ಮೈಸೂರು ಅರಮನೆ ಆವರಣದಲ್ಲಿ ನಡೆದ ನಂದಿಧ್ವಜ ಪೂಜೆ ಸಂದರ್ಭದಲ್ಲಿ ಸಚಿವರಾದ ಶಿವರಾಜ್ ತಂಗಡಗಿ, ನರೇಂದ್ರ ಸ್ವಾಮಿ ಹಾಗೂ ಕೆ.ಎಸ್. ಬಸವಂತಪ್ಪ ಅವರಿಗೆ ಪೂಜಾ ಸ್ಥಳ ಪ್ರವೇಶಿಸಲು ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೊಲೀಸ್ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಭೀಮ್ ಆರ್ಮಿ ಭಾರತ್ ಏಕತಾ ಮಿಷನ್ ಜಿಲ್ಲಾ ಘಟಕದ ಪದಾಧಿಕಾರಿಗಳು ಶನಿವಾರ ಪತ್ರ ಚಳವಳಿ ಮೂಲಕ ಖಂಡಿಸಿದ್ದಾರೆ.
- ಭೀಮ್ ಆರ್ಮಿ ಭಾರತ್ ಏಕತಾ ಮಿಷನ್ ಒತ್ತಾಯ । ಪತ್ರ ಚಳವಳಿ
- - -ದಾವಣಗೆರೆ: ಮೈಸೂರು ಅರಮನೆ ಆವರಣದಲ್ಲಿ ನಡೆದ ನಂದಿಧ್ವಜ ಪೂಜೆ ಸಂದರ್ಭದಲ್ಲಿ ಸಚಿವರಾದ ಶಿವರಾಜ್ ತಂಗಡಗಿ, ನರೇಂದ್ರ ಸ್ವಾಮಿ ಹಾಗೂ ಕೆ.ಎಸ್. ಬಸವಂತಪ್ಪ ಅವರಿಗೆ ಪೂಜಾ ಸ್ಥಳ ಪ್ರವೇಶಿಸಲು ಅಡ್ಡಿಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೊಲೀಸ್ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಭೀಮ್ ಆರ್ಮಿ ಭಾರತ್ ಏಕತಾ ಮಿಷನ್ ಜಿಲ್ಲಾ ಘಟಕದ ಪದಾಧಿಕಾರಿಗಳು ಶನಿವಾರ ಪತ್ರ ಚಳವಳಿ ಮೂಲಕ ಖಂಡಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಜಿಲ್ಲಾ ಘಟಕದ ಅಧ್ಯಕ್ಷ ಕುಬೇರ್ ಆರ್. ತ್ಯಾಗದಕಟ್ಟೆ ನೇತೃತ್ವದಲ್ಲಿ ನಗರದ ಮುಖ್ಯ ಅಂಚೆ ಕಚೇರಿ ಪತ್ರ ಚಳವಳಿ ಮೂಲಕ ಪದಾಧಿಕಾರಿಗಳು, ಮೈಸೂರಿನಲ್ಲಿ ನಡೆದ ಘಟನೆಯನ್ನು ಖಂಡಿಸಿ ರಾಜ್ಯಪಾಲರಿಗೆ ಪತ್ರಗಳನ್ನು ರವಾನಿಸಿದರು.ನಂದಿಧ್ವಜ ಪೂಜೆ ಸಂದರ್ಭದಲ್ಲಿ ದಲಿತ ಸಮುದಾಯಕ್ಕೆ ಸೇರಿದ ಸಚಿವರನ್ನು ಜಾತಿ ಆಧಾರದಲ್ಲಿ ತಡೆದಿರುವುದು ಗಂಭೀರ ವಿಚಾರವಾಗಿದೆ. ಜನಪ್ರತಿನಿಧಿಗಳಿಗೇ ಇಂತಹ ಪರಿಸ್ಥಿತಿ ಎದುರಾದರೆ, ಸಾಮಾನ್ಯ ದಲಿತರ ಸ್ಥಿತಿ ಏನಾಗಬಹುದು ಎಂಬ ಪ್ರಶ್ನೆ ಮೂಡುತ್ತದೆ. ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ಘಟನೆಯ ಹಿಂದಿರುವ ಸತ್ಯಾಂಶವನ್ನು ಸಮಗ್ರವಾಗಿ ಪರಿಶೀಲಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಮನವಿ ಮಾಡಿದರು.
