ಸಾರಾಂಶ
ಹಾವೇರಿ:ಸರ್ಕಾರ ಬಡವರಿಗಾಗಿ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಮತ್ತು ಮೇಲ್ವಿಚಾರಣೆ ಮಾಡಲು ಜಿಲ್ಲಾ ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿ ರಚಿಸಲಾಗಿದೆ ಎಂದು ಶಾಸಕರು ಹಾಗೂ ವಿಧಾನಸಭೆ ಉಪಾಧ್ಯಕ್ಷ ರುದ್ರಪ್ಪ ಲಮಾಣಿ ಹೇಳಿದರು. ಜಿಲ್ಲಾ ಪಂಚಾಯಿತಿ ಸಭಾಭಾವನದಲ್ಲಿ ಸೋಮವಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿ ಉದ್ಘಾಟಿಸಿ ಮಾತನಾಡಿದ ಅವರು, ಈಗಾಗಲೇ ರಾಜ್ಯ ಮಟ್ಟದಲ್ಲಿ ಸಮಿತಿ ರಚಿಸಲಾಗಿದೆ. ಹಾಗೆಯೇ ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಕೂಡ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಚಿಸುವ ಮೂಲಕ ಬಡವರ ಕಲ್ಯಾಣ ಕೈಕೊಳ್ಳಲಾಗುವುದು ಎಂದರು. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ರಾಜ್ಯ ಉಪಾಧ್ಯಕ್ಷ ಎಸ್.ಆರ್. ಪಾಟೀಲ್ ಮಾತನಾಡಿ, ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಜಾರಿಯಿಂದ ಹೊಸ ಕ್ರಾಂತಿ ಪ್ರಾರಂಭವಾಗಿದೆ. ಬೇರೆ ಬೇರೆ ರಾಜ್ಯದವರು ಕೂಡ ಇಂದು ನಮ್ಮ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳನ್ನು ಅಳವಡಿಸಿಕೊಳ್ಳುತ್ತಿವೆ. ಇದು ರಾಜ್ಯದಲ್ಲಿ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳ ಉಪಯುಕ್ತತೆ ಮತ್ತು ಮಹತ್ವವನ್ನು ತಿಳಿಸುತ್ತಿದೆ. ಈಗಾಗಲೇ ಸರ್ಕಾರ ಜಿಲ್ಲೆಗೆ ೧೩೦೦ ಕೋಟಿ ರು. ಅನುದಾನವನ್ನು ವಿವಿಧ ಗ್ಯಾರಂಟಿ ಯೋಜನೆಗಳಿಗೆ ಹಂಚಿಕೆಮಾಡಿದೆ. ಇದು ಜಿಲ್ಲೆಯ ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಮೇಲೇತ್ತಲು ಸಹಕಾರಿಯಾಗಿವೆ ಎಂದರು. ಹಾನಗಲ್ ಶಾಸಕ ಶ್ರೀನಿವಾಸ ಮಾನೆ ಮಾತನಾಡಿ, ಅನೇಕ ಟೀಕೆ ಟಿಪ್ಪಣಿಗಳ ನಡುವೆ ರಾಜ್ಯ ಸರ್ಕಾರ ಈ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಯಿತು. ಇಂದು ಈ ಯೋಜನೆಗಳು ಜನರಿಗೆ ಆರ್ಥಿಕ ಶಕ್ತಿಯನ್ನು ತುಂಬಿವೆ ಎಂದರು. ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಎಂ.ಎಂ. ಹಿರೇಮಠ ಮಾತನಾಡಿ, ಗ್ಯಾರಂಟಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಜಿಲ್ಲೆಯಲ್ಲಿ ಸಮಿತಿ ರಚಿಸಿ, ಅದರ ಕಚೇರಿ ಉದ್ಘಾಟನೆ ಮಾಡಲಾಯಿತು. ಮುಂದಿನ ದಿನಮಾನಗಳಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಮನ್ವಯದೊಂದಿಗೆ ಗ್ಯಾರಂಟಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜನರಿಗೆ ತಲುಪಿಸಲು ಕಾರ್ಯನಿರ್ವಹಿಸಲಾಗುವುದು ಎಂದರು. ಶಾಸಕ ಹಾಗೂ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸವರಾಜ ಶಿವಣ್ಣನವರ, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್.ಗಾಜಿಗೌಡ್ರ, ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಧಿಕಾರಿ ಅಕ್ಷಯ ಶ್ರೀಧರ, ದೇವಗಿರಿ ಗ್ರಾಪಂ ಅಧ್ಯಕ್ಷ ಪ್ರಭಾಕರ ಪಾರಿಗಂಟಿ, ಕೆಸಿಸಿ ಬ್ಯಾಂಕ್ ನಿರ್ದೇಶಕ ಕೊಟ್ರೇಶಪ್ಪ ಬಸೇಗಣ್ಣಿ, ಸಂಜೀವಕುಮಾರ ನೀರಲಗಿ ಇತರರು ಇದ್ದರು.