್‌ನ ನೂತನ ಆಯುಕ್ತ ಇಡಾ ಮಾರ್ಟಿನ ಖಡಕ್ ಎಚ್ಚರಿಕೆ ನೀಡಿದರು.ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರ್ವಜನಿಕರ ಸಮಸ್ಯೆಯನ್ನು ಬಗೆ ಹರಿಸಲು ವಿಳಂಬ ಮಾಡಿ ತಪ್ಪು ಮಾಡುವ ಅಧಿಕಾರಿಗಳ ವಿರುದ್ಧ ಮುಲ್ಲಾಜಿಲ್ಲದೆ ಕ್ರಮ ಜರುಗಿಸಲಾಗುವುದು. ಸಂಚಾರ ಸಮಸ್ಯೆಯ ಬಗ್ಗೆಯೂ ಸಂಚಾರ ಡಿಸಿಪಿಯೊಂದಿಗೆ ಸಭೆ ನಡೆಸಿದ್ದೇನೆ. ಆದಷ್ಟು ಬೇಗ ಸಮಸ್ಯೆಯನ್ನು ಬಗೆ ಹರಿಸುವ ಪ್ರಯತ್ನ ಮಾಡಲಾಗುವುದು ಎಂದರು.
ನಗರ ಪೊಲೀಸ್ ಇಲಾಖೆಯ ಮೇಲಾಧಿಕಾರಿಗಳು ಉತ್ತಮ ಆಡಳಿತ ನೀಡುತ್ತಿದ್ದಾರೆ. ಕೆಳಮಟ್ಟದಲ್ಲಿಯೂ ಪೊಲೀಸ್ ಆಡಳಿತದ ವ್ಯವಸ್ಥೆ ಸುಧಾರಣೆಯಾಗಬೇಕು. ಬೆಳಗಾವಿಯ ಬಗ್ಗೆ ತಿಳಿದುಕೊಂಡಿದ್ದೇನೆ. ಚಳಿಗಾಲದ ಅಧಿವೇಶನದಲ್ಲಿ ಇಲ್ಲಿ ಕೆಲಸ ಮಾಡಿದ ಅನುಭವ ಇದೆ. ಆಡಳಿತಾತ್ಮಕವಾಗಿ ನಗರ ಪೊಲೀಸ್ ಇಲಾಖೆಯಲ್ಲಿ ಸುಧಾರಣೆ ತರಲಾಗುವುದು ಎಂದು ತಿಳಿಸಿದರು.ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದರ ಜತೆಗೆ ಸಂಚಾರ ಸಮಸ್ಯೆ ಬಗೆ ಹರಿಸುವ ಪ್ರಯತ್ನ ಮಾಡುವೆ. ಇದಕ್ಕೆ ಸಾರ್ವಜನಿಕರ ಸಹಕಾರವೂ ಮುಖ್ಯವಾಗಿ ಬೇಕಾಗುತ್ತದೆ. ಅಪರಾಧ ಪ್ರಕರಣಗಳಿಗೆ ಕಡಿವಾಣ ಹಾಕಲು ಪೊಲೀಸ್ ಇಲಾಖೆ ಚುರುಕಾಗಿ ಕೆಲಸ ಮಾಡಲು ಪ್ರಯತ್ನಿಸುವೆ ಎಂದು ತಿಳಿಸಿದರು.ನಾನು ನಗರ ಪೊಲೀಸ್ ಆಯುಕ್ತರಾಗಿ ಅಧಿಕಾರ ಸ್ವೀಕಾರ ಮಾಡಿದ್ದೇನೆ. ನಮ್ಮ ಸಿಬ್ಬಂದಿಯೊಂದಿಗೆ ಸಭೆ ನಡೆಸಿ ಮಾರ್ಗದರ್ಶನ ಪಡೆದಿದ್ದೇನೆ. ಬೆಳಗಾವಿ ನಗರದಲ್ಲಿ ಡಿಸಿಪಿಗಳಿಬ್ವರೂ ಉತ್ತಮ ಕೆಲಸ ಮಾಡಿದ್ದಾರೆ ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ. ಕೇವಲ ನಮ್ಮ ಕಡೆಯಿಂದ ಕಾನೂನು ಸುವ್ಯವಸ್ಥೆ ಕಾಪಾಡಲು ಎಲ್ಲ ನಾಗರಿಕರ ಸಹಕಾರ ಪೊಲೀಸರಿಗೆ ಮಾಡಿದರೆ ನಗರವು ಶಾಂತವಾಗಿ ಇಡಲು ಸಾಧ್ಯ ಎಂದರು.
ಈ ಸಂದರ್ಭದಲ್ಲಿ ಡಿಸಿಪಿ ರೋಹನ್ , ಎಸಿಪಿ ಸದಾಶಿವ ಕಟ್ಟಿಮನಿ ಇದ್ದರು.