ಮಂಡ್ಯ ವೈದ್ಯಕೀಯ ಕಾಲೇಜು ಮೇಲ್ದರ್ಜೆಗೆರಿಸಲು ಕ್ರಮ: ಸಚಿವ ಎನ್.ಚಲುವರಾಯಸ್ವಾಮಿ

| Published : Jul 25 2025, 12:31 AM IST

ಮಂಡ್ಯ ವೈದ್ಯಕೀಯ ಕಾಲೇಜು ಮೇಲ್ದರ್ಜೆಗೆರಿಸಲು ಕ್ರಮ: ಸಚಿವ ಎನ್.ಚಲುವರಾಯಸ್ವಾಮಿ
Share this Article
  • FB
  • TW
  • Linkdin
  • Email

ಸಾರಾಂಶ

ಮಂಡ್ಯ ವೈದ್ಯಕೀಯ ಕಾಲೇಜಿನ ಹಾಲಿ ಆಸ್ಪತ್ರೆಯಲ್ಲಿ 400 ಹಾಸಿಗೆಗಳಿಗೆ ಅನುಮೋದನೆ ಇದ್ದರೂ ಸಹ 800 ಕ್ಕೂ ಅಧಿಕ ರೋಗಿಗಳನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೀಗಾಗಿ ಇದನ್ನು 850 ಹಾಸಿಗೆಗಳ ಆಸ್ಪತ್ರೆಯಾಗಿ ಮೇಲ್ದರ್ಜೆಗೆರಿಸುವ ಅಗತ್ಯ ಇದೆ ಸಚಿವ ಚಲುವರಾಯಸ್ವಾಮಿ ಗಮನ ಸೆಳೆದರು.

ಕನ್ನಡಪ್ರಭ ವಾರ್ತೆ ಮಂಡ್ಯ

ಮಂಡ್ಯ ವೈದ್ಯಕೀಯ ಕಾಲೇಜು ಮೇಲ್ದರ್ಜೆಗೆರಿಸುವ ಜೊತೆಗೆ ನವೀಕರಣ ಕಾಮಗಾರಿಗಳಿಗೆ ಅಗತ್ಯ ಅನುದಾನ ಒದಗಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಶರಣು ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.

ಬೆಂಗಳೂರಿನ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ನಡೆದ ಮಂಡ್ಯ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆ ಅಭಿವೃದ್ಧಿ ಕುರಿತು ವಿಸ್ತೃತ ಚರ್ಚೆ ನಂತರ ಸಚಿವರು ಜಿಲ್ಲಾ ಆಸ್ಪತ್ರೆಗೆ ಎಲ್ಲಾ ರೀತಿಯ ಅಗತ್ಯ ನೆರವು ನೀಡುವ ಭರವಸೆ ನೀಡಿದರು.

ಹಾಲಿ ಆಸ್ಪತ್ರೆಯಲ್ಲಿ 400 ಹಾಸಿಗೆಗಳಿಗೆ ಅನುಮೋದನೆ ಇದ್ದರೂ ಸಹ 800 ಕ್ಕೂ ಅಧಿಕ ರೋಗಿಗಳನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೀಗಾಗಿ ಇದನ್ನು 850 ಹಾಸಿಗೆಗಳ ಆಸ್ಪತ್ರೆಯಾಗಿ ಮೇಲ್ದರ್ಜೆಗೆರಿಸುವ ಅಗತ್ಯ ಇದೆ ಸಚಿವ ಚಲುವರಾಯಸ್ವಾಮಿ ಗಮನ ಸೆಳೆದರು.

ಇದಕ್ಕೆ ಉತ್ತರಿಸಿದ ವೈದ್ಯಕೀಯ ಶಿಕ್ಷಣ ಸಚಿವರು, ಪರಿಸರ ಇಲಾಖೆ ಪರವಾನಗಿ ನವೀಕರಿಸಿ 500 ಹಾಸಿಗೆಗಳ ಮೇಲ್ದರ್ಜೆಗೆರಿಸಲು ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ತಿಳಿಸಿದರು. ತುರ್ತು ಚಿಕಿತ್ಸಾ ಘಟಕ ಹಾಗೂ ಲಘು ಶಸ್ತ್ರ ಚಿಕಿತ್ಸಾ ಘಟಕಗಳ ಕೊಠಡಿ ನಿರ್ಮಾಣ, ನವೀಕರಣ, ಕ್ಯಾನ್ಸರ್ ಚಿಕಿತ್ಸಾ ಘಟಕ, ಲಾಂಡ್ರಿ ಸೌಲಭ್ಯ, ಹೆಚ್ಚುವರಿ ಕೊಠಡಿಗಳ ನಿರ್ಮಾಣ, ವಿದ್ಯುತ್ ಪೂರೈಕೆ ಸೇರಿದಂತೆ ಆಸ್ಪತ್ರೆಗೆ ಅಗತ್ಯವಿರುವ ಎಲ್ಲಾ ಕಾಮಗಾರಿಗಳನ್ನು ಪಟ್ಟಿ ಮಾಡಿ ವಿಸ್ತೃತ ಯೋಜನೆ ಪ್ರಸ್ತಾವನೆ ಸಲ್ಲಿಸುವಂತೆ ಆಸ್ಪತ್ರೆ ಅಧಿಕಾರಿಗಳಿಗೆ ತಿಳಿಸಿದರು.

ಮಂಡ್ಯ ಜಿಲ್ಲೆಯ ಏಳು ತಾಲೂಕು ಆಸ್ಪತ್ರೆಗಳು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಉನ್ನತಿಕರಣಗೊಳಿಸುವ ಬಗ್ಗೆ ಅಧಿಕಾರಿಗಳಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ನಿರ್ದೆಶನ ನೀಡಿದರು‌‌‌‌.

ಅರಣ್ಯ ಸಚಿವ ಈಶ್ವರ್ ಖಂಡ್ರೆ ಉಪಸ್ಥಿತಿಯಲ್ಲಿ ಅರಣ್ಯ ಹಾಗೂ ಕಂದಾಯ ಅರಣ್ಯ ಮತ್ತು ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಸಚಿವರು, ಮಂಡ್ಯ ಜಿಲ್ಲೆಯ ಅರಣ್ಯದ ವಿಚಾರವಾಗಿ ನೆನಗುದಿಗೆ ಬಿದ್ದಿರುವ ಕಾಮಗಾರಿಗಳನ್ನು ಪೂರ್ಣಗೊಳಿಸುವ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಹಲವು ಸಲಹೆ, ಸೂಚನೆ ನೀಡಿದರು.

ಶ್ರೀರಂಗಪಟ್ಟಣ ತಾಲೂಕಿನ ಹಂಗರಹಳ್ಳಿ ಸೇರಿದಂತೆ ಜಿಲ್ಲೆಯ ವಿವಿಧೆಡೆ ಪರಿಭಾವಿತ ಅರಣ್ಯ ಪ್ರದೇಶಗಳ ನಕಾಶೆ ಸರಿಪಡಿಸಬೇಕು. ಕಂದಾಯ ಇಲಾಖೆಯೊಂದಿಗೆ ಜಂಟಿ ಸರ್ವೇ ನಡೆಸಿ ಗೊಂದಲಗಳನ್ನು ಇತ್ಯರ್ಥ ಪಡಿಸುವಂತೆ ಸೂಚಿಸಲಾಯಿತು.

ಬೆಂಗಳೂರು ಸೋಮವಾರ ಪೇಟೆ ರಾಜ್ಯ ಹೆದ್ದಾರಿ ಕಾಮಗಾರಿ, ವಿವಿಧ ರಸ್ತೆ ಕಾಮಗಾರಿಗಳು ನೀರು ಸರಬರಾಜು ಯೋಜನೆಗಳ ಅನುಷ್ಠಾನಕ್ಕೆ ಉಂಟಾಗಿರುವ ಅಡ್ಡಿ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಪರಸ್ಪರ ಸಮನ್ವಯತೆಯಿಂದ ಕಾರ್ಯ ನಿರ್ವಹಿಸಿ ಹಾಗೂ ಮಾನವ ವನ್ಯಜೀವಿ ಸಂಘರ್ಷ ತಡೆಗೆ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಡೀಸಿ ಡಾ.ಕುಮಾರ ಜಿಲ್ಲೆಯ ವ್ಯಾಪ್ತಿ ಅರಣ್ಯ ಇಲಾಖೆಯಿಂದ ಅನುಮತಿ ಬೇಕಿರುವ ಕಾಮಗಾರಿಗಳ ವಿವರ ಮಂಡಿಸಿದರು. ಜಿಲ್ಲೆಯ ಶಾಸಕರಾದ ರಮೇಶ ಬಂಡಿಸಿದ್ದೇಗೌಡ, ಪಿ.ರವಿಕುಮಾರ್, ದರ್ಶನ್ ಪುಟ್ಟಣ್ಣಯ್ಯ, ಶಾಸಕ ಕೆ.ಉದಯ್, ವಿಧಾನ ಪರಿಷತ್ ಸದಸ್ಯ ಮಧು ಮಾದೇಗೌಡ, ಮಂಡ್ಯ ವೈದ್ಯಕೀಯ ಕಾಲೇಜಿನ ಅಭಿವೃದ್ಧಿ ಬಗ್ಗೆ ಸಲಹೆ ಸೂಚನೆ ನೀಡಿದರು. ಈ ಬಗ್ಗೆ ಮೇಲ್ವಿಚಾರಣೆ ವಹಿಸುವಂತೆ ಜಿಲ್ಲಾಧಿಕಾರಿ ಡಾ.ಕುಮಾರ ಅವರಿಗೆ ಸಚಿವರು ಸೂಚಿಸಿದರು.

ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮಹಮದ್ ಮೊಹಿಸಿನ್, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತಾ, ಮಂಡ್ಯ ವೈದ್ಯಕೀಯ ಕಾಲೇಜು ನಿರ್ದೇಶಕ ಡಾ.ನರಸಿಂಹಸ್ವಾಮಿ ಹಾಗೂ ಅರಣ್ಯ, ಕಂದಾಯ, ಆರೋಗ್ಯ ಇಲಾಖೆ ಇತರೆ ಅಧಿಕಾರಿಗಳು ಭಾಗವಹಿಸಿದ್ದರು.