ಸಾರಾಂಶ
ಚಳ್ಳಕೆರೆ: ಸರ್ಕಾರದ ಕೆಲಸ ದೇವರ ಕೆಲಸವೆಂದು¨ ಘೋಷವಾಕ್ಯವನ್ನು ನಾವೆಲ್ಲರೂ ಪ್ರತಿನಿತ್ಯ ನೆನಪಿಸಿಕೊಳ್ಳಬೇಕು. ಸರ್ಕಾರದ ಸೇವಕರು ಜನಸೇವಕರಾಗಿ ಕಾರ್ಯನಿರ್ವಹಿಸಿದಲ್ಲಿ ಮಾತ್ರ ನಿಮಗೂ ಹಾಗೂ ಇಲಾಖೆಗೂ ಗೌರವ. ಯಾವುದೇ ಅಧಿಕಾರಿ, ಸಿಬ್ಬಂದಿಯಾಗಲಿ ನಿಯಮಬಾಹಿರ ಚಟುವಟಿಕೆಯಲ್ಲಿ ತೊಡಗಿದರೆ, ಅನಗತ್ಯ ಸುಳ್ಳು ಮಾಹಿತಿ ನೀಡಿದವರ ವಿರುದ್ಧ ಕ್ರಮ ಕೈಗೊಳ್ಳಲು ಹಿರಿಯ ಅಧಿಕಾರಿಗಳಿಗೆ ಶಿಫಾರಸ್ಸು ಮಾಡಲು ಹಿಂಜರಿಯುವುದಿಲ್ಲ ಎಂಬ ಎಚ್ಚರಿಕೆಯನ್ನು ತಾಲ್ಲೂಕು ಉಸ್ತುವಾರಿ ಅಧಿಕಾರಿ ಹಾಗೂ ಪರಿಶಿಷ್ಟ ವರ್ಗಗಳ ಇಲಾಖೆ ನಿರ್ದೇಶಕ ಟಿ.ಯೋಗೇಶ್ ಎಚ್ಚರಿಕೆ ನೀಡಿದರು.
ಶನಿವಾರ ತಾಲೂಕು ಪಂಚಾಯಿತಿ ಕಾರ್ಯಾಲಯದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಸರ್ಕಾರದ ಯೋಜನೆಗಳ ಅನುಷ್ಠಾನ ಹಾಗೂ ಸಾರ್ವಜನಿಕರೊಂದಿಗೆ ಉತ್ತಮ ಸಂಪರ್ಕವನ್ನಿಟ್ಟುಕೊಂಡು ಕೆಲಸ ನಿರ್ವಹಿಸಿ, ಸುಳ್ಳು ಹೇಳುವುದು ಕೆಲಸದಲ್ಲಿ ನಿರ್ಲಕ್ಷ್ಯ ತೋರುವುದು ಒಳ್ಳೆಯ ಲಕ್ಷಣವಲ್ಲ ಎಂದರು.
ಇಲಾಖೆಯ ಪ್ರತಿಯೊಬ್ಬ ಅಧಿಕಾರಿ ಹಾಗೂ ಸಿಬ್ಬಂದಿ ಕಾರ್ಯದಕ್ಷತೆಯ ಬಗ್ಗೆ ನಿರಂತರ ಪರಿಶೀಲನೆ ನಡೆಸಲಾಗುತ್ತದೆ. ಲೋಪಕಂಡುಬಂದರೆ ಅಂತಹವರ ವಿರುದ್ಧ ನಿದ್ರಾಕ್ಷಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.ಸರ್ಕಾರ ಎಲ್ಲಾ ರೀತಿಯ ಸೌಲಭ್ಯ ನೀಡಿದರೂ, ಕೆಲ ಅಧಿಕಾರಿಗಳು ಕಚೇರಿಯಲ್ಲಿ ಕುಳಿತು ಕಾಲಹರಣ ಮಾಡುವ ಬಗ್ಗೆ ಮಾಹಿತಿ ಬಂದಿದೆ. ಮುಂದಿನ ದಿನಗಳಲ್ಲಿ ಕಡ್ಡಾಯವಾಗಿ ಅಧಿಕಾರಿಗಳು ಈ ವರ್ತನೆಯನ್ನು ಬದಲಾಯಿಸಿಕೊಳ್ಳಬೇಕು ಎಂದರು.
ಚಳ್ಳಕೆರೆ ತಾಲೂಕು ಶೇಂಗಾ ಬೆಳೆಗೆ ಹೆಸರು ಮಾಡಿದ್ದು, ಕೃಷಿ ಅಧಿಕಾರಿಗಳು ಈ ಬಗ್ಗೆ ಸೂಕ್ತ ಮಾರ್ಗದರ್ಶನ ನೀಡಬೇಕಲ್ಲದೆ, ಶೇಂಗಾದಿಂದ ತಯಾರಾಗುವ ಉತ್ಪನ್ನಗಳ ಬಗ್ಗೆ ತಿಳಿಸಬೇಕು ಎಂದರು.ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿ ದಯಾನಂದಗೆ ಶಾಲಾ, ಕಾಲೇಜು ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ಜಲಜೀವನ್‌ಮೀಷನ್ ಯೋಜನೆಯಡಿ ಕುಡಿಯುವ ನೀರಿನ ಸಂಪರ್ಕ ಕಲ್ಪಿಸುವಂತೆ ಸೂಚಿಸಿದರು.
ಪೌರಾಯುಕ್ತ ಜಗರೆಡ್ಡಿ, ತಹಸೀಲ್ದಾರ್ ರೇಹಾನ್‌ಪಾಷ, ಜಿಲ್ಲಾ ಬಿಸಿಎಂ ಅಧಿಕಾರಿ ದಿವಾಕರ, ಸಹಾಯಕ ನಿರ್ದೇಶಕ ಸಂಪತ್ತು, ಸಂತೋಷ್ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.