ನಕಲಿ ವೈದ್ಯರ ಮೇಲೆ ಕ್ರಮವಹಿಸಿ: ಡಿಸಿ ದಿವ್ಯಪ್ರಭು

| Published : Jul 17 2024, 12:46 AM IST

ನಕಲಿ ವೈದ್ಯರ ಮೇಲೆ ಕ್ರಮವಹಿಸಿ: ಡಿಸಿ ದಿವ್ಯಪ್ರಭು
Share this Article
  • FB
  • TW
  • Linkdin
  • Email

ಸಾರಾಂಶ

ಜ್ವರ ಬಂದಾಗ ಆಸ್ಪತ್ರೆಗೆ ಬಂದು ಪರೀಕ್ಷೆ ಮಾಡಿಸಿಕೊಳ್ಳಬೇಕು. ವೈದ್ಯರ ಸಲಹೆ ಮೇರೆಗೆ ಅಗತ್ಯವಿದ್ದರೆ ರಕ್ತ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಜನರಿಗೆ ಜಿಲ್ಲಾಧಿಕಾರಿ ದಿವ್ಯಪ್ರಭು ಹೇಳಿದ್ದಾರೆ.

ಧಾರವಾಡ:

ಜಿಲ್ಲೆಯ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ನಕಲಿ ವೈದ್ಯರಿದ್ದಾರೆ ಎಂಬ ದೂರುಗಳಿವೆ. ಕೆಲವು ಹೋಮಿಯೋಪತಿ ವೈದ್ಯರು ಅಲೋಪತಿ ಔಷಧಿ ನೀಡುತ್ತಿರುವ ಬಗ್ಗೆ ತಿಳಿದು ಬಂದಿದ್ದು, ಈ ಕುರಿತು ಜಿಲ್ಲಾ ಆರೋಗ್ಯ ಇಲಾಖೆ ತುರ್ತುಕ್ರಮ ವಹಿಸದಿದ್ದರೆ ಕ್ರಮ ಜರುಗಿಸುವುದಾಗಿ ಜಿಲ್ಲಾಧಿಕಾರಿ ದಿವ್ಯಪ್ರಭು ಎಚ್ಚರಿಕೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಡೆಂಘೀ ಕುರಿತ ಟಾಸ್ಕ್‌ ಪೋರ್ಸ್‌ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಡೆಂಘೀ ಹುಟ್ಟುವ ಸ್ಥಳ ಗುರುತಿಸಿ, ಆ ಸ್ಥಳಗಳಲ್ಲಿ ಲಾರ್ವಾನಾಶ, ಜಾಗೃತಿ ಕಾರ್ಯಕ್ರಮ ಆಯೋಜಿಸಬೇಕು. ಕಟ್ಟಡ ನಿರ್ಮಾಣ ಕಾಮಗಾರಿ ಸ್ಥಳಗಳಲ್ಲಿ ನೀರು ಸಂಗ್ರಹ ಆಗದಂತೆ ಮುನ್ನೆಚ್ಚರಿಕೆವಹಿಸಿ, ಸ್ವಚ್ಚತೆಗೆ ಆದ್ಯತೆ ನೀಡಬೇಕು. ಜಿಲ್ಲೆಯ ಎಲ್ಲ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಪ್ರತಿ ಶನಿವಾರ ಸ್ವಚ್ಛತಾ ಅಭಿಯಾನ ಕೈಗೊಳ್ಳಬೇಕು. ಮಕ್ಕಳಲ್ಲಿ ಡೆಂಘೀ ಜಾಗೃತಿ ಮೂಡಿಸಬೇಕು ಮತ್ತು ಈ ಕಾರ್ಯಕ್ರಮ ಶಾಲೆಯ ಎಸ್‌ಡಿಎಂಸಿ ಸದಸ್ಯರನ್ನು ಆಹ್ವಾನಿಸಬೇಕೆಂದು ಅಧಿಕಾರಿಗಳಿಗೆ ನಿರ್ದೇಶಿಸಿದರು.

ಜ್ವರ ಬಂದಾಗ ಆಸ್ಪತ್ರೆಗೆ ಬಂದು ಪರೀಕ್ಷೆ ಮಾಡಿಸಿಕೊಳ್ಳಬೇಕು. ವೈದ್ಯರ ಸಲಹೆ ಮೇರೆಗೆ ಅಗತ್ಯವಿದ್ದರೆ ರಕ್ತ ಪರೀಕ್ಷೆ ಮಾಡಿಸಿಕೊಳ್ಳಬೇಕು. ನೋಂದಾಯಿತ ಖಾಸಗಿ ಆಸ್ಪತ್ರೆಗಳು ಪರೀಕ್ಷೆಗೆ ಒಳಪಡುವ ರೋಗಿಗಳ ಬಗ್ಗೆ ಸರಿಯಾದ ಮಾಹಿತಿ ನೀಡಬೇಕು ಎಂದರು.

ಪ್ರತಿ ಆಸ್ಪತ್ರೆ ಆವರಣದಲ್ಲಿ ಆಸ್ಪತ್ರೆಗೆ ಬರುವವರಿಗೆ ಎದ್ದು ಕಾಣುವಂತೆ ಸರ್ಕಾರದಿಂದ ಡೆಂಘೀ ಪರೀಕ್ಷೆಗೆ ಮಾಡಿರುವ ದರದ ಪಟ್ಟಿ ಪ್ರಕಟಿಸಬೇಕು. ಈ ಕುರಿತು ಆರೋಗ್ಯ ಇಲಾಖೆ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ, ಖಚಿತಪಡಿಸಿಕೊಳ್ಳಬೇಕು. ಹೆಚ್ಚು ದರ ವಸೂಲಿ ಕಂಡು ಬಂದರೆ ಅಂತಹ ಆಸ್ಪತ್ರೆ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಜಿಲ್ಲಾಧಿಕಾರಿ ಸೂಚಿಸಿದರು/

ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಶಶಿ ಪಾಟೀಲ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಸಂಗಪ್ಪ ಗಾಬಿ, ಕಿಮ್ಸ್‌ ಆಸ್ಪತ್ರೆಯ ಡಾ. ಲಕ್ಷ್ಮಿಕಾಂತ ಲೋಕರೆ ಇದ್ದರು.