ದಲಿತ ಸಚಿವರನ್ನು ಜಾತಿ ಆಧಾರದಲ್ಲಿ ತಡೆದಿರುವುದು ತನಿಖೆಯಿಂದ ಸಾಬೀತಾದರೆ, ಸಂಬಂಧಪಟ್ಟ ಪೊಲೀಸ್ ಅಧಿಕಾರಿಯನ್ನು ಅಮಾನತುಗೊಳಿಸಬೇಕು. ಅಲ್ಲದೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ಎಸ್ಸಿ, ಎಸ್ಟಿ) ದೌರ್ಜನ್ಯ ತಡೆ ಕಾಯ್ದೆಯಡಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಸೂಚಿಸಬೇಕು ಎಂದು ಆಗ್ರಹಿಸಿದರು.ಈ ಘಟನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅವರು ದಲಿತ ಸಮುದಾಯದ ಕ್ಷಮೆ ಕೋರಬೇಕು. ರಾಜ್ಯದಲ್ಲಿ ಸಂವಿಧಾನಬದ್ಧ ಹಕ್ಕುಗಳು ಹಾಗೂ ಸಾಮಾಜಿಕ ನ್ಯಾಯದ ತತ್ವಗಳನ್ನು ಎತ್ತಿಹಿಡಿಯಲು ಸರ್ಕಾರ ಬದ್ಧವಾಗಿರಬೇಕು. ಜಾತಿ ತಾರತಮ್ಯಕ್ಕೆ ಅವಕಾಶ ನೀಡದೆ, ತಪ್ಪಿತಸ್ಥರ ವಿರುದ್ಧ ನಿಷ್ಪಕ್ಷಪಾತ ತನಿಖೆ ನಡೆಸಿ ನ್ಯಾಯ ಒದಗಿಸಬೇಕು ಎಂದು ಸರ್ಕಾರಕ್ಕೆ ಸೂಚಿಸಬೇಕೆಂದು ಪತ್ರಗಳಲ್ಲಿ ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಭೀಮ್ ಆರ್ಮಿ ಭಾರತ್ ಏಕತಾ ಮಿಷನ್ ಜಿಲ್ಲಾ ಘಟಕದ ಉಪಾಧ್ಯಕ್ಷ ಉಜ್ಜಿನಪ್ಪ, ಗೋವಿಂದಪ್ಪ, ಪ್ರಧಾನ ಕಾರ್ಯದರ್ಶಿ ಓ.ಆರ್.ಸಂತೋಷ್, ಸಂಘಟನಾ ಕಾರ್ಯದರ್ಶಿ ಮಧು ಕುಮಾರ್, ಹೊನ್ನಾಳಿ ತಾಲೂಕು ಅಧ್ಯಕ್ಷ ಎಚ್.ಕೆ.ಹಾಲೇಶಪ್ಪ, ಉಪಾಧ್ಯಕ್ಷ ಹಳದಪ್ಪ ಇತರರು ಇದ್ದರು.- - -
-24ಕೆಡಿವಿಜಿ34:ದಲಿತ ಸಚಿವರನ್ನು ತಡೆದ ಪ್ರಕರಣ ಖಂಡಿಸಿ ಭೀಮ್ ಆರ್ಮಿ ಭಾರತ್ ಏಕತಾ ಮಿಷನ್ ದಾವಣಗೆರೆ ಜಿಲ್ಲಾ ಘಟಕದ ಪದಾಧಿಕಾರಿಗಳು ಪತ್ರ ಚಳವಳಿ ನಡೆಸಿದರು.