ಕನ್ನಡಪ್ರಭ ವಾರ್ತೆ ಮದ್ದೂರು

ಗ್ರಾಮಗಳು ಅಭಿವೃದ್ಧಿಯಾದರೆ ದೇಶದ ಅಭಿವೃದ್ಧಿ ಸಾಧ್ಯ ಎಂಬುದನ್ನು ಅರಿತು ಹಳ್ಳಿ ರಸ್ತೆಗಳನ್ನು ಸಮಗ್ರ ಅಭಿವೃದ್ಧಿ ಪಡಿಸಲು ಕ್ರಮ ವಹಿಸಿರುವುದಾಗಿ ಶಾಸಕ ಕೆ.ಎಂ.ಉದಯ್ ತಿಳಿಸಿದರು.

ತಾಲೂಕಿನ ಹೆಮ್ಮನಹಳ್ಳಿ, ಯರಗನಹಳ್ಳಿ, ತೊರೆಶೆಟ್ಟಿಹಳ್ಳಿ, ಹನುಮಂತಪುರ ಹಾಗೂ ಆಲಂ ಶೆಟ್ಟಿಹಳ್ಳಿ ಗ್ರಾಮಗಳಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿ, ಕ್ಷೇತ್ರದ ರಸ್ತೆಗಳು ಮಾದರಿಯಾಗಿರಬೇಕು ಎನ್ನುವ ಬಯಕೆಯೊಂದಿಗೆ ಸರ್ಕಾರದಿಂದ ಕೋಟ್ಯಂತರ ರು. ಅನುದಾನ ತಂದು ಕಾಮಗಾರಿ ಕೈಗೊಂಡಿರುವುದಾಗಿ ಹೇಳಿದರು.

ರಸ್ತೆಗಳು ಉತ್ತಮ ಗುಣಮಟ್ಟದಿಂದ ಕೂಡಿದ್ದರೆ ಸ್ಥಳಿಯ ಜನರು, ವಾಹನ ಸವಾರರಿಗೆ ಹಲವು ರೀತಿಯಲ್ಲಿ ಅನುಕೂಲವಾಗುತ್ತದೆ. ಜತೆಗೆ ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತದೆ. ಇದನ್ನರಿತು ಹಳ್ಳಿಗಳಿಗೆ ಮೂಲ ಸೌಕರ್ಯ ಕಲ್ಪಿಸಬೇಕು ಎಂಬ ಉದ್ದೇಶದಿಂದ ಪಟ್ಟಿ ಮಾಡಿಕೊಂಡು ಆದ್ಯತೆ ಮೇರೆಗೆ ಕೆಲಸ ಮಾಡಲಾಗುತ್ತಿದೆ ಎಂದರು.

ತಾಲೂಕಿನಲ್ಲಿ ರಸ್ತೆಗಳು, ಚರಂಡಿಗಳು, ನೀರಾವರಿ, ಶಿಕ್ಷಣ, ಕುಡಿಯುವ ನೀರು ಸೇರಿದಂತೆ ಪ್ರತಿಯೊಂದು ಕ್ಷೇತ್ರಕ್ಕೂ ವಿಶೇಷ ಗಮನ ನೀಡಲಾಗಿದೆ. ಈಗಾಗಲೇ ಸುಮಾರು 2 ಸಾವಿರ ಕೋಟಿ ರು.ಗೂ ಅಧಿಕ ಅನುದಾನ ತಂದು ಕ್ಷೇತ್ರದಲ್ಲಿ ಅಭಿವೃದ್ಧಿಗೆ ಕೆಲಸ ಮಾಡಿದ್ದೇನೆ ಎಂದರು.


ಕಾಂಗ್ರೆಸ್ ಪಕ್ಷವು ಚುನಾವಣಾ ಪೂರ್ವದಲ್ಲಿ ನೀಡಿದ್ದ ಪಂಚ ಗ್ಯಾರಂಟಿಗಳನ್ನು ಸಮರ್ಪಕವಾಗಿ ಜಾರಿಗೊಳಿಸುವ ಜತೆಗೆ ರಾಜ್ಯ ಅಭಿವೃದ್ಧಿಯತ್ತ ದಾಪುಗಾಲು ಹಾಕುತ್ತಿರುವುದನ್ನು ಗಮನಿಸಿ ಸರ್ಕಾರದ ಬಗ್ಗೆ ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ ಎಂದರು.

ಈ ವೇಳೆ ಮನ್ಮುಲ್ ಮಾಜಿ ಅಧ್ಯಕ್ಷ ಕದಲೂರು ರಾಮಕೃಷ್ಣ, ತಾಲೂಕು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ತೊರೆಶೆಟ್ಟಿಹಳ್ಳಿ ನಾಗೇಗೌಡ, ಹೆಮ್ಮನಹಳ್ಳಿ ಜಯಶಂಕರ್, ಯರಗನಹಳ್ಳಿ ಮಹಾಲಿಂಗು, ನಟರಾಜ್ ಸೇರಿದಂತೆ ಹಲವರು ಹಾಜರಿದ್ದರು.ನಾಳೆ ನಾಡಪ್ರಭು ಕೆಂಪೇಗೌಡರ ಜಯಂತ್ಯುತ್ಸವಮಳವಳ್ಳಿ: ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ತಾಕೂಕು ಆಡಳಿತದಿಂದ ಜೂನ್ 27ರಂದು ನಾಡಪ್ರಭು ಕೆಂಪೇಗೌಡರ ಜಯಂತ್ಯುತ್ಸವ ಆಯೋಜಿಸಲಾಗಿದೆ. ಶನಿವಾರ ಬೆಳಗ್ಗೆ 10ಗಂಟೆಗೆ ತಾಪಂ ಆವರಣದಿಂದ ಡಾ.ಬಿ.ಆರ್.ಅಂಬೇಡ್ಕರ್ ಭವನದವರೆಗೆ ವಿವಿಧ ಜಾನಪದ ಕಲಾತಂಡಗಳ ಮೆರವಣಿಗೆ ನಡೆಯಲಿದೆ. ಬೆಳಗ್ಗೆ 11 ಗಂಟೆಗೆ ನಡೆಯುವ ವೇದಿಕೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಪಿ.ಎಂ.ನರೇಂದ್ರಸ್ವಾಮಿ ವಹಿಸಿಕೊಳ್ಳಲಿದ್ದಾರೆ.

ಅತಿಥಿಗಳಾಗಿ ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ವಿ.ಪಿ.ನಾಗೇಶ್, ಡಿವೈಎಸ್ಪಿ ಎಸ್.ಬಿ.ಯಶವಂತ ಕುಮಾರ್, ತಹಸೀಲ್ದಾರ್ ಎಸ್.ವಿ.ಲೋಕೇಶ್, ತಾಪಂ ಇಒ ಎಚ್.ಜಿ.ಶ್ರೀನಿವಾಸ್, ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಇ.ಉಮಾ, ಪುರಸಭೆ ಮುಖ್ಯಾಧಿಕಾರಿ ಎಂ.ಸಿ.ನಾಗರತ್ನ ಸೇರಿದಂತೆ ಎಲ್ಲ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.