ಮುಂದಿನ ಒಂದು ತಿಂಗಳ ಅವಧಿಯೊಳಗೆ ಅಗತ್ಯವಿರುವ ಸಿಬ್ಬಂದಿ ಸೇವೆಗೆ ಅಗತ್ಯ ಕ್ರಮ ವಹಿಸಲಾಗುವುದು
ಹೊಸಪೇಟೆ: ಸ್ಥಳೀಯ ಆಡಳಿತ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳು ಖಾಲಿ ಇದ್ದು, ಸಾರ್ವಜನಿಕರಿಗೆ ಸಕಾಲದಲ್ಲಿ ಉತ್ತಮ ಸೇವೆ ನೀಡಲಾಗುತ್ತಿಲ್ಲ. ಈ ನಿಟ್ಟಿನಲ್ಲಿ ಮುಂದಿನ ಒಂದು ತಿಂಗಳ ಅವಧಿಯೊಳಗೆ ಅಗತ್ಯವಿರುವ ಸಿಬ್ಬಂದಿ ಸೇವೆಗೆ ಅಗತ್ಯ ಕ್ರಮ ವಹಿಸಲಾಗುವುದು ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಭರವಸೆ ನೀಡಿದರು.
ನಗರದ ಜಿಲ್ಲಾಡಳಿತ ಕಚೇರಿಯ ಜಿಪಂ ಸಭಾಂಗಣದಲ್ಲಿ ಬುಧವಾರ ನಡೆದ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ವಿಜಯನಗರ ನಗರಸಭೆಯಲ್ಲಿ ವಿವಿಧ ಹುದ್ದೆ ಮತ್ತು ಪೌರಕಾರ್ಮಿಕರು ಸೇರಿ ಒಟ್ಟು 540 ಹುದ್ದೆಗಳಿವೆ. ಈ ಪೈಕಿ 260 ಜನ ಮಾತ್ರ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದರಿಂದ ಸ್ಥಳೀಯ ಸಂಸ್ಥೆಗಳ ಮೂಲಕ ಸಾರ್ವಜನಿಕರಿಗೆ ಸಮರ್ಪಕವಾಗಿ ಯೋಜನೆಗಳು ಅನುಷ್ಠಾಗೊಳಿಸುವಲ್ಲಿ ವಿಳಂವಾಗುತ್ತಿವೆ. ಇದನ್ನು ಗಂಭೀರವಾಗಿ ಪರಿಗಣಿಸಿ ಅಗತ್ಯವಿರುವ ಸಹಾಯಕ ಅಭಿಯಂತರ, ಆರೋಗ್ಯ ನಿರೀಕ್ಷಕ ಸೇರಿ ಹಲವು ಖಾಲಿ ಹುದ್ದೆಗಳಿಗೆ ತಕ್ಕಂತೆ ಸಿಬ್ಬಂದಿ ನಿಯೋಜಿಸಿ ಸಿಬ್ಬಂದಿ ಕೊರತೆ ನೀಗಿಸಬೇಕು ಎಂದು ನಗರಸಭೆ ಪೌರಾಯುಕ್ತ ಶಿವಕುಮಾರ್ ಬೇಡಿಕೆ ಇಟ್ಟರು.
ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಸಕರಾತ್ಮಕವಾಗಿ ಸ್ಪಂದಿಸಿ, ಮುಂದಿನ ಒಂದು ತಿಂಗಳ ಒಳಗಾಗಿ ಸಿಬ್ಬಂದಿ ಕೊರತೆ ನೀಗಿಸಲು ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.15ನೇ ಹಣಕಾಸು ಆಯೋಗದಡಿ ಜಿಲ್ಲೆಯ 6 ತಾಲೂಕುಗಳ ಪಪಂ, ಪುರಸಭೆ ಮತ್ತು ನಗರಸಭೆಗಳಲ್ಲಿ 1520 ಕಾಮಗಾರಿ ಕೈಗೆತ್ತಿಕೊಂಡಿದ್ದು, ಈ ಪೈಕಿ 1386 ಕಾಮಗಾರಿ ಪೂರ್ಣಗೊಂಡಿವೆ. 126 ಕಾಮಗಾರಿ ಪ್ರಗತಿ ಹಂತದಲ್ಲಿದ್ದು, ಇನ್ನುಳಿದ 8 ಟೆಂಡರ್ ಪ್ರಕ್ರಿಯೆಯಲ್ಲಿವೆ ಎಂದು ನಗರಸಭೆ ಯೋಜನಾ ನಿರ್ದೇಶಕ ಮನೋಹರ್ ಸಭೆಗೆ ಮಾಹಿತಿ ನೀಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಇದೇ ಹಣಕಾಸು ವರ್ಷದಲ್ಲಿ ಇರುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಕಾಮಗಾರಿ ಪೂರ್ಣಗೊಳಿಸಬೇಕು. ಜಿಲ್ಲೆಯ ಆರು ಸ್ಥಳೀಯ ಸಂಸ್ಥೆಗಳಲ್ಲಿ ಶೇ.80ರಿಂದ 90 ರಷ್ಟು ಪ್ರಗತಿ ಸಾಧಿಸಿದ್ದು, ಮುಂದಿನ ದಿನಗಳಲ್ಲಿ ಅನುದಾನ ಬಳಸಿಕೊಂಡು ಶೇ.100ರಷ್ಟು ಪ್ರಗತಿ ಸಾಧಿಸಬೇಕು ಎಂದು ಸೂಚನೆ ನೀಡಿದ ಅವರು, ಅನುದಾನದ ಕೊರತೆಯಿಂದ ಹಲವು ಕಾಮಗಾರಿಗಳು ನನೆಗುದಿಗೆ ಬಿದ್ದಿರುವ ಬಗ್ಗೆ ಮಾಹಿತಿ ಇದೆ. ಕಾಮಗಾರಿ ಪೂರ್ಣಗೊಳಿಸಲು ಏನಾದರೂ ಸಮಸ್ಯೆಗಳಿದ್ದಲ್ಲಿ ತ್ವರಿತವಾಗಿ ಪರಿಹಾರ ಕಂಡುಕೊಳ್ಳಬೇಕು. ಒಂದು ವೇಳೆ ಅದಕ್ಕೆ ಬೇಕಾದ ಅನುದಾನ ಬೇಕಾದಲ್ಲಿ ಪ್ರಸ್ತಾವನೆ ಸಲ್ಲಿಸಿ ಅನುಮೋದನೆ ಪಡೆದುಕೊಳ್ಳಬಹುದು. ಈ ಬಾರಿಯ ಆಯವ್ಯಯದಲ್ಲಿ ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿಗೆ ಬೇಕಾದ ಅನುದಾನ ದೊರೆಯುವ ನಿರೀಕ್ಷೆ ಇದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.ಕುಡಿಯುವ ನೀರಿಗೆ ಸಮಸ್ಯೆಯಾಗದಿರಲಿ:
ಇನ್ನೇನು ಬೇಸಿಗೆ ಸಮೀಪಿಸುತ್ತಿದೆ. ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಯಾವುದೇ ಕಾರಣಕ್ಕೂ ಅಗತ್ಯ ಮೂಲಭೂತ ಸೌಕರ್ಯಗಳಿಗೆ ಕೊರತೆಯಾಗಬಾರದು. ಅದರಲ್ಲೂ ವಿಶೇಷವಾಗಿ ಸ್ಥಳೀಯ ಆಡಳಿತ ಸಂಸ್ಥೆಗಳು ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ನಿರ್ದೇಶಿಸಿದರು.ಈ ವೇಳೆ ಶಾಸಕರಾದ ಎಚ್.ಆರ್. ಗವಿಯಪ್ಪ, ಡಾ.ಎನ್.ಟಿ. ಶ್ರೀನಿವಾಸ್, ಲತಾ ಮಲ್ಲಿಕಾರ್ಜುನ, ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ಎನ್.ಎಂ. ಇಮಾಮ್ ನಿಯಾಜಿ ಇದ್ದರು.