ಸಾರಾಂಶ
ಕನ್ನಡಪ್ರಭ ವಾರ್ತೆ ಮಂಗಳೂರು
ಅನ್ನಭಾಗ್ಯ ಯೋಜನೆಯಡಿ ದೊರಕುವ ಅಕ್ಕಿಯನ್ನು ಮಾರಾಟ ಮಾಡುವ ಫಲಾನುಭವಿಗಳನ್ನು ಗುರುತಿಸಿ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ಸೂಚಿಸಿದ್ದಾರೆ.ನಗರದ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಫಲಾನುಭವಿಗಳೇ ಪಡಿತರ ಅಕ್ಕಿ ಮಾರಾಟ ಮಾಡುತ್ತಿರುವ ಬಗ್ಗೆ ದೂರುಗಳು ಬಂದಿವೆ. ಈ ನಿಟ್ಟಿನಲ್ಲಿ ಆಗಾಗ ಪರಿಶೀಲನೆ ನಡೆಸಬೇಕು. ನ್ಯಾಯಬೆಲೆ ಅಂಗಡಿಯಲ್ಲಿ ಅಕ್ಕಿಯ ಮೂಟೆಗಳನ್ನು ಸ್ವಚ್ಛ ಸ್ಥಳಗಳಲ್ಲಿ ಇರಿಸಬೇಕು. ಈ ಬಗ್ಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸುವಂತೆ ಅವರು ತಿಳಿಸಿದರು.ಗೃಹಲಕ್ಷ್ಮಿ ಯೋಜನೆಯಡಿ ತಾಲೂಕುವಾರು ನೋಂದಣಿ, ಫಲಾನುಭವಿಗಳ ಪಟ್ಟಿ ಹಾಗೂ ಮಂಜೂರಾದ ಮೊತ್ತದ ವಿವರವನ್ನು ಗ್ರಾಮ ಪಂಚಾಯ್ತಿಗಳಲ್ಲಿ ಮುಂದಿನ ಸಭೆಯಲ್ಲಿ ನೀಡಬೇಕು ಎಂದು ಮುಂಡೋಡಿ ಸೂಚಿಸಿದರು.
ಕಾರ್ಕಳ ಬಸ್ಸಿಗೆ ಮತ್ತೆ ಪರ್ಮಿಟ್ ಪ್ರಸ್ತಾವನೆ:ಮಂಗಳೂರು- ಮೂಡುಬಿದಿರೆ- ಕಾರ್ಕಳ ಕೆ.ಎಸ್.ಆರ್.ಟಿ.ಸಿ. ತಾತ್ಕಾಲಿಕ ಪರ್ಮಿಟ್ ಮುಗಿಯುತ್ತಿದ್ದು, ಖಾಸಗಿಯವರು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ ಎಂದು ಮೂಡುಬಿದಿರೆ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದರು. ಪ್ರಾದೇಶಿಕ ಸಾರಿಗೆ ಇಲಾಖೆಗೆ ಈಗಾಗಲೇ ತಾತ್ಕಾಲಿಕ ಪರ್ಮಿಟ್ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ ಎಂದು ಅಧಿಕಾರಿಗಳು ಸಭೆಗೆ ತಿಳಿಸಿದರು.ಯುವನಿಧಿ ಯೋಜನೆಗೆ ಜಿಲ್ಲೆಯಲ್ಲಿ ಒಟ್ಟು 6185 ಅಭ್ಯರ್ಥಿಗಳ ನೋಂದಣಿಯಾಗಿದ್ದು, 5,283 ಅಭ್ಯರ್ಥಿಗಳಿಗೆ ಮೊತ್ತ ಪಾವತಿ ಆಗಿರುತ್ತದೆ ಎಂದು ಸಭೆಗೆ ಮಾಹಿತಿ ನೀಡಲಾಯಿತು.
ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ ಕಾರ್ಬಾರಿ, ಜಿಲ್ಲಾ ಪಂಚಾಯ್ತಿ ಮುಖ್ಯ ಯೋಜನಾಧಿಕಾರಿ ಸಂಧ್ಯಾ ಕೆ.ಎಸ್., ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಜೋಕಿಂ ಡಿಸೋಜ, ಸುರೇಖಾ ಚಂದ್ರಹಾಸ್, ಶೇಖರ ಕುಕ್ಕೇಡಿ, ಸದಸ್ಯರಾದ ಅರುಣ್ ಕುಮಾರ್ ಶೆಟ್ಟಿ, ಆಲ್ವಿನ್ ಕ್ಲೆಮೆಂಟ್ ಕುಟಿನ್ಹ, ಜಯಂತಿ ಬಿ.ಎ., ಶಾಹುಲ್ ಹಮೀದ್, ಉಮಾನಾಥ ಶೆಟ್ಟಿ, ರಫೀಕ್ ಮತ್ತಿತರರು ಇದ್ದರು.