ಜಿಲ್ಲೆಯಲ್ಲಿ ನೂರೊಂದು ಶಾಲೆಗಳು ಅಭಿವೃದ್ಧಿಯಾಗಲು ಕ್ರಮ

| Published : Sep 06 2024, 01:13 AM IST

ಸಾರಾಂಶ

ಜಿಲ್ಲೆಯಲ್ಲಿ ನೂರೊಂದು ಶಾಲೆಗಳು ಅಭಿವೃದ್ಧಿಯಾಗಲು ಕ್ರಮ

ಕನ್ನಡಪ್ರಭ ವಾರ್ತೆ ದೇವನಹಳ್ಳಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿರುವ ನೂರೊಂದು ಸರ್ಕಾರಿ ಶಾಲೆಗಳನ್ನು ಪ್ರಥಮ ಹಂತದಲ್ಲಿ ಅಭಿವೃದ್ಧಿಯಾಗಲು ಕ್ರಮ ಕೈಗೊಳ್ಳಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯಹಾರಗಳ ಸಚಿವ ಕೆ.ಹೆಚ್‌.ಮುನಿಯಪ್ಪ ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಶಾಲಾ ಶಿಕ್ಷಣ ಇಲಾಖೆ, ತಾಲೂಕು ಆಡಳಿತ ಇವರ ಸಂಯುಕ್ತಾಶ್ರಯದಲ್ಲಿ ಇಲ್ಲಿನ ಡಾ.ಅಂಬೇಡ್ಕರ್‌ ಭವನದಲ್ಲಿ ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎಲ್ಲ ಶಾಲೆಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ಜಿಲ್ಲಾಧಿಕಾರಿಗಳು ಹಾಗೂ ಜಿ.ಪಂ.ಕಾರ್ಯನಿರ್ವಹಣಾಧಿಕಾರಿಗಳು ಸೇರಿ ಜಿಲ್ಲೆಯ ಪಂಚಾಯಿತಿ ಕೇಂದ್ರಗಳಲ್ಲಿನ ನೂರೊಂದು ಸರ್ಕಾರಿ ಶಾಲೆಗಳನ್ನು ನವೀಕರಣ ಮಾಡಿ ಗುಣಮಟ್ಟದ ಶೌಚಾಲಯ, ಕುಡಿಯುವ ನೀರು, ಆಟದ ಮೈದಾನ ಅಲ್ಲದೆ ಪೀಟೋಪಕರಣಗಳನ್ನು ಸಹ ಒದಗಿಸಬೇಕೆಂದು ತಿಳಿಸಲಾಗಿದೆ ಎಂದು ಹೇಳಿದರು.

ದೇಶದ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾಗಿದೆ. ಶಿಕ್ಷಕರು ತಮ್ಮ ಮಕ್ಕಳಿಗೆ ಹೇಗೆ ಶಿಕ್ಷಣ ನೀಡುತ್ತೀರಿ ಅದೇ ರೀತಿಯಲ್ಲಿ ಶಾಲೆಯ ಎಲ್ಲ ಮಕ್ಕಳಿಗೂ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನಿಡಬೇಕು ಎಂದರು.

ಸೂರಪಲ್ಲಿ ಆನಂದಾಶ್ರಮದ ಅಧ್ಯಕ್ಷ ಶ್ರೀ ಸೂರ್ಯನಾರಾಯಣಸ್ವಾಮಿ ಉಪನ್ಯಾಸ ನೀಡಿ, ಶಿಕ್ಷಕರಾದವರು ಮಕ್ಕಳಿಗೆ ಶಿಕ್ಷಣ ನೀಡುವುದರ ಜೊತೆಗೆ ಮಾನವೀಯ ಮೌಲ್ಯ, ನಮ್ಮ ದೇಶದ ಸಂಸ್ಕೃತಿಯನ್ನು ಕಲಿಸಬೇಕು ಎಂದು ಹೇಳಿದರು.

ಸಮಾರಂಭದಲ್ಲಿ ಜಿಲ್ಲಾ ಮಟ್ಟದ ಪ್ರಶಸ್ತಿ ಪಡೆದ ಶಿಕ್ಷಕರಿಗೆ ಹಾಗೂ ತಾಲೂಕು ಮಟ್ಟದ ಪ್ರತಿಭಾವಂತ ಶಿಕ್ಷಕರಿಗೆ ಸನ್ಮಾನಿಸಲಾಯಿತು.

ಜಿಲ್ಲಾಧಿಕಾರಿ ಡಾ.ಎನ್‌.ಶಿವಶಂಕರ್‌, ಜಿಪಂ ಸಿಇಒ ಡಾ.ಕೆ.ಎನ್‌.ಅನುರಾಧ, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೃಷ್ಣಮೂರ್ತಿ, ತಹಶೀಲ್ದಾರ್‌ ಬಾಲಕೃಷ್ಣ, ತಾಲೂಕು ಪಂಚಾಯಿತಿ ಇಒ ಶ್ರೀನಾಥಗೌಡ, ವಿಜಯಪುರ ಪುರಸಭೆ ಮುಖ್ಯಾಧಿಕಾರಿ ಜಿ.ಆರ್‌.ಸಂತೋಷ್‌, ಬಯಪ ಅಧ್ಯಕ್ಷ ವಿ.ಶಾಂತಕುಮಾರ್‌, ಸದಸ್ಯರುಗಳಾದ ವಿ.ಮಂಜುನಾಥ್‌, ಪ್ರಸನ್ನಕುಮಾರ್‌, ರಾಮಚಂದ್ರಪ್ಪ, ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಕೆ.ಸಿ.ಮಂಜುನಾಥ್‌, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ಬಿ.ರಾಜಣ್ಣ, ತಾಲೂಕು ಅಧ್ಯಕ್ಷ ಸಿ.ಜಗನ್ನಾಥ್‌ ಉಪಸ್ಥಿತರಿದ್ದರು